ಹೊಸಪೇಟೆ: ಸುಮಾರು ₹104 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಜಿಲ್ಲಾಸ್ಪತ್ರೆಯ ವೈದ್ಯಕೀಯ ಸೇವೆಗಳಿಗೆ ಅಗತ್ಯವಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ನೇಮಕಾತಿ ಸೇರಿದಂತೆ ಎಲ್ಲ ಆಡಳಿತಾತ್ಮಕ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಮುಂದಿನ ಮೂರರಿಂದ ಮೂರೂವರೆ ತಿಂಗಳೊಳಗೆ ಆಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್ ತಿಳಿಸಿದರು.
ರಾಜ್ಯದ ಸರ್ಕಾರಿ ಜಿಲ್ಲಾಸ್ಪತ್ರೆಗಳ ಪೈಕಿ ಅತ್ಯುತ್ತಮ ಕಟ್ಟಡಗಳಲ್ಲಿ ವಿಜಯನಗರ ಜಿಲ್ಲಾಸ್ಪತ್ರೆಯೂ ಒಂದಾಗಿದೆ. ಕಟ್ಟಡ ಉದ್ಘಾಟನೆಯಾಗಿದ್ದರೂ ವೈದ್ಯಕೀಯ ಉಪಕರಣ ಸ್ಥಳಾಂತರ ಹಾಗೂ ಅಗತ್ಯ ಸಿಬ್ಬಂದಿ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಬೇಕಿರುವುದರಿಂದ ಸಾರ್ವಜನಿಕ ಸೇವೆಗೆ ಪೂರ್ಣ ಪ್ರಮಾಣದಲ್ಲಿ ಸಜ್ಜಾಗಲು ಸುಮಾರು ಮೂರು ತಿಂಗಳು ಕಾಲಾವಕಾಶ ಬೇಕಾಗುತ್ತದೆ ಎಂದರು.
ಜಿಲ್ಲೆಯ ಭವಿಷ್ಯದ ದೃಷ್ಟಿಯಿಂದ ಸುಮಾರು 5 ಎಕರೆ ಪ್ರದೇಶದಲ್ಲಿ ವ್ಯವಸ್ಥೆ ರೂಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ಆಯುರ್ವೇದ ಆಸ್ಪತ್ರೆ, ಕ್ಯಾನ್ಸರ್ ಘಟಕ, ನರ್ಸಿಂಗ್, ಪ್ಯಾರಾಮೆಡಿಕಲ್ ಕಾಲೇಜು ಹಾಗೂ ವೈದ್ಯಕೀಯ ಕಾಲೇಜು ಸೇರಿದಂತೆ ವಿವಿಧ ಸೌಲಭ್ಯಗಳು ಬರುವ ನಿರೀಕ್ಷೆಯಿದೆ. ಸದ್ಯ ತಾಲೂಕಾಸ್ಪತ್ರೆ ಎಂದಿನಂತೆ ಕಾರ್ಯ ನಿರ್ವಹಿಸಲಿದ್ದು, ಸಣ್ಣಪುಟ್ಟ ತಪಾಸಣೆಗಳಿಗೆ ಜನರು ಅನಗತ್ಯವಾಗಿ ದೂರದ ಆಸ್ಪತ್ರೆಗೆ ಅಲೆಯುವುದು ತಪ್ಪಲಿದೆ ಎಂದು ಹೇಳಿದರು.ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಮಾತನಾಡಿ, ವಿಜಯನಗರ ಹೊಸ ಜಿಲ್ಲೆಯಾಗಿದ್ದು, ಇಲ್ಲಿನ ಸಾರ್ವಜನಿಕರ ಆರೋಗ್ಯ ಸುಧಾರಣೆಗೆ ರಾಜ್ಯ ಸರ್ಕಾರ ಕ್ರಮವಹಿಸಿದ್ದು, ಜಿಲ್ಲಾ ಆಸ್ಪತ್ರೆಯ ಆರಂಭದೊಂದಿಗೆ ವಿಜಯನಗರ ಜಿಲ್ಲೆಯಲ್ಲಿ ಆರೋಗ್ಯ, ಉದ್ಯೋಗ ಮತ್ತು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.
ಸ್ಥಳೀಯ ಶಾಸಕ ಎಚ್.ಆರ್.ಗವಿಯಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾಸ್ಪತ್ರೆ ಉನ್ನತಿಕರಣ, ಆಧುನಿಕ ವೈದ್ಯಕೀಯ ಸೌಲಭ್ಯ ಪೂರೈಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಪ್ರತಿ ಜಿಲ್ಲಾಸ್ಪತ್ರೆಗೆ ಪೂರಕವಾಗಿ ಆಯಾ ಜಿಲ್ಲೆಯಲ್ಲಿ ವೈದ್ಯಕೀಯ ಮಹಾ ವಿದ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅದು ನಮ್ಮ ಹೊಸಪೇಟೆ ನಗರಕ್ಕೂ ಬರಲಿದೆ ಎಂದು ತಿಳಿಸಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಲ್.ಆರ್. ಶಂಕರ ನಾಯ್ಕ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿಲ್ಲಾ ಆಸ್ಪತ್ರೆಗೆ ದಾರಿ ಮಾಡಿಕೊಳ್ಳಲು ಒಂದು ಎಕರೆ ಭೂಮಿ ದಾನ ನೀಡಿರುವ ಮಹಾದಾನಿ ವಿದ್ಯಾಬಾಯಿ ಅವರನ್ನು ಹಾಗೂ ಸುಸಜ್ಜಿತ ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ಶ್ರಮಿಸಿದ ಅಧಿಕಾರಿ, ಸಿಬ್ಬಂದಿ, ಗುತ್ತಿಗೆದಾರರನ್ನು ಸನ್ಮಾನಿಸಿ ಗೌರವಿಸಲಾಯಿತು.