ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಬೆಂಗಳೂರಿನಲ್ಲಿ ಬುಧವಾರ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ಪಾರ್ಥೀವ ಶರೀರವನ್ನು ಗುರುವಾರ ಬೆಳಗ್ಗೆ ಬೆಳ್ತಂಗಡಿಗೆ ತರಲಾಯಿತು. ಹಳೆಕೋಟೆಯಲ್ಲಿರುವ ಅವರ ಮನೆಯಲ್ಲಿ ಅಂತಿಮ ದರ್ಶನದ ವಿಧಾನಗಳನ್ನು ನೆರವೇರಿಸಿ ಬಳಿಕ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಯಿತು.ಸಹಸ್ರಾರು ಮಂದಿ ಅಗಲಿದ ನಾಯಕನ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು. ಬೆಳ್ತಂಗಡಿ ಪೇಟೆಯ ಅಂಗಡಿ ಮಾಲಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಗೌರವ ಸಲ್ಲಿಸಿದರು. ಜಿಲ್ಲಾಧಿಕಾರಿ ಮುಲೈ ಮುಗಿಲನ್, ಎಸ್. ಪಿ. ರಿಷ್ಯಂತ್, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಹರೀಶ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪಸಿಂಹ ನಾಯಕ್, ಹರೀಶ್ ಕುಮಾರ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕರಾದ ಪ್ರಭಾಕರ ಬಂಗೇರ, ಜಿ.ಆರ್. ಲೋಬೋ, ಗಂಗಾಧರ ಗೌಡ, ರಮಾನಾಥ ರೈ, ಶಕುಂತಲಾ ಶೆಟ್ಟಿ, ರುಕ್ಮಯ ಪೂಜಾರಿ, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ ಪೂಜಾರಿ, ಕಲ್ಲಡ್ಕ ಪ್ರಭಾಕರ ಭಟ್, ಸಿಯೋನ್ ಆಶ್ರಮದ ಯು.ಸಿ. ಪೌಲೋಸ್, ಎಸ್. ಡಿ.ಎಂ. ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುರ್ಯಗುತ್ತು, ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಕುಶಾಲಪ್ಪ ಗೌಡ, ಗುರುದೇವ ಕಾಲೇಜಿನ ವಿದ್ಯಾರ್ಥಿಗಳು ಅಂತಿಮ ನಮನ ಸಲ್ಲಿಸಿದರು. ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಅಂತಿಮ ನಮನ ಸಲ್ಲಿಸಲಾಯಿತು.
ಅಂತ್ಯಸಂಸ್ಕಾರ: ಮಧ್ಯಾಹ್ನದವರೆಗೆ ಸಾವಿರಾರು ಮಂದಿ ಬಂಗೇರರ ಅಭಿಮಾನಿಗಳು ಅಂತಿಮ ದರ್ಶನ ಪಡೆದರು. ಬಳಿಕ ಸರ್ಕಾರದ ವತಿಯಿಂದ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಮೂರು ಬಾರಿ ಕುಶಾಲು ತೋಪು ಹಾರಿಸಿ ಗೌರವ ಸಲ್ಲಿಸಲಾಯಿತು. ನಂತರ ಅಲ್ಲಿಂದ ಶವವನ್ನು ಮೆರವಣಿಗೆಯಲ್ಲಿ ಕುವೆಟ್ಟು ಗ್ರಾಮದ ಕೇದೆ ಮನೆಯ ತನಕ ಕೊಂಡೊಯ್ಯಲಾಯಿತು. ಅಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಿಸಲಾಯಿತು.