ಸುದ್ದಿಗೋಷ್ಠಿ । ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಅತ್ನಿ ಮಾಹಿತಿ
ಲೋಕಸಭೆ ಚುನಾವಣೆಗೆ ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿಯಾಗಿರುವ ಗಂಗಾಧರ್ ಬಹುಜನ್ ಅವರು ಏ.೨ ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಎಸ್‌ಪಿ ಜಿಲ್ಲಾಧ್ಯಕ್ಷ ಹರೀಶ್ ಅತ್ನಿ ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ‘ನಮ್ಮ ಬಿಎಸ್‌ಪಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಗಂಗಾಧರ್ ಬಹುಜನ್ ಅವರನ್ನು ಹಾಸನ ಜಿಲ್ಲೆಯ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಪ್ರಸ್ತುತ ಚುನಾವಣೆಗಳು ಉದ್ಯಮವಾಗಿ ಬಿಟ್ಟಿದೆ. ಈ ಚುನಾವಣೆಯಲ್ಲಿ ಅಭ್ಯರ್ಥಿ ಸೋತರೆ ಮಾಜಿ ಪ್ರಧಾನಿಗೆ ಅವಮಾನ ಆಗುತ್ತದೆ ಎಂದು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಇನ್ನೊಬ್ಬರೂ ಕಳೆದ ಚುನಾವಣೆಯಲ್ಲಿ ಹಣ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ನಮ್ಮ ಪಕ್ಷದ ಅಭ್ಯರ್ಥಿ ಗಂಗಾಧರ್ ಅವರು ವಿದ್ಯಾರ್ಥಿ ದೆಸೆಯಿಂದಲೇ ಸಮಾಜಕ್ಕೆ ಕೊಡುಗೆ ಕೊಟ್ಟಿದ್ದಾರೆ. ಯಾವುದೇ ಹಣಕ್ಕೆ, ಆಮಿಷಕ್ಕೆ ಬಲಿಯಾಗದೇ ಪ್ರಾಮಾಣಿಕ ವ್ಯಕ್ತಿಯಾಗಿರುವ ಗಂಗಾಧರ್ ಬಹುಜನ್ ಅವರಿಗೆ ಮತ ಹಾಕಿ ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.ಬಹುಜನ ಸಮಾಜ ಪಾರ್ಟಿ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲೆಯ ಅಭ್ಯರ್ಥಿ ಗಂಗಾಧರ್ ಬಹುಜನ್ ಮಾತನಾಡಿ, ಇದುವರೆಗೂ ಬಂದ ಸರ್ಕಾರಗಳಲ್ಲಿ ಯಾವುದೇ ಕೈಗಾರಿಕೆಗಳು ಸ್ಥಾಪನೆ ಆಗಲಿಲ್ಲ. ಕೃಷಿ ಕಾರ್ಮಿಕರ ಬದುಕು ಹದಗೆಟ್ಟಿದೆ. ರೈತರು ಬೆಳೆದ ಬೆಳೆಗೆ ಸರಿಯಾದ ಬೆಳೆ ಸಿಗಲಿಲ್ಲ. ಬೆಲೆ ನಿಗದಿ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹಿಡಿಯಲಿಲ್ಲ. ಇಲ್ಲಿ ಅಣೆಕಟ್ಟು ಇದ್ದರೂ ಇಲ್ಲಿಗೆ ನೀರು ಕೊಡಲಿಲ್ಲ. ಇದಕ್ಕೆ ಯಾರನ್ನು ಹೊಣೆಗಾರರನ್ನಾಗಿ ಮಾಡಬೇಕು. ಯಾವ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಜನರ ಬದುಕಿನಲ್ಲಿ ಯಾವ ಬದಲಾವಣೆ ಆಗಿದೆ ಬಗ್ಗೆ ಒಂದು ಗಂಬೀರವಾದ ವಿಚಾರವಾಗಿದೆ ಎಂದು ಹೇಳಿದರು.
ಇಂತಹ ಸಂದರ್ಭದಲ್ಲಿ ಬಹುಜನ ಸಮಾಜ ಪಾರ್ಟಿಗೆ ಮತ ಹಾಕುವುದರ ಮೂಲಕ ಸೇವೆಗೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು. ಲೋಕಾಸಭೆ ಅಭ್ಯರ್ಥಿಯಾಗಿ ಏ.೨ ರಂದು ನಾಮಪತ್ರವನ್ನು ಸಲ್ಲಿಸುವುದಾಗಿ ಹೇಳಿದರು.
ಈ ವೇಳೆ ಬಹುಜನ ಸಮಾಜ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಮ್ಮ, ಜಿಲ್ಲಾ ಸಂಯೋಜಕರಾದ ಲಕ್ಷ್ಮಣ್ ಕೀರ್ತಿ, ಜಿಲ್ಲಾ ಉಪಾಧ್ಯಕ್ಷರಾದ ಲೋಹಿತ್, ಕಚೇರಿ ಕಾರ್ಯದರ್ಶಿ ಸುರೇಂದ್ರ ಇತರರು ಹಾಜರಿದ್ದರು.ಮಾಧ್ಯಮಗೋಷ್ಠಿಯಲ್ಲಿ ಬಿಎಸ್ಪಿ ಜಿಲ್ಲಾ ಅಧ್ಯಕ್ಷ ಅತ್ನಿ ಹರೀಶ್ ಮಾತನಾಡಿದರು. ಬಹುಜನ ಸಮಾಜ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಮ್ಮ, ಜಿಲ್ಲಾ ಸಂಯೋಜಕ ಲಕ್ಷ್ಮಣ್ ಕೀರ್ತಿ, ಜಿಲ್ಲಾ ಉಪಾಧ್ಯಕ್ಷ ಲೋಹಿತ್ ಇದ್ದರು.