ಕಡ್ಡಾಯವಾಗಿ ಗುರುತಿನ ಚೀಟಿ ಪಡೆಯಬೇಕು: ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲೆಯಲ್ಲಿ ಸುಮಾರು 380 ಜನ ಲಿಂಗತ್ವ ಅಲ್ಪಸಂಖ್ಯಾತರು ನೋಂದಾಯಿತರಾಗಿದ್ದು, ಇವರಲ್ಲಿ 25 ಜನ ಮಾತ್ರ ಗುರುತಿನ ಚೀಟಿ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲಾ ಲಿಂಗತ್ವ ಅಲ್ಪಸಂಖ್ಯಾತರು ತಪ್ಪದೆ ಗುರುತಿನ ಚೀಟಿ ಪಡೆಯಲು ಮುಂದೆ ಬರಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಡೆದ ಚೇತನ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಲಿಂಗತ್ವ ಅಲ್ಪಸಂಖ್ಯಾತರು ಸರ್ಕಾರದ ಯೋಜನೆಗಳ ಸವಲತ್ತು ಪಡೆಯಲು ಕಡ್ಡಾಯವಾಗಿ ಗುರುತಿನ ಚೀಟಿ ಪಡೆಯಬೇಕು ಎಂದ ಅವರು, ಲಿಂಗತ್ವ ಅಲ್ಪಸಂಖ್ಯಾತರಿಗೆ ವಿವಿಧ ಇಲಾಖೆಗಳಿಗೆ ನಡೆಯುವ ನೇಮಕಾತಿಗಳಲ್ಲಿ ಆದ್ಯತೆ, ವಸತಿ ಸೌಲಭ್ಯ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಸಾಮಾಜಿಕ ಸೇವೆ ಪಡೆಯಲು ಆನ್‌ಲೈನ್ ಅರ್ಜಿ ಸಲ್ಲಿಸಿ ಗುರುತಿನ ಚೀಟಿ ಪಡೆದು ಸೌಲಭ್ಯ ಪಡೆದುಕೊಳ್ಳಬಹುದು ಎಂದರು.ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಎರಡು ಸ್ವಯಂ ಸೇವಾ ಸಂಸ್ಥೆಗಳು ಜಿಲ್ಲೆ ಯಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರ ಸಮಸ್ಯೆಗಳು ಹಾಗೂ ಅವರ ದೈನಂದಿನ ಬದುಕನ್ನು ಅಧ್ಯಯನ ಮಾಡಿ ಪ್ರತಿ ಮಾಹೆ ಸಂಬಂಧಿಸಿದ ಅಧಿಕಾರಿಗಳಿಗೆ ವರದಿ ನೀಡಬೇಕು. ಅಂತವರನ್ನು ಗುರುತಿಸಿ ಅವರಿಗೆ ಸಿಗಬೇಕಾದ ಸರ್ಕಾರಿ ಸೌಲಭ್ಯ ಒದಗಿಸಲು ಕ್ರಮಕೈಗೊಳ್ಳಬೇಕು. ಸರ್ಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ದೊರಕುವಂತೆ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.ಚೇತನ, ಧನಶ್ರೀ, ಎಚ್‌ಐವಿ ಭಾದಿತ, ಧಮನಿತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಫಲಾನುಭವಿಗಳಿಗೆ ಸರ್ಕಾರ ವಿವಿಧ ಸೌಲಭ್ಯ ನೀಡಲು ಸಮಿತಿ ಚೀಟಿ ಎತ್ತುವ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.ಈ ಯೋಜನೆ ಸವಲತ್ತು ಪಡೆಯಲು 18 ರಿಂದ 60 ವರ್ಷದ ಒಳಗಿನ ಮಹಿಳೆಯರಿಗೆ 1.50 ಲಕ್ಷ ವಾರ್ಷಿಕ ಆದಾಯ ಇರುವ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ನಿಗಧಿಯಂತೆ ಅರ್ಜಿ ಸಲ್ಲಿಸಲಾಗಿದ್ದ ಫಲಾನುಭವಿಗಳ ಆಯ್ಕೆ ಮಾಡಲಾಯಿತು.ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಸ್. ಕೀರ್ತನಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಎನ್‌ಜಿಓ ಪದಾಧಿಕಾರಿಗಳು ಉಪಸ್ಥಿತರಿದ್ದರು. 2 ಕೆಸಿಕೆಎಂ 4ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿಸಿ ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ವಿವಿಧ ಯೋಜನೆಗಳ ಆಯ್ಕೆ ಸಮಿತಿ ಸಭೆ ನಡೆಯಿತು. ಜಿಪಂ ಸಿಇಓ ಕೀರ್ತನಾ ಇದ್ದರು.