ಬಳ್ಳಾರಿ: ಜೂ.21ರಂದು ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಬೇಕಾದ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜೂ.21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಸಲು ನಿರ್ಧರಿಸಲಾಗಿದೆ. ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳಿಗೆ ವಹಿಸಲಾದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಳೆಗಾಲ ಹಿನ್ನೆಲೆಯಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯುವ ಸ್ಥಳವನ್ನು ಅಂತಿಮಗೊಳಿಸಿ ನಂತರ ಪ್ರಕಟಿಸಲಾಗುವುದು ಎಂದು ತಿಳಿಸಿದರು.ಅಂದು ಬೆಳಿಗ್ಗೆ 6.30ರಿಂದಲೇ ಯೋಗ ಕಾರ್ಯಕ್ರಮಗಳು ಆರಂಭವಾಗಲಿದೆ. ನಂತರ ಯೋಗ ವೇದಿಕೆ ಕಾರ್ಯಕ್ರಮ ನಡೆಯಲಿದೆ, ಬಳಿಕ ಯೋಗಾಸನ ಕಾರ್ಯಕ್ರಮ ಆರಂಭವಾಗಲಿದೆ ಎಂದರು.
ಜಿಲ್ಲಾ ಮಟ್ಟದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಜನ ಆಗಮಿಸುವಂತೆ ಪ್ರಚಾರ ಕೈಗೊಳ್ಳಬೇಕು. ಪತಂಜಲಿ ಯೋಗ ಕೇಂದ್ರ, ಆರ್ಟ್ ಆಫ್ ಲಿವಿಂಗ್ ಸೇರಿದಂತೆ ಯೋಗ ಕೇಂದ್ರಗಳು ಅಗತ್ಯವಾಗಿ ಸಹಕಾರ ನೀಡಬೇಕು ಎಂದರು.ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಹಾಸ್ಟೆಲ್‍ಗಳಲ್ಲಿರುವ ವಿದ್ಯಾರ್ಥಿಗಳು ಯೋಗಾಸನ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಕ್ರಮವಹಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಕ್ರೀಡಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಲಘು ಉಪಹಾರ ಮತ್ತು ನೀರಿನ ವ್ಯವಸ್ಥೆ, ಯೋಗಾಸನ ಮಾಡಲು ಗ್ರೀನ್ ಮ್ಯಾಟ್ ವ್ಯವಸ್ಥೆ ಮತ್ತು ವೇದಿಕೆ ಹಾಗೂ ಧ್ವನಿವರ್ಧಕ ವ್ಯವಸ್ಥೆ ಹಾಗೂ ಆವರಣದೊಳಗೆ ಸಂಪೂರ್ಣ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.ಆಯಾ ತಾಲೂಕುಗಳಲ್ಲಿಯೂ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಆಚರಿಸಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಯೋಗ ದಿನಾಚರಣೆ ಅಂಗವಾಗಿ ಯೋಗದ ಮಹತ್ವ ಸಾರುವ ಉದ್ದೇಶದಿಂದ ಬಳ್ಳಾರಿಯಲ್ಲಿ ಪೂರ್ವಭಾವಿ ಯೋಗಜಾಥಾ ನಡೆಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಪಾಲಿಕೆಯ ಆಯುಕ್ತ ಜಿ.ಖಲೀಲ್ ಸಾಬ್, ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಫಣೆಂಧರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಯೋಗ ಕೇಂದ್ರದ ಪ್ರತಿನಿಧಿಗಳು ಉಪಸ್ಥಿತರಿದ್ದರು.