ಕನ್ನಡಪ್ರಭ ವಾರ್ತೆ ಕೆಜಿಎಫ್
ಕೆಜಿಎಫ್ ವಿಧಾನಸಭೆ ಕ್ಷೇತ್ರದ ಮೈನಿಂಗ್ ಭಾಗದಲ್ಲಿ ವಾಸಿಸುವ ಸಾರ್ವಜನಿಕರು ತೀರಾ ಬಡವರಾಗಿದ್ದು ದೊಡ್ಡ ದೊಡ್ಡ ಆಸ್ಪತ್ರೆಗಳಲ್ಲಿ ಉನ್ನತ ಮಟ್ಟದ ಚಿಕಿತ್ಸೆ ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಉಚಿತ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುವುದರಿಂದ ಇಂಥ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ನಗರಸಭೆ ಅಧ್ಯಕ್ಷೆ ಇಂದಿರಾಗಾಂಧಿ ದಯಾಶಂಕರ್ ಹೇಳಿದರು.ನಗರದ ಸ್ವಾಮಿನಾಥಪುರಂ ಓಟ್‌ಲೈನ್‌ನಲ್ಲಿರುವ ತಿರುವೆಂಗಟ ಮುದಿಯನ್ ದೇವಸ್ಥಾನ ಹಾಗೂ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ ಆಡಳಿತ ಮಂಡಳಿ ಹಾಗೂ ಆರ್‌ಎಲ್ ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಶರವೇಗದಲ್ಲಿ ಮುನ್ನಡೆಯುತ್ತಿರುವ ಇಂದಿನ ಸಮಾಜದಲ್ಲಿ ನಾಗರಿಕರು ತಮ್ಮ ಆರೋಗ್ಯದ ಕಡೆ ಗಮನಹರಿಸುವುದು ಕಡಿಮೆಯಾಗುತ್ತಿದ್ದು, ಕಾಯಿಲೆ ಉಲ್ಬಣಗೊಂಡಾಗಲೇ ಆಸ್ಪತ್ರೆಗಳಿಗೆ ತೆರಳುತ್ತಾರೆ. ಕಾಯಿಲೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿ ೬ ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ದೇಹದಲ್ಲಿ ಕಂಡುಬರುವ ವ್ಯತ್ಯಾಸಗಳನ್ನು ಪತ್ತೆ ಹಚ್ಚಿ ಗುಣಪಡಿಸಲು ಸುಲಭವಾಗಲಿದೆ ಎಂದರು.
ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜಯಪಾಲ್ ಮಾತನಾಡಿ, ಆರೋಗ್ಯ ತಪಾಸಣೆಯನ್ನು ಪ್ರತಿಯೊಬ್ಬರೂ ಮಾಡಿಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲೇ ಮೃತಪಡುವವರ ಸಂಖ್ಯೆ ಏರಿಕೆಯಾಗುತ್ತಿರುವುದು ಆಂತಕಕಾರಿ ಸಂಗತಿಯಾಗಿದೆ. ಆದ್ದರಿಂದ ಇಂದಿನ ಯುವಕರು ತಮ್ಮ ಆರೋಗ್ಯದ ಕಡೆ ಹೆಚ್ಚು ಗಮಹರಿಸಬೇಕು. ಆಸ್ಪತ್ರೆಗಳಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.ಆರ್.ಎಲ್.ಜಾಲಪ್ಪ ಆಸ್ಪತ್ರೆಯ ಪಿಆರ್‌ಒ ಲಕ್ಷ್ಮಣ್ ಮಾತನಾಡಿ, ಆರ್ ಎಲ್ ಜಾಲಪ್ಪ ರವರ ಜನ್ಮಶತಮಾನೋತ್ಸವ ಪ್ರಯುಕ್ತ ೧೦ ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಸುಸಜ್ಜಿತ ಮೊಬೈಲ್ ವಾಹನವನ್ನು ತಯಾರು ಮಾಡಲಾಗಿದ್ದು, ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುತ್ತಿದೆ. ಈ ವಾಹನದಲ್ಲಿ ಎಲ್ಲಾ ಸೌಲಭ್ಯಗಳು ಲಭ್ಯವಿರಲಿದ್ದು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯ ಆಡಳಿತ ಮಂಡಳಿ ಟ್ರಸ್ಟಿ ಎನ್.ಆರ್.ಪುರುಷೋತ್ತಮ ಮಾತನಾಡಿ, ಸುಮಾರು ೧೩೫ ವರ್ಷಗಳ ಇತಿಹಾಸವುಳ್ಳ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಅಷ್ಟಮಿ ಹಾಗೂ ಪೌರ್ಣಮಿಗಳಲ್ಲಿ ವಿಶೇಷವಾದ ಪೂಜೆ, ಹೋಮ, ಹವನಗಳನ್ನು ಏರ್ಪಡಿಸಿಕೊಂಡು ಬರಲಾಗುತ್ತಿದ್ದು, ದೂರದ ಊರುಗಳಿಂದ ಭಕ್ತರು ಆಗಮಿಸಿ ದೇವರ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ದೇವರ ಸೇವೆ ಮಾಡುವ ಅವಕಾಶ ಲಭಿಸಿರುವುದು ನನ್ನ ಪೂರ್ವಜನ್ಮದ ಪುಣ್ಯವೆಂದರು.ದೇವಾಲಯದ ಟ್ರಸ್ಟಿ ಶಾಂತಮ್ಮ, ಮಗೇಂದ್ರನ್, ವೈದ್ಯರಾದ ಡಾ.ಕಾರ್ತಿಕ್ ಮತ್ತು ತಂಡ ಸೇರಿದಂತೆ ಇತರರು ಹಾಜರಿದ್ದರು.