ಮಡಿಕೇರಿ : ನಗರದ ಗಾಂಧಿ ಮಂಟಪದ ಬಳಿ ನಿರ್ಮಾಣವಾಗುತ್ತಿರುವ ಗಾಂಧಿ ಸ್ಮಾರಕ ಉದ್ಯಾನವನಕ್ಕೆ ಶಾಸಕರ ನಿಧಿಯಿಂದ 20 ಲಕ್ಷ ರು. ಬಿಡುಗಡೆ ಮಾಡಲಾಗಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರಸಭೆ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ, ಕನ್ನಡ ಸಾಹಿತ್ಯ ಪರಿಷತ್ತು, ಸರ್ವೋದಯ ಸಮಿತಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜಾನಪದ ಪರಿಷತ್ತು ಸಹಕಾರದಲ್ಲಿ ನಗರದ ಗಾಂಧಿ ಭವನದಲ್ಲಿ ಶುಕ್ರವಾರ ನಡೆದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ 157 ನೇ ಜನ್ಮ ವರ್ಷಾಚರಣೆ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ 122 ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ರಾಜ್ಯ ಸರ್ಕಾರ 100 ದಿನ ಪೂರೈಸಿದ ಹಿನ್ನೆಲೆಯಲ್ಲಿ ‘ದೃಢ ಕರ್ನಾಟಕದ ಸಂಕಲ್ಪ ಶತಕದ ಪಥ ಪ್ರಗತಿಯ ರಥ’ ಪುಸ್ತಕ ಬಿಡುಗಡೆ ಮಾಡಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ ಮಹಾತ್ಮ ಗಾಂಧೀಜಿ ಅವರ ಸತ್ಯ ಮತ್ತು ಅಹಿಂಸೆಯ ತತ್ವಗಳು ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಸರಳತೆ, ಪ್ರಾಮಾಣಿಕತೆ ಮತ್ತು ಆಡಳಿತದ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ಕೇಶವ ಕಾಮತ್ ಮಾತನಾಡಿ ಮಹಾತ್ಮ ಗಾಂಧೀಜಿ ಅವರು ಸ್ವಾತಂತ್ರ್ಯ ತಂದುಕೊಡುವಲ್ಲಿ ಅಹಿಂಸಾ ಮಾರ್ಗ ಅನುಸರಿಸಿ, ಯುವ ಪೀಳಿಗೆಗೆ ಮಾದರಿ ಎಂದರು.ಎಫ್‌ಎಂಸಿ ಕಾಲೇಜು ಪ್ರಾಂಶುಪಾ ಪ್ರೊ.ಮೇ.ಡಾ.ಬಿ.ರಾಘವ ಮಾತನಾಡಿ, ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜನ್ಮದಿನ ಒಂದೇ ದಿನವಾಗಿರುವುದು ಇತಿಹಾಸದ ವಿಶಿಷ್ಟ ಸಂಗತಿ ಎಂದರು. ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಬಿ.ಎಸ್.ಲೋಕೇಶ್ ಸಾಗರ್, ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ ಮಾತನಾಡಿದರು. ನಗರಸಭೆ ಅಧ್ಯಕ್ಷ ಪಿ.ಕಲಾವತಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ವಿ., ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚುಮ್ಮಿದೇವಯ್ಯ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಹೇಶ್, ಸರ್ವೋದಯ ಸಮಿತಿ ಸದಸ್ಯರಾದ ಅಂಬೆಕಲ್ಲು ನವೀನ್, ಮುದ್ದಯ್ಯ, ನಗರಸಭೆ ಸದಸ್ಯರಾದ ಮುದ್ದುರಾಜು ಇದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಸ್ವಾಗತಿಸಿದರು, ಪವನ್ ಕುಮಾರ್ ನಿರೂಪಿಸಿದರು. ಲಹರಿ ಶಿಕ್ಷಕರ ತಂಡದವರು ವಂದೇ ಮಾತರಂ, ನಾಡಗೀತೆ, ರೈತಗೀತೆ ಹಾಡಿದರು. ಕಲಾವಿದ ಈ.ರಾಜು ಮತ್ತು ತಂಡದವರು ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಹಾಡು ಹಾಡಿದರು. ಲೋಕೇಶ್ ಸಾಗರ್ ಮತ್ತು ತಂಡದವರು ರಘುಪತಿ ರಾಘವ ರಾಜಾರಾಮ ಪತಿತ ಪಾವನ ಸೀತಾರಾಮ ಹಾಡು ಹಾಡಿದರು. ಮಣಜೂರು ಮಂಜುನಾಥ್ ವಂದಿಸಿದರು.ಗಿಡ ನಾಟಿ: ಮಹಾತ್ಮ ಗಾಂಧೀಜಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ನಗರದ ಗಾಂಧಿ ಭವನದ ಆವರಣದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎನ್‌ಸಿಸಿ ಘಟಕ ವಿದ್ಯಾರ್ಥಿಗಳಿಂದ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಶಾಸಕರಾದ ಡಾ.ಮಂತರ್ ಗೌಡ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.