ಕನ್ನಡಪ್ರಭ ವಾರ್ತೆ ಬೆಂಗಳೂರು
ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿ.27ರಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣ ಮಾಡಲಾಗುತ್ತಿದ್ದು, ಕಾರ್ಯಕ್ರಮಕ್ಕೆ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ವಿರೋಧ ಪಕ್ಷದ ನಾಯಕರು ಮತ್ತು ಪಕ್ಷಾತೀತವಾಗಿ ಎಲ್ಲ ಶಾಸಕರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ.ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಸಿದ್ಧತೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶನಿವಾರ ಆಯೋಜನಾ ಸಮಿತಿಗಳ ಸಭೆ ನಡೆಸಲಾಯಿತು.
ಈ ವೇಳೆ ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಗಂಗೂಬಾಯಿ ಹಾನಗಲ್ ಅವರು ಪ್ರಥಮವಾಗಿ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಹಾಡು ಹಾಡಿದ ಕುರಿತಂತೆ ಚರ್ಚಿಸಲಾಯಿತು. ಗಂಗೂಬಾಯಿ ಹಾನಗಲ್ ಅವರ ಗಾಯನಕ್ಕೂ ನೂರು ವರ್ಷ ಪೂರ್ಣಗೊಂಡ ಕಾರಣಕ್ಕೆ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದಲ್ಲೂ ಆ ಹಾಡನ್ನು ಹಾಡಿಸಬೇಕು. ಜತೆಗೆ ಕಾರ್ಯಕ್ರಮಕ್ಕೆ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ವಿರೋಧ ಪಕ್ಷದ ನಾಯಕರೂ ಸೇರಿದಂತೆ ಪಕ್ಷಾತೀತವಾಗಿ ಎಲ್ಲ ಶಾಸಕರು, ಸಂಸದರನ್ನು ಆಹ್ವಾನಿಸಲು ನಿರ್ಧರಿಸಲಾಯಿತು.ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಬೇಕು. ಡಿ.26ರಂದು ಕಾಂಗ್ರೆಸ್ ಕಾರ್ಯಕಾರಿಣಿ ಮತ್ತು ಡಿ.27ರಂದು ಸಾರ್ವಜನಿಕ ಸಮಾರಂಭ ನಡೆಯಲಿದೆ. ಕಾರ್ಯಕ್ರಮಕ್ಕೆ ರಾಷ್ಟ್ರದೆಲ್ಲೆಡೆಯಿಂದ ಸಂಸದರು ಸೇರಿದಂತೆ ಗಣ್ಯರು ಆಗಮಿಸಲಿದ್ದು, ವಸತಿ, ಊಟೋಪಚಾರ ಸೇರಿದಂತೆ ಆತಿಥ್ಯ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸುವಂತೆ ಕಾರ್ಯಕ್ರಮ ಆಯೋಜನಾ ಸಮಿತಿಗೆ ಸೂಚಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ। ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಕೆ.ಜೆ.ಜಾರ್ಜ್, ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಪ್ರಿಯಾಂಕ್ ಖರ್ಗೆ ಇದ್ದರು.===‘ದೇಶಕ್ಕಾಗಿ ಕಾಂಗ್ರೆಸ್ ಹೋರಾಟ’ಕಾರ್ಯಕಾರಿಣಿಯಲ್ಲಿ ತೀರ್ಮಾನಮುಖ್ಯಮಂತ್ರಿಗಳ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ದೇಶವನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಬೇಕು ಮತ್ತು ಮುಂದಿನ ದಿನಗಳಲ್ಲಿ ಪಕ್ಷದ ಹೋರಾಟ ಯಾವ ರೀತಿ ಇರಬೇಕು ಎಂಬ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ಡಿ.26ರಂದು ಮಧ್ಯಾಹ್ನ 3ಕ್ಕೆ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆ ನಡೆಯಲಿದ್ದು, ಕಾರ್ಯಕಾರಿ ಸಮಿತಿ ಸದಸ್ಯರು, ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಪದಾಧಿಕಾರಿಗಳು, ಪಕ್ಷದ ಎಲ್ಲ ಸಂಸದರು ಪಾಲ್ಗೊಳ್ಳಲಿದ್ದಾರೆ. ಡಿ.27ರಂದು ಬೆಳಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.ಸಮಾವೇಶಕ್ಕೂ ಮುನ್ನ ಡಿ.27 ರಂದು ಬೆಳಗ್ಗೆ ಸುವರ್ಣಸೌಧದ ಆವರಣದಲ್ಲಿ ಮಹಾತ್ಮಾ ಗಾಂಧಿ ಅವರ ಪ್ರತಿಮೆ ಅನಾವರಣ ಮಾಡಲಾಗುತ್ತಿದೆ. ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ಕಾರ್ಯಕ್ರಮಕ್ಕೆ ಉಭಯ ಸದನಗಳ ಸ್ಪೀಕರ್ ಮತ್ತು ಸಭಾಪತಿಗಳು, ವಿರೋಧ ಪಕ್ಷ ನಾಯಕರು ಸೇರಿದಂತೆ ಪಕ್ಷಾತೀತವಾಗಿ ಎಲ್ಲ ಶಾಸಕರು, ಸಂಸದರಿಗೂ ಆಹ್ವಾನ ನೀಡಲಾಗುವುದು ಎಂದು ಹೇಳಿದರು.
---ಸಾಂಸ್ಕೃತಿಕ ಕಾರ್ಯಕ್ರಮ
ಕುರಿತು ತಂಗಡಗಿ ಸಭೆಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಸಾಂಸ್ಕೃತಿಕ ಸಮಿತಿ ಉಸ್ತುವಾರಿಯಾದ ಕನ್ನಡ ಮತ್ತ ಸಂಸ್ಕೃತಿ ಸಚಿವ ಶಿವರಾಜ ತಂಗಡಿ ಅವರು ಶನಿವಾರ ವಿಕಾಸಸೌಧದ ತಮ್ಮ ಕೊಠಡಿಯಲ್ಲಿ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿದರು. ಈ ವೇಳೆ ಅಧಿವೇಶದಲ್ಲಿ ಪ್ರಸ್ತುತ ಪಡಿಸಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತು ಚರ್ಚಿಸಿದರು. ಈ ವೇಳೆ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ನಿರ್ದೇಶಕ ಎಸ್. ನಾರಾಯಣ್, ಭಾವನ ರಾಮಣ್ಣ ಮದನ್ ಪಟೇಲ್ ಇದ್ದರು.