ಹವಾಮಾನ ಮುನ್ಸೂಚನೆ ಬಗ್ಗೆ ಮಾಹಿತಿ ನೀಡಿ

KannadaprabhaNewsNetwork |  
Published : Jul 27, 2024, 12:48 AM IST
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಡಿಸಿ ಶುಭ ಕಲ್ಯಾಣ್ | Kannada Prabha

ಸಾರಾಂಶ

ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಹವಾಮಾನ ಮುನ್ಸೂಚನೆ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ

ಕನ್ನಡಪ್ರಭ ವಾರ್ತೆ ತುಮಕೂರು

ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಹವಾಮಾನ ಮುನ್ಸೂಚನೆ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ತುರ್ತು ಸಭೆ ನಡೆಸಿ ಮಾತನಾಡಿ, ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದ್ದು, ಎಲ್ಲಾ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ಮಳೆಯಿಂದ ಉಂಟಾಗಬಹುದಾದ ತುರ್ತು ಪರಿಸ್ಥಿತಿಯನ್ನು ವೈಯಕ್ತಿಕ ಗಮನ ಹರಿಸಿ ನಿಭಾಯಿಸಬೇಕು. ಮಳೆಯಿಂದ ಉಂಟಾಗಬಹುದಾದ ಪ್ರತಿಕೂಲ ಪರಿಣಾಮಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಜನಸಾಮಾನ್ಯರಿಗೆ ಹವಾಮಾನ ಮುನ್ಸೂಚನೆ, ಗುಡುಗು-ಸಿಡಿಲು ಬರುವ ಮುನ್ಸೂಚನೆ, ತುರ್ತು ಸಂದರ್ಭಗಳಲ್ಲಿ ಸಹಾಯವಾಣಿಯನ್ನು ಸಂಪರ್ಕಿಸುವ, ಸಿಡಿಲು, ದಾಮಿನಿ ಮೊಬೈಲ್ ಆ್ಯಪ್‌ಗಳಿಂದ ಹವಾಮಾನ ಮುನ್ಸೂಚನೆ ಮಾಹಿತಿ ಪಡೆಯುವ ಬಗ್ಗೆ ಅರಿವು ಮೂಡಿಸಬೇಕೆಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಮಾತನಾಡಿ, ಪ್ರವಾಹ, ಮತ್ತಿತರ ತುರ್ತು ಸಂದರ್ಭಗಳಲ್ಲಿ ಕೆರೆ,ನಾಲೆಗಳ ಅಕ್ಕ-ಪಕ್ಕ, ತಗ್ಗು ಪ್ರದೇಶಗಳಲ್ಲಿ ವಾಸವಿರುವವರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ವಾರಾಂತ್ಯದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ನಾಲೆ/ ಕೆರೆಗಳ ಬಳಿ ಬರುವ ಸಾಧ್ಯತೆ ಇದ್ದು, ನಾಲೆ, ಕೆರೆಗಳ ಸುತ್ತ-ಮುತ್ತ ನಿಷೇಧಾಜ್ಞೆ ಜಾರಿಗೊಳಿಸಬೇಕೆಂದು ಹೇಳಿದರು.

ಮಳೆ ಗಾಳಿಯಿಂದ ವಿದ್ಯುತ್ ತಂತಿಗಳು ತುಂಡಾಗಿ ಬಿದ್ದಲ್ಲಿ ಕೂಡಲೇ ಸರಿಪಡಿಸಲು ಕ್ರಮ ಕೈಗೊಳ್ಳಬೇಕು. ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912 ದಿನದ 24 ಗಂಟೆಯೂ ಕಾರ್ಯನಿರ್ವಹಿಸಬೇಕು. ಸಹಾಯವಾಣಿಗೆ ಸ್ವೀಕೃತವಾಗುವ ದೂರುಗಳನ್ನು ಸ್ವೀಕರಿಸಿ ಪರಿಹರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಅವರಿಗೆ ನಿರ್ದೇಶಿಸಿದರು.

ಮಳೆಗಾಲವಾಗಿರುವುದರಿಂದ ನೀರು ಸರಾಗವಾಗಿ ಹರಿದು ಹೋಗುವಂತೆ ಪಾಲಿಕೆ ವ್ಯಾಪ್ತಿಯ ಪ್ರಮುಖ ರಾಜಗಾಲುವೆ ಹಾಗೂ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಶಿಥಿಲಗೊಂಡ ಕಟ್ಟಡದಲ್ಲಿ ಶಾಲಾ ಮಕ್ಕಳಿಗೆ ತರಗತಿ ನಡೆಸಬಾರದು ಎಂದರು.

ಹಾವು ಕಡಿತಕ್ಕೊಳಗಾದವರಿಗೆ ತುರ್ತು ಚಿಕಿತ್ಸೆ ನೀಡಲು ಎಲ್ಲಾ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ಚುಚ್ಚು ಮದ್ದು ದಾಸ್ತಾನು ಇರಬೇಕು. ಸಮುದಾಯ ಆರೋಗ್ಯ ಕೇಂದ್ರ ಸೇರಿ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ 24 ಗಂಟೆ ವೈದ್ಯರು ಲಭ್ಯವಿರಬೇಕೆಂದು ತಿಳಿಸಿದರು.

ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ತಹಸೀಲ್ದಾರ್ ಎಂ.ಸಿದ್ದೇಶ್, ಪಶು ವೈದ್ಯಾಧಿಕಾರಿ ಡಾ.ಗಿರೀಶ್‌ಬಾಬು ರೆಡ್ಡಿ, ಜಂಟಿ ಕೃಷಿ ನಿರ್ದೇಶಕ ರಮೇಶ್, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗದ ಕಾರ್ಯ ನಿರ್ವಾಹಕ ಎಂಜಿನಿಯರ್ ರವೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಾರದಮ್ಮ, ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಶಾಂತ್ ಕೂಡ್ಲಿಗಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಹರೀಶ್, ಪಾಲಿಕೆ ಎಂಜಿನಿಯರ್ ವಿನಯ್ ಇದ್ದರು.

ಕೋಟ್‌

ಆಕಸ್ಮಿಕವಾಗಿ ಕೆರೆ, ಚಾನಲ್‌ಗಳಲ್ಲಿ ಬಿದ್ದವರನ್ನು ತುರ್ತಾಗಿ ರಕ್ಷಿಸಲು ನುರಿತ ತಂಡ, ರಕ್ಷಣಾ ಉಪಕರಣ, ಆ್ಯಂಬುಲೆನ್ಸ್, ತುರ್ತು ಚಿಕಿತ್ಸಾ ಘಟಕಗಳ ಸೇವೆಯನ್ನು ನೀಡಲು ಪೂರಕ ಸಿದ್ಧತೆ ಕೈಗೊಳ್ಳಬೇಕು. ಹಠಾತ್ ಪ್ರವಾಹ ಸಂದರ್ಭದಲ್ಲಿ ಕಟ್ಟಡ ಉರುಳಿದರೆ, ಮಣ್ಣು ಕುಸಿತ ಉಂಟಾದರೆ ಕ್ರೇನ್, ಸುರಕ್ಷಾ ಜಾಕೆಟ್, ಬೋಟ್‌ಗಳನ್ನು ಸಿದ್ಧಪಡಿಸಿಕೊಳ್ಳಲು ಸೂಚಿಸಲಾಗಿದೆ.

- ಶಿವಾನಂದ ಬಿ. ಕರಾಳೆ, ಅಪರ ಜಿಲ್ಲಾಧಿಕಾರಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ