10 ಎಚ್‌ಪಿ ಯವರೆಗೆ ಉಚಿತ ವಿದ್ಯುತ್

KannadaprabhaNewsNetwork |  
Published : Jul 27, 2024, 12:51 AM IST

ಸಾರಾಂಶ

ಹತ್ತು ಅಶ್ವಶಕ್ತಿವರೆಗಿನ ವಿದ್ಯುತ್ ಮಗ್ಗಗಳಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ನೇಕಾರರ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ಹತ್ತು ಅಶ್ವಶಕ್ತಿವರೆಗಿನ ವಿದ್ಯುತ್ ಮಗ್ಗಗಳಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ನೇಕಾರರ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ವಿಧಾನ ಪರಿಷತ್ತಿನಲ್ಲಿ ಮಂಗಳವಾರ ಅರ್ಧ ಗಂಟೆಯ ಚರ್ಚೆ ವೇಳೆ ಮಾತನಾಡಿದ ಅವರು, ಶೂನ್ಯದಿಂದ ಹತ್ತು ಅಶ್ವಶಕ್ತಿವರೆಗೆ ವಿದ್ಯುತ್ ಮಗ್ಗಗಳಿಗೆ ಉಚಿತ ವಿದ್ಯುತ್ ಒದಗಿಸಲಾಗಿದೆ. 10.1 ಅಶ್ವಶಕ್ತಿಯಿಂದ 20 ಅಶ್ವಶಕ್ತಿವರೆಗೆ ಪ್ರತಿ ಯೂನಿಟ್‌ಗೆ ₹ 1.25 ದರದಲ್ಲಿ ವಿದ್ಯುತ್ ಒದಗಿಸಲಾಗುವುದು ಎಂದು ಮಾಹಿತಿ ನೀಡಿದರು.ನೇಕಾರರು ಬದುಕು ಕಟ್ಟಿಕೊಳ್ಳಲು ಅಗತ್ಯವಿರುವ ಎಲ್ಲ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದ್ದು, ಈ ಕ್ಷೇತ್ರದಲ್ಲಿ ಪರಿಣಿತಿ ಇರುವವರ ಸಲಹೆಗಳನ್ನು ಪಡೆದು ಯೋಜನೆಗಳನ್ನು ಹಂತ,ಹಂತವಾಗಿ ಅನುಷ್ಠಾನಕ್ಕೆ ತರಲಾಗುವುದು. ನಷ್ಟದಲ್ಲಿರುವ ಕೈಮಗ್ಗ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಜವಳಿ ಮೂಲ ಸೌಕರ್ಯ ಅಭಿವೃದ್ಧಿ ನಿಗಮಗಳನ್ನು ಲಾಭದಾಯಕವಾಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳುವ ಅಗತ್ಯವಿದ್ದು, ಇದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು.ಸಹಕಾರ ಸಂಘಗಳು ಮತ್ತು ಸಹಕಾರ ಬ್ಯಾಂಕುಗಳ ಮೂಲಕ ನೇಕಾರರಿಗೆ ಶೂನ್ಯಬಡ್ಡಿದರದಲ್ಲಿ ಮತ್ತು ರಿಯಾಯಿತಿ ಬಡ್ಡಿದರದಲ್ಲಿ ಒಟ್ಟು ಸುಮಾರು ₹ 40 ಕೋಟಿ ಸಾಲ ವಿತರಣೆ ಮಾಡಲಾಗಿದೆ. ನೇಕಾರರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿದ್ದು, ಉದ್ಯೋಗದಿಂದ ವಿಮುಖರಾಗುವುದನ್ನು ತಡೆಗಟ್ಟಲು ಸರ್ಕಾರ ಅಗತ್ಯ ನೆರವು ನೀಡಲಿದೆ. ನೇಕಾರರ ಮಕ್ಕಳು ಅನ್ಯ ಉದ್ಯೋಗದತ್ತ ಆಕರ್ಷಿತರಾಗುತ್ತಿರುವುದೂ ಒಂದು ಕಾರಣವಾಗಿದೆ ಎಂದು ತಿಳಿಸಿದರು.

ಕೈಮಗ್ಗ ನೇಕಾರಿಕೆಯಲ್ಲಿ ಉತ್ಪಾದನಾ ವೆಚ್ಚ ಅಧಿಕವಾಗುವುದರಿಂದ ಹೊಸ ತಂತ್ರಜ್ಞಾನ ಅಳವಡಿಕೆಗೆ ಆದ್ಯತೆ ನೀಡುವುದು ಅನಿವಾರ್ಯವಾಗಿದೆ. ಹೀಗಾಗಿ ವಿದ್ಯುತ್ ಕೈ ಮಗ್ಗಗಳಿಗೆ ಆದ್ಯತೆ ನೀಡಲಾಗುತ್ತದೆ. ಮೀನುಗಾರರ ಮಾದರಿಯಲ್ಲಿ ನೇಕಾರರಿಗೂ ವಸತಿ ಸೌಕರ್ಯ ಕಲ್ಪಿಸಲು ವಸತಿ ಸಚಿವರೊಂದಿಗೆ ಶೀಘ್ರವೇ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸದನದಲ್ಲಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.ತಮಿಳುನಾಡು ರಾಜ್ಯ ಸರ್ಕಾರದ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಜವಳಿ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ರಾಜ್ಯ ರೇಷ್ಮೆ ಅಭಿವೃದ್ಧಿ ನಿಗಮಗಳನ್ನು ವಿಲೀನಗೊಳಿಸಿ ಒಂದೇ ನಿಗಮ ರಚನೆ ಮಾಡುವ ಉದ್ದೇಶವಿದೆ.

ಶಿವಾನಂದ ಪಾಟೀಲ, ಜವಳಿ ಸಚಿವ

PREV

Recommended Stories

ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ