ಕಾರವಾರ: ಮಕ್ಕಳು ತಮ್ಮ ಶಿಕ್ಷಣದೊಂದಿಗೆ ಬಾಲ್ಯವನ್ನು ಆನಂದಿಸಲು ಅಗತ್ಯವಿರುವ ಎಲ್ಲ ಅವಕಾಶಗಳನ್ನು ಒದಗಿಸುವ ಮೂಲಕ, ಅವರು ಬಾಲಕಾರ್ಮಿಕ ಪದ್ಧತಿಗೆ ಒಳಗಾಗದಂತೆ ಪೋಷಕರು ಹಾಗೂ ಸಮಾಜದ ಪ್ರತಿಯೊಬ್ಬರೂ ಎಚ್ಚರ ವಹಿಸಬೇಕು ಎಂದು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಯಣ್ಣ ತಿಳಿಸಿದರು.
ಬುಧವಾರ ಬಾಲಮಂದಿರ ಹೈಸ್ಕೂಲ್(ಹಿಂದೂ ಹೈಸ್ಕೂಲ್) ಸಭಾಂಗಣದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಬಾಲಕಾರ್ಮಿಕ ಪದ್ಧತಿ ಒಂದು ಅನಿಷ್ಟ ಪದ್ಧತಿಯಾಗಿದೆ. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯಮದಲ್ಲಿ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಶಾಲೆ ಬಿಟ್ಟ ಮಕ್ಕಳು ಮತ್ತು ಉದ್ದಿಮೆಗಳಲ್ಲಿ ದುಡಿಯುತ್ತಿರುವ ಮಕ್ಕಳು ಕಂಡುಬಂದಲ್ಲಿ ತಕ್ಷಣ ಉಚಿತ ಸಹಾಯವಾಣಿ 1098 ಅಥವಾ 112ಕ್ಕೆ ಮಾಹಿತಿ ನೀಡುವ ಮೂಲಕ ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ಸಹಕರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧದ ಕುರಿತು ಪ್ರಮಾಣವಚನ ಬೋಧಿಸಿ ಮಾತನಾಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಕಡ್ಡಾಯ ಶಿಕ್ಷಣ, ಉಚಿತ ಆರೋಗ್ಯ ಸೇವೆ ಒದಗಿಸುವುದು ಸೇರಿದಂತೆ ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾದ ಹಲವು ಸೇವೆಗಳನ್ನು ನೀಡುತ್ತಿದೆ ಎಂದರು.ಜಿಲ್ಲಾ ಕಾರ್ಮಿಕ ಅಧಿಕಾರಿ ಅಕ್ಬರ್ ಹಬೀಬಸಾಬ್ ಮುಲ್ಲಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ, ಡಿವೈಎಸ್ಪಿ ಹಾಗೂ ಮಕ್ಕಳ ವಿಶೇಷ ಪೊಲೀಸ್ ಘಟಕದ ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ ಗಿರೀಶ್, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪನಿರ್ದೇಶಕಿ ಎಚ್.ಎಚ್. ಕುಕನೂರು, ಡಿಡಿಪಿಐ ಲತಾ ನಾಯಕ್, ನಗರಸಭೆ ಪೌರಾಯುಕ್ತ ರವಿಕುಮಾರ್, ಬಾಲ ಮಂದಿರ ಹೈಸ್ಕೂಲ್‌ನ ಪ್ರಾಂಶುಪಾಲೆ ಅಂಜಲಿ ಎಸ್ ಮಾನೆ ಇದ್ದರು.
ಬಾಲಮಂದಿರ ಹೈಸ್ಕೂಲ್‌ನ ಶಿಕ್ಷಕಿ ಕಾಂಚನಾ ನಾಯ್ಕ್ ಸ್ವಾಗತಿಸಿದರು. ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಬಾಲಮಂದಿರ ಹೈಸ್ಕೂಲ್‌ವರೆಗೆ ನಡೆದ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಚಾಲನೆ ನೀಡಿದರು.ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಪೊಲೀಸ್ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಬಾಲಮಂದಿರ ಹೈಸ್ಕೂಲ್ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.