ಸರ್ಕಾರಿ ಶಾಲೆಯಲ್ಲಿ ಬಾಲಕಿ ಅತ್ಯಾಚಾರ ಆರೋಪ: ಶಿಕ್ಷಕನ ವಿರುದ್ಧ ಕಠಿಣ ಕ್ರಮಕ್ಕೆ ಗ್ರಾಮಸ್ಥರ ಪ್ರತಿಭಟನೆ

KannadaprabhaNewsNetwork |  
Published : Feb 24, 2026, 03:45 AM IST
ಶಾಲೆಯ ಮುಂದೆ ಪ್ರತಿಭಟನೆ ನಡೆಸುತ್ತಿರುವ ಗ್ರಾಮಸ್ಥರು. ಶಾಲೆಯ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್   | Kannada Prabha

ಸಾರಾಂಶ

ಅತಿಥಿ ಶಿಕ್ಷಕ ತನ್ನ ಮನೆ ತೋರಿಸುವುದಾಗಿ ಹೇಳಿ ಬಾಲಕಿಯನ್ನು ಕರೆದುಕೊಂಡು ಹೋಗಿದ್ದು, ಫೆ.16ರಂದು ಬೆಳಿಗ್ಗೆ ಸುಮಾರು 8.30ರ ವೇಳೆಗೆ ಬಾಲಕಿಯನ್ನು ಹೆದರಿಸಿ ವಿವಸ್ತ್ರಗೊಳಿಸಿ ಅತ್ಯಾಚಾರ ಎಸಗಿದ್ದಾನೆ

ಕಂಪ್ಲಿ: ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕನೊಬ್ಬ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಪೋಷಕರು ಹಾಗೂ ಗ್ರಾಮಸ್ಥರು ಸೋಮವಾರ ಶಾಲೆ ಎದುರು ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದರು.

ಈ ಘಟನೆ ಗ್ರಾಮದಲ್ಲಿ ತೀವ್ರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಬಾಲಕಿಯ ಪೋಷಕರು ನೀಡಿದ ದೂರಿನ ಪ್ರಕಾರ, ಅತಿಥಿ ಶಿಕ್ಷಕ ತನ್ನ ಮನೆ ತೋರಿಸುವುದಾಗಿ ಹೇಳಿ ಬಾಲಕಿಯನ್ನು ಕರೆದುಕೊಂಡು ಹೋಗಿದ್ದು, ಫೆ.16ರಂದು ಬೆಳಿಗ್ಗೆ ಸುಮಾರು 8.30ರ ವೇಳೆಗೆ ಬಾಲಕಿಯನ್ನು ಹೆದರಿಸಿ ವಿವಸ್ತ್ರಗೊಳಿಸಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಭಯಗೊಂಡ ಬಾಲಕಿ ಮನೆಗೆ ಬಂದು ಪೋಷಕರಿಗೆ ವಿಷಯ ತಿಳಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಾಲಕಿಯ ಪೋಷಕರು, ಮಹಿಳೆಯರು, ಗ್ರಾಮಸ್ಥರು ಶಾಲೆ ಮುಂದೆ ಜಮಾಯಿಸಿ ಆರೋಪಿಯ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಮುಖ್ಯ ಶಿಕ್ಷಕರು ಶಾಲೆಗೆ ಬಂದು ಸ್ಪಷ್ಟನೆ ನೀಡುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪ್ರತಿಭಟನಾಕಾರರಾದ ನಿಂಗಮ್ಮ, ಈರಮ್ಮ, ಹನುಮಕ್ಕ, ಹುಲಿಗೆಮ್ಮ ಸೇರಿದಂತೆ ಹಲವರು ಪಟ್ಟು ಹಿಡಿದರು.

ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿ ತಪ್ಪಿತಸ್ಥನ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂದೆಗೆದುಕೊಳ್ಳಲಾಯಿತು.

ವಾಲ್ಮೀಕಿ ನಾಯಕ ಮಹಾಸಭಾದ ತಾಲೂಕು ಅಧ್ಯಕ್ಷ ನೀರಗಂಟಿ ವೀರೇಶ, ಅಳ್ಳಳ್ಳಿ ವೀರೇಶ ಮಾತನಾಡಿ, ಶಾಲೆಯಲ್ಲಿ ನಡೆದಂತಹ ಗಂಭೀರ ಘಟನೆಗೆ ಮುಖ್ಯ ಶಿಕ್ಷಕರೇ ನೇರ ಹೊಣೆಗಾರರಾಗಿದ್ದು ಅವರನ್ನು ತಕ್ಷಣ ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ಈ ಶಾಲೆಯಲ್ಲಿ ಈ ಹಿಂದೆ ಕೂಡ ಹಲವು ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶ ಬಹಿರಂಗಪಡಿಸಬೇಕು ಎಂದರು.

ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸುವ ಪ್ರಕ್ರಿಯೆ ಮುಂದುವರಿದಿದೆ. ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಶಾಲೆ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೊಂದಲಗಳಿಗೆ ಶೀಘ್ರ ತೆರೆ: ಸತೀಶ್ ಜಾರಕಿಹೊಳಿ
ಪೌಷ್ಟಿಕ ಆಹಾರ ಸೇವಿಸಿ ಸದೃಢರಾಗಿ: ಡಾ. ಪ್ರಕಾಶ ಸಂಕನೂರ