-ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಕಾರ್ಯದ ಪ್ರಗತಿ ಪರಿಶೀಲನಾ ಸಭೆ
----
ಕನ್ನಡ ಪ್ರಭ ವಾರ್ತೆ ಗುರುಮಠಕಲ್
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಕಾರ್ಯದ ಪ್ರಗತಿ ಪರಿಶೀಲನಾ ಸಭೆಯು ಸಹಾಯಕ ಆಯುಕ್ತರಾದ ಶ್ರೀಧರ್ ಗೂಟೂರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ವಿವಿಧ ಇಲಾಖೆಗಳ ತಾಲೂಕು ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಸಹಾಯಕ ಆಯುಕ್ತರಾದ ಶ್ರೀಧರ್ ಗೂಟೂರ್ ಮಾತನಾಡಿ, ಪ್ರತಿದಿನದ ಕಾರ್ಯಯೋಜನೆಯನ್ನು ಸಿದ್ಧಪಡಿಸಿ, ನಿಗದಿತ ಸಮಯದಲ್ಲಿ ಕಾರ್ಯಗಳ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ, ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಗುರಿ ಸಾಧಿಸಬೇಕು ಎಂದು ಸೂಚಿಸಿದರು. ಜೊತೆಗೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸೇರಿದಂತೆ ಎಲ್ಲ ಭಾಗಿದಾರರನ್ನು ಇನ್ನಷ್ಟು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಕ್ರಮವಹಿಸಬೇಕು ಎಂದು ಹೇಳಿದರು.
ಬಳಿಕ ಅವರು ಪಟ್ಟಣದ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ ಎಸ್‌ಐಆರ್ ಕಾರ್ಯದ ಪ್ರಗತಿಯನ್ನು ಪರಿಶೀಲಿಸಿ, ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು.
ಜುಲೈ 18, 2026ರ ಮಧ್ಯಾಹ್ನದ ವೇಳೆಗೆ ತಾಲೂಕಿನಲ್ಲಿ ಒಟ್ಟು 1,34,694 ಇನ್ ಮೇಷನ್ ಫಾರಂ ವಿತರಿಸಲಾಗಿದ್ದು, ಅವುಗಳಲ್ಲಿ 82,165 ಫಾರಂಗಳನ್ನು ತಂತ್ರಾಂಶದಲ್ಲಿ ಅಳವಡಿಸಲಾಗಿದೆ. ಇದರೊಂದಿಗೆ ತಾಲೂಕಿನಲ್ಲಿ ಶೇ.61ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು.
ಸಭೆಯಲ್ಲಿ ಎಸ್‌ಐಆರ್ ಕಾರ್ಯದ ಪ್ರಗತಿ, ಬಾಕಿ ಉಳಿದಿರುವ ಅರ್ಜಿಗಳು ಹಾಗೂ ಕ್ಷೇತ್ರಮಟ್ಟದಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ನಿಗದಿತ ಅವಧಿಯೊಳಗೆ ಶೇ.100ರಷ್ಟು ಗುರಿ ಸಾಧಿಸಲು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸಹಾಯಕ ಆಯುಕ್ತರು ಸೂಚಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಚೆನ್ನಮಲ್ಲಪ್ಪ ಘಂಟಿ, ಗ್ರೇಡ್-1 ತಹಶೀಲ್ದಾರ್ ನರಸಿಂಹ ಜೋಶಿ, ಬಸವರಾಜ ಸಜ್ಜನ, ಪುರಸಭೆ ಮುಖ್ಯಾಧಿಕಾರಿ ಶರಣಪ್ಪ ಮಡಿವಾಳ, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ರಾಜಶೇಖರ ಪಾಟೀಲ್, ಕೃಷ್ಣ ಚಪೆಟ್ಲಾ, ಜಗದೀಶ ಮೇನಜೀ, ರಮೇಶ್ ಹೂಗಾರ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಅಧಿಕಾರಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.