ಮತದಾನದ 40 ದಿನ ಬಳಿಕ ಫಲಿತಾಂಶ!

KannadaprabhaNewsNetwork |  
Published : Mar 17, 2024, 01:51 AM ISTUpdated : Mar 17, 2024, 12:18 PM IST
ಮತದಾನ | Kannada Prabha

ಸಾರಾಂಶ

ರಾಜ್ಯದಲ್ಲಿ ಮೊದಲ ಹಂತದ ಮತದಾನ ಏ.26ರಂದು ನಡೆಯಲಿದ್ದು, ಚುನಾವಣೆ ಫಲಿತಾಂಶ ಪ್ರಕಟವಾಗುವ ಜೂ.4ರವರೆಗೆ 40 ದಿನಗಳ ಅಂತರವಿದೆ.

ಕನ್ನಡಪ್ರಭವಾರ್ತೆ ಬೆಂಗಳೂರು

ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ ಏ.26ರಂದು 14 ಕ್ಷೇತ್ರಗಳಿಗೆ ಮತ್ತು ಮೇ 7ರಂದು 2ನೇ ಹಂತದಲ್ಲಿ ಉಳಿದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. 

ಇವುಗಳ ಫಲಿತಾಂಶ ಜೂ.4ರಂದು ಪ್ರಕಟವಾಗಲಿದೆ. ಅಂದರೆ ಮೊದಲ ಹಂತದಲ್ಲಿ ಮತ ಚಲಾವಣೆ ಮಾಡಿದ ಮತದಾರರು ಫಲಿತಾಂಶಕ್ಕಾಗಿ ಬರೋಬ್ಬರಿ 40 ದಿನ ಕಾಯಬೇಕಾಗಲಿದೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ರಾಜ್ಯದಲ್ಲಿನ ಚುನಾವಣಾ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ನೀಡಿದ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ, ‘ರಾಜ್ಯದಲ್ಲಿ ಈ ಬಾರಿ 5.42 ಕೋಟಿ ಜನರು ಮತದಾನದ ಹಕ್ಕು ಹೊಂದಿದ್ದಾರೆ. 

ಈ ಪೈಕಿ 4.68 ಲಕ್ಷ ಹೊಸ ಮತದಾರರು. ಚುನಾವಣೆಗೆ 58,834 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಚುನಾವಣೆಗೆ 3.15 ಲಕ್ಷಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುವುದು’ ಎಂದರು.

ಮೊದಲ ಹಂತ: ‘ಈ ಬಾರಿ ರಾಜ್ಯದಲ್ಲಿ 2 ಹಂತದಲ್ಲಿ ಚುನಾವಣೆ ನಡೆಯಲಿದೆ. ಏ.26ರಂದು ನಡೆಯುವ ಮೊದಲ ಹಂತಕ್ಕೆ ಮಾ.28ರಂದು ಅಧಿಸೂಚನೆ ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. 

ಮೊದಲ ಹಂತದಲ್ಲಿ ನಡೆಯುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಅಧಿಸೂಚನೆ ಪ್ರಕಟಿಸಲಿದ್ದಾರೆ. ಏ.4ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. 

ಏ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.8ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಏ.26ರಂದು ಮತದಾನ ನಡೆಯಲಿದೆ’ ಎಂದು ಮೀನಾ ತಿಳಿಸಿದರು.

ಎರಡನೇ ಹಂತ: ಎರಡನೇ ಹಂತಕ್ಕೆ ಏ.12ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಉಮೇದುವಾರಿಕೆ ಸಲ್ಲಿಕೆ ಪ್ರಾರಂಭವಾಗಲಿದೆ. ಏ.19ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏ.20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 

ಏ.22ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಮೇ 7ರಂದು ಮತದಾನ ನಡೆಯಲಿದೆ ಎಂದರು. ರಾಜ್ಯದಲ್ಲಿ 28 ಲೋಕಸಭೆ ಕ್ಷೇತ್ರಗಳ ಪೈಕಿ ಎರಡು ಎಸ್‌ಟಿ, ಐದು ಎಸ್‌ಸಿ ಮೀಸಲು ಕ್ಷೇತ್ರಗಳಾಗಿವೆ. 

ರಾಜ್ಯದಲ್ಲಿ ನಡೆಯುವ ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮೀಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಿಗೆ ಚುನಾವಣೆ ಜರುಗಲಿದೆ.

ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್‌, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿದರು.

PREV

Latest Stories

ಡಿಕೆಶಿ ಪರ ದಾವಣಗೆರೆಯಲ್ಲಿ 101 ತೆಂಗಿನಕಾಯಿ ಸೇವೆ
ಬೆಂಗಳೂರು-ತುಮಕೂರುಪ್ರಯಾಣ, ಜನ ಹೈರಾಣ
ಸ್ಮಾರ್ಟ್‌ ಮೀಟರ್‌ ವಿವಾದ: ಸಚಿವಜಾರ್ಜ್ ವಿರುದ್ಧ ಬಿಜೆಪಿ ದೂರು