ಕನ್ನಡಪ್ರಭ ವಾರ್ತೆ ಸೋಮವಾರಪೇಟೆ/ಮಡಿಕೇರಿ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ಕೋಟೆಬೆಟ್ಟಕ್ಕೆ ಆಗಮಿಸಿದ್ದ ಕುಟುಂಬದೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದ ಇಬ್ಬರು ಯುವಕರು, ಮನ ಬಂದಂತೆ ಹೆಂಗಸರು, ಮಕ್ಕಳ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಕುರಿತು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕರು ಸ್ಥಳೀಯರೆನ್ನಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.ಪೊಲೀಸ್ ಇಲಾಖೆ ಸ್ಪಷ್ಟನೆ:
ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪ್ರವಾಸಿ ತಾಣವಾದ ಕೋಟೆಬೆಟ್ಟಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಮೂಲದ ಪ್ರವಾಸಿಗರು ಕಾರಿನಲ್ಲಿ ತೆರಳುವ ಸಂದರ್ಭ ಮಾರ್ಗಮಧ್ಯದಲ್ಲಿ ಸಮಯ ಸುಮಾರು 10.25ರ ವೇಳಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಅದೇ ಮಾರ್ಗದಲ್ಲಿ ಬೈಕಿನಲ್ಲಿ ಹಿಂದೆಯಿಂದ ಬರುತ್ತಿದ್ದರು. ಕಾರಿನವರು ರಸ್ತೆ ಬಿಡಲಿಲ್ಲವೆಂಬ ವಿಚಾರವಾಗಿ ಮಾತಿಗೆ ಮಾತು ಬೆಳೆದು ಬೈಕ್ ನಲ್ಲಿದ್ದ ಇಬ್ಬರು ವ್ಯಕ್ತಿಗಳು ಕೈ ಮತ್ತು ಹೆಲ್ಮೆಟ್ ನಿಂದ ಕಾರಿನಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದಾರೆ.
ಆದರೆ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರವಾಸಿಗರಿಂದ ಚಿನ್ನದ ಸರ ಕಿತ್ತುಕೊಳ್ಳುವ ಉದ್ದೇಶದಿಂದ ಗಲಾಟೆ ನಡೆಸಿರುವುದಾಗಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವುದು ಕಂಡುಬಂದಿರುತ್ತದೆ. ಈ ರೀತಿಯ ಘಟನೆಗಳು ನಡೆದಿರುವುದಿಲ್ಲ ಮತ್ತು ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ. ಪ್ರವಾಸಿಗರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದ್ದು ಈಗಾಗಲೇ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.