ಎಲ್ಲ ಕ್ಷೇತ್ರದಲ್ಲೂ ಛಾಪು ಮೂಡಿಸುತ್ತಿರುವ ಹೆಣ್ಣುಮಕ್ಕಳು: ನ್ಯಾಯಾಧೀಶೆ ಪುಷ್ಪಾಂಜಲಿ ದೇವಿ

KannadaprabhaNewsNetwork | Published : Jan 25, 2024 2:04 AM

ಸಾರಾಂಶ

ಹೆಣ್ಣು ಮಾತೃಸ್ವರೂಪಿಯಾದ್ದಾಳೆ. ಆಧುನಿಕ ವಾಸ್ತವಿಕತೆಯಲ್ಲಿ ಹೆಣ್ಣು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂಬುದನ್ನು ಸಾಬೀತುಪಡಿಸಿದ್ದಾಳೆ.

ಬಳ್ಳಾರಿ: ಹೆಣ್ಣುಮಕ್ಕಳು ಎಲ್ಲ ಕ್ಷೇತ್ರಗಳಲ್ಲಿ ಸರಿಸಮಾನವಾಗಿ ಬೆಳೆಯುತ್ತಿದ್ದು, ಸಾಧನೆಯ ಹಾದಿಯಲ್ಲಿರುವ ಮಹಿಳೆಯರಿಗೆ ಪ್ರೋತ್ಸಾಹ ಹಾಗೂ ಸಹಕಾರ ಬಹಳ ಮುಖ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಎಸ್.ಎಚ್. ಪುಷ್ಪಾಂಜಲಿ ದೇವಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯ ಆಶ್ರಯದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಪ್ರಯುಕ್ತ ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನ 2023- 24ರ ಅಡಿ ಜಿಲ್ಲಾ ಆಸ್ಪತ್ರೆ ಆವರಣದ ಜಿಲ್ಲಾ ಶಸ್ತ್ರ ಚಿಕಿತ್ಸಕರ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ “ಹೆಣ್ಣುಮಗುವಿನ ಜನ್ಮೋತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹೆಣ್ಣು ಮಾತೃಸ್ವರೂಪಿಯಾದ್ದಾಳೆ. ಆಧುನಿಕ ವಾಸ್ತವಿಕತೆಯಲ್ಲಿ ಹೆಣ್ಣು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂಬುದನ್ನು ಸಾಬೀತುಪಡಿಸಿದ್ದಾಳೆ. ಹೆಣ್ಣುಮಕ್ಕಳು ಮತ್ತಷ್ಟೂ ಸಾಧನೆ ಹಾದಿಯಲ್ಲಿ ಮುನ್ನುಗ್ಗಬೇಕು. ಶಿಕ್ಷಣದ ಮೂಲಕ ಕನಸುಗಳನ್ನು ನನಸಾಗಿಸಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರಪತಿಯವರು ಮತ್ತು ನಮ್ಮ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಸಹ ಮಹಿಳೆಯಾಗಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಸಮಾಜದಲ್ಲಿ ಎಲ್ಲ ರಂಗಗಳಲ್ಲಿ ಎಲ್ಲರಿಗೂ ಸಮಾನ ಅವಕಾಶವಿದೆ. ಸದಾವಕಾಶ ಬಳಸಿಕೊಂಡು ಪ್ರತಿಯೊಬ್ಬರೂ ಆತ್ಮಸ್ಥೈರ್ಯದಿಂದ ಮುನ್ನಡೆಯಬೇಕು ಎಂದರು.

ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹೊರತಂದ ಭಿತ್ತಿಪತ್ರ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಬಾಣಂತಿಯರಿಗೆ ಸಾಮಗ್ರಿ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್‍ಕುಮಾರ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ವೈ. ರಮೇಶ್‍ಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಬಸರೆಡ್ಡಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ.ಕೆ. ಜಲಾಲಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಕೃಷ್ಣ ನಾಯಕ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ಹಾಗೂ ತಾಯಂದಿರು ಉಪಸ್ಥಿತರಿದ್ದರು.

Share this article