ಹಾವೇರಿ: ವರದಾ-ಬೇಡ್ತಿ ನದಿ ಜೋಡಣೆ ಯೋಜನೆಗೆ ನನ್ನ ಸಂಪೂರ್ಣ ಬೆಂಬಲವಿದೆ. ಡಿಪಿಆರ್ ಮಾಡಲಾಗುತ್ತಿದ್ದು, ಯೋಜನೆ ಸಾಧಕ-ಬಾಧಕಗಳ ಕುರಿತು ತಜ್ಞರಿಂದ ಸಲಹೆ ಪಡೆದುಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಎಂದು ತಿಳಿಸಿದರು.ನಗರದ ದಿ.ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.1994ರಿಂದ ವರದಾ- ಬೇಡ್ತಿ ನದಿ ಜೋಡಣೆ ಕುರಿತು ಪ್ರಸಾಪ್ತವಾಗುತ್ತಿದೆ. ಪ್ರಕೃತಿಯ ಸದುಪಯೋಗ ಹಾಗೂ ಸದ್ವಿನಿಯೋಗ ಮಾಡಿಕೊಳ್ಳಬೇಕು. ಎಲ್ಲರೂ ಸೇರಿ ಚರ್ಚಿಸಿದಾಗ ಅನೇಕ ಸಮಸ್ಯೆಗಳು ಬಗೆಹರಿಯುತ್ತವೆ. ಈ ವಿಷಯದಲ್ಲಿ ರಾಜಕಾರಣ ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.ಜಿಲ್ಲೆಯಲ್ಲಿ ಮಣ್ಣು-ಮರಳು ಅಕ್ರಮ ಸಾಗಾಣಿಕೆ ಬಗ್ಗೆ ನಿಗಾವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ವಿಷಯವಾಗಿ ತನಿಖೆ ನಡೆಸಿ ಸಂಬಂಧಿಸಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮವಹಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಜಿಲ್ಲೆಗೆ ಮಲ್ಟಿಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...ಹಾವೇರಿ ವೈದ್ಯಕೀಯ ಕಾಲೇಜು ಆವರಣದಲ್ಲಿ ಮಲ್ಟಿಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಜೊತೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹಂತ-ಹಂತವಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ಹಾವೇರಿ ವೈದ್ಯಕೀಯ ಕಾಲೇಜಿನಲ್ಲಿ ಪ್ರಸಕ್ತ 150 ಇರುವ ವೈದ್ಯಕೀಯ ಸೀಟುಗಳು 200ಕ್ಕೆ ಹೆಚ್ಚಿಸುವ ಅರ್ಹತೆ ಪಡೆದುಕೊಳ್ಳಲಾಗಿದೆ. ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ₹10ಕೋಟಿ ಮಂಜೂರು ಮಾಡಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಲಾಗುವುದು. ಜಿಲ್ಲೆಯ ಎಲ್ಲ ಶಾಸಕರು ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಿದ್ದಾರೆ ಎಂದು ತಿಳಿಸಿದರು.ಫೆ.13 ರಂದು ಸಮಾವೇಶ: ಹಾವೇರಿ ನಗರದಲ್ಲಿ ಫೆ.13 ರಂದು ಕಂದಾಯ ಇಲಾಖೆ ಹಕ್ಕುಪತ್ರ ವಿತರಣಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ಹೊಸಪೇಟೆ ಕಾರ್ಯಕ್ರಮಕ್ಕಿಂತ ಒಳ್ಳೆಯ ಕಾರ್ಯಕ್ರಮ ಮಾಡಲು ಉತ್ಸುಕರಾಗಿದ್ದೇವೆ ಎಂದರು.ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ. ರೈತರ ಖಾತೆಗೆ ನೇರ ಹಣ ವರ್ಗಾವಣೆಯಾಗುತ್ತದೆ. ಯಾವುದೇ ಮಧ್ಯವರ್ತಿಗಳಿಗೆ ಹೋಗುವುದಿಲ್ಲ. ಎಫ್‌ಎಂಕ್ಯೂ ಗುಣಮಟ್ಟ ಆಧರಿಸಿ ಮೆಕ್ಕೆಜೋಳ ಖರೀದಿಸಲಾಗುತ್ತಿದೆ ಎಂದು ತಿಳಿಸಿದರು. ಮನೆಗಳ ಹಸ್ತಾಂತರ: ನಗರದ ಹೊರವಲಯದಲ್ಲಿ ನಿರ್ಮಾಣ ಮಾಡುತ್ತಿರುವ ಜಿ ಪ್ಲಸ್ ಮನೆಗಳನ್ನು ಈವರೆಗೆ ಹಂಚಿಕೆ ಮಾಡಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ, ಎರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಮನೆಗಳನ್ನು ಹಸ್ತಾಂತರ ಮಾಡಲಾಗುವುದು ಎಂದು ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಜಿಪಂ ಸಿಇಒ ರುಚಿ ಬಿಂದಲ್, ಎಸ್ಪಿ ಯಶೋದಾ ವಂಟಗೋಡಿ ಇತರರು ಇದ್ದರು.