ಕನ್ನಡಪ್ರಭ ವಾರ್ತೆ ಅಥಣಿ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ವಿದ್ಯಾಭ್ಯಾಸದ ಜೊತೆಗೆ ಸಾಮಾನ್ಯ ಜ್ಞಾನವು ಅವಶ್ಯಕತೆ. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆಯ ನಿಮಿತ್ತ ಹಮ್ಮಿಕೊಂಡಿರುವ ಮುಕ್ತ ರಸಪ್ರಶ್ನೆ ಕಾರ್ಯಕ್ರಮ ಅರ್ಥಪೂರ್ಣವಾಗಿದ್ದು, ತಾಲೂಕಿನ ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.ಪಟ್ಟಣದಲ್ಲಿ ಶನಿವಾರ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಲಾಗಿರುವ ಮುಕ್ತ ರಸಪ್ರಶ್ನೆ ಕಾರ್ಯಕ್ರಮದ ಬಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಯುಗದಲ್ಲಿ ಹೊಸ ಹೊಸ ಜ್ಞಾನವನ್ನು ಪಡೆದುಕೊಳ್ಳುವುದು ಅವಶ್ಯಕತೆ. ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗಲಿರುವ ಇಂತಹ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸುವುದು ಅವಶ್ಯಕ. ಈ ನಿಟ್ಟಿನಲ್ಲಿ ನಮ್ಮ ತಾಲೂಕು ಪತ್ರಕರ್ತರು ಆಯೋಜಿಸಿರುವ ಕಾರ್ಯಕ್ರಮ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪರಶುರಾಮ ನಂದೇಶ್ವರ ಮಾತನಾಡಿ, ಪತ್ರಿಕಾ ದಿನಾಚರಣೆ ಅಂಗವಾಗಿ ಮುಕ್ತ ರಸಪ್ರಶ್ನೆ ಸ್ಪರ್ಧೆಯನ್ನು ಬರುವ ಜು.೨೬ರಂದು ಮಧ್ಯಾಹ್ನ ೩ ಗಂಟೆಗೆ ವಿವೇಕಾನಂದ ವಿದ್ಯಾವಿಕಾಶ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಯುವಕರು, ಯುವತಿಯರು ಭಾಗವಹಿಸಬಹುದಾಗಿದೆ. ಈ ಸ್ಪರ್ಧೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದು ಆಯ್ಕೆಯಾದ ವಿಜೇತರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ನಗದು ಬಹುಮಾನ ನೀಡಲಾಗುವುದು. ಈ ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ಸೋಮವಾರ ಜು.28 ರಂದು ಬೆಳಗ್ಗೆ ೧೦ ಗಂಟೆಗೆ ಕೆ.ಎಲ್.ಇ ಸಂಸ್ಥೆಯ ಎಸ್.ಎಸ್.ಎಂ. ಎಸ್ ಕಾಲೇಜಿನ ಖೋತ ಸಭಾಂಗಣದಲ್ಲಿ ಜರುಗುವ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾದ ರಮೇಶ ಬಾದವಾಡಗಿ, ಶಿವಕುಮಾರ ಅಪರಾಜ, ರಾಜು ಗಾಲಿ, ಅಜೀತ ಕಾಂಬಳೆ, ವಿಜಯಕುಮಾರ ಅಡಹಳ್ಳಿ, ಅಣಾಸಾಬ ತೆಲಸಂಗ, ರಾಕೇಶ ಮೈಗೂರ, ಶೇಖರ ತೆವರೆಟ್ಟಿ, ಸಂತೋಷ ಬಡಕಂಬಿ, ಶಿವಾನಂದ ಪೂಜಾರಿ, ಜಬ್ಬಾರ ಚಿಂಚಲಿ, ವಿಲಾಸ ಕಾಂಬಳೆ, ಕಲ್ಲಪ್ಪ ಕನ್ನಾಳ, ಡಾ.ಆರ್.ಎಸ್.ದೊಡ್ಡನಿಂಗಪಗೊಳ, ಸಂತೋಷ ಬಡಕಂಬಿ, ಸಂದೀಪ ಘಟಕಂಬಳೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.