ಬಳ್ಳಾರಿ: ಕೊಪ್ಪಳ ಜಿಲ್ಲೆಯ ಹೊಸಬಂಡಿ ಹರ್ಲಾಪುರ ಗ್ರಾಮದಲ್ಲಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಅತ್ಯಂತ ಕ್ರೂರವಾಗಿ ಹತ್ಯೆಗೈದ ದುಷ್ಕರ್ಮಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ಅಲೆಮಾರಿ ಬುಡಕಟ್ಟು ಮಹಾಸಭಾದಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಹಾಸಭಾದ ಜಿಲ್ಲಾಧ್ಯಕ್ಷ ವೈ. ಶಿವಕುಮಾರ ಹಾಗೂ ಪ್ರಧಾನ ಕಾರ್ಯದರ್ಶಿ ಡಿ. ರಂಗಯ್ಯ ಮಾತನಾಡಿ, ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ರಾಜ್ಯ ಸರ್ಕಾರ ಮಹಿಳೆಯರಿಗೆ ರಕ್ಷಣೆ ನೀಡಬೇಕು. ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳನ್ನು ನಿಯಂತ್ರಿಸಲು ಸೂಕ್ತ ಕ್ರಮ ವಹಿಸಬೇಕು. ಮೃತ ಬಾಲಕಿಯ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಗೌರವಾಧ್ಯಕ್ಷ ಸುಬ್ಬಣ್ಣ, ಉಪಾಧ್ಯಕ್ಷ ಬಿ. ರಾಮಯ್ಯ, ವೆಂಕಟೇಶ, ಕಾರ್ಯಾಧ್ಯಕ್ಷ ರಾಮಾಂಜಿನಿ, ಖಜಾಂಚಿ ಕೆ. ಚನ್ನಬಸಪ್ಪ, ಜಿಲ್ಲಾ ಜಂಟಿ ಕಾರ್ಯದರ್ಶಿ ಶೈಲಾ ಸೀತಾರಾಮ್ ಇತರ ಸಂಘಟನೆಗಳ ಪದಾಧಿಕಾರಿಗಳಾದ ಡಿ. ಮುನಿಸ್ವಾಮಿ, ಮಹೇಶ, ಡಿ. ಲಕ್ಷ್ಮಣ, ಶಂಕರ ಮತ್ತಿತರರಿದ್ದರು. ನಗರದಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಗೆ ಮನವಿಪತ್ರ ಕಳುಹಿಸಿದರು.