ಇಂದಿರಾ ಕ್ಯಾಂಟೀನ್‌ ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳಿ

KannadaprabhaNewsNetwork | Published : Apr 11, 2025 12:32 AM

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ನಿಡಗುಂದಿ, ಮುದ್ದೇಬಿಹಾಳ, ತಾಳಿಕೋಟೆ ಹಾಗೂ ಬಸವನಬಾಗೇವಾಡಿ ತಾಲೂಕಿಗೆ ಬುಧವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲೆಯ ನಿಡಗುಂದಿ, ಮುದ್ದೇಬಿಹಾಳ, ತಾಳಿಕೋಟೆ ಹಾಗೂ ಬಸವನಬಾಗೇವಾಡಿ ತಾಲೂಕಿಗೆ ಬುಧವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ನಿಡಗುಂದಿಯ ಪಟ್ಟಣ ಪಂಚಾಯತಿ ಹಾಗೂ ಹೆಬ್ಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಳ ಪರೀವೀಕ್ಷಣೆ ನಡೆಸಿದ ಅವರು, ನಿಡಗುಂದಿ ಪಟ್ಟಣದಲ್ಲಿ ಮೆಗಾ ಮಾರುಕಟ್ಟೆ ನಿರ್ಮಾಣಕ್ಕಾಗಿ ಸ್ಥಳ ಪರಿಶೀಲನೆ ನಡೆಸಿದರು. ನಂತರ ನಿಡಗುಂದಿಯಲ್ಲಿನ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಕ್ಯಾಂಟೀನ್ ಕಾಮಗಾರಿ ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಅಲ್ಲದೇ, ಶೀಘ್ರದಲ್ಲಿ ಕ್ಯಾಂಟೀನ್ ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ನಿಡಗುಂದಿಯ ಒಳಚರಂಡಿ ನೀರು ಶುದ್ಧೀಕರಣ ಘಟಕದ ಮಂಜೂರಾತಿಗಾಗಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಕೂಡಲೇ ಸ್ಥಳ ವೀಕ್ಷಣೆ ಮಾಡಿ, ನಿರಕ್ಷೇಪಣಾ ಪತ್ರ ಒದಗಿಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.ಮುದ್ದೇಬಿಹಾಳದಲ್ಲಿರುವ ಇಂದಿರಾ ಕ್ಯಾಂಟೀನ್ ಕಟ್ಟಡಕ್ಕೆ ಭೇಟಿ ನೀಡಿದ ಅವರು, ಕಟ್ಟಡದ ಸುತ್ತಮುತ್ತಲೂ ಕಾಂಪೌಂಡ್, ವಾಲ್ ಪ್ಲೋರಿಂಗ್ ಕಾರ್ಯಕ್ಕೆ ಸೂಚನೆ ನೀಡಿದರು. ಪಟ್ಟಣದಲ್ಲಿರುವ ಕೆರೆಯನ್ನು ವೀಕ್ಷಣೆ ಮಾಡಿ, ಕೆರೆ ಪ್ರದೇಶದಲ್ಲಿರುವ ಗಿಡಗಂಟಿಗಳನ್ನು ತೆರವುಗೊಳಿಸಿ, ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕೆರೆಯಲ್ಲಿ ಕಲುಷಿತ ನೀರು ಸೇರದಂತೆ ಎಚ್ಚರಿಕೆ ವಹಿಸಿ, ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಮುದ್ದೇಬಿಹಾಳದಲ್ಲಿ ಮೆಗಾ ಮಾರುಕಟ್ಟೆ ಸ್ಥಾಪನೆಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್‌ ಅವರು, ಅಂದಾಜು ಪತ್ರಿಕೆ ಹಾಗೂ ನೀಲನಕ್ಷೆ ಪರಿಶೀಲಿಸಿ, ಕೂಡಲೇ ಕಾಮಗಾರಿ ಆರಂಭಿಸುವಂತೆ ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ನಂತರ ತಹಸೀಲ್ದಾರ್‌ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರಗತಿ ಪರಿಶೀಲನೆ ಮಾಡಿದರು.ಬಳಿಕ ತಾಳಿಕೋಟೆಗೆ ಭೇಟಿ ನೀಡಿದ ಅವರು, ಗ್ರಂಥಾಲಯ ಕಟ್ಟಡ ನಿರ್ಮಾಣದ ಕಾಮಗಾರಿ, ಪ್ರಜಾಸೌಧ ಕಟ್ಟಡದ ಸಲುವಾಗಿ ತಾಳಿಕೋಟೆಯಲ್ಲಿ ರಿ.ಸ.ನಂ.೬೨೩ ಹಾಗೂ ೨೫೫ರ ಸ್ಥಳ ಪರಿಶೀಲನೆ ನಡೆಸಿದರು. ತಾಲೂಕಾ ಕಚೇರಿಗೆ ಭೇಟಿ ನೀಡಿ, ಕಚೇರಿಯ ಕಾರ್ಯವೈಖರಿ ಕುರಿತು ಪರಿಶೀಲನೆ ನಡೆಸಿದರು. ಪಟ್ಟಣದಲ್ಲಿ ಕಸ ವಿಲೇವಾರಿ ಘಟಕ ಹಾಗೂ ಸಮುದಾಯ ಶೌಚಾಲಯ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ನಗರಾಭಿವೃದ್ದಿಕೋಶದ ಯೋಜನಾ ನಿರ್ದೇಶಕ ಬದ್ರೂದ್ದೀನ್ ಸೌದಾಗರ, ನಿಡಗುಂದಿ ಮುಖ್ಯಾಧಿಕಾರಿ ವಿರೇಶ ಹಟ್ಟಿ, ಮುದ್ದೇಬಿಹಾಳ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ತಾಳಿಕೋಟೆ ಮುಖ್ಯಾಧಿಕಾರಿ ಮೋಹನ ಜಾಧವ, ತಾಳಿಕೋಟೆ ತಹಸೀಲ್ದಾರ್‌ ಕೀರ್ತಿ ಚಾಲಕ ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share this article