ಕೆ.ಎಂ.ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಮುಖಂಡ ದೇವಪ್ಪ ಒತ್ತಾಯ

KannadaprabhaNewsNetwork |  
Published : Jun 19, 2026, 01:45 AM IST
18ಎಚ್ಎಸ್ಎನ್15 :  | Kannada Prabha

ಸಾರಾಂಶ

ರಾಜ್ಯದ ವಿಧಾನಸಭೆಯಲ್ಲಿ ಜಿಲ್ಲೆಯ ಸಮಸ್ಯೆಗಳು, ರೈತರ ಸಂಕಷ್ಟ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜನಜೀವನಕ್ಕೆ ಸಂಬಂಧಿಸಿದ ವಿವಿಧ ವಿಷಯಗಳನ್ನು ನಿರಂತರವಾಗಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯುವ ಕೆಲಸವನ್ನು ಶಿವಲಿಂಗೇಗೌಡ ಮಾಡಿದ್ದಾರೆ. ಅವರ ಅನುಭವ ಮತ್ತು ಆಡಳಿತಾತ್ಮಕ ದೃಷ್ಟಿಕೋನ ಸಚಿವ ಸಂಪುಟದಲ್ಲಿ ರಾಜ್ಯದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಅರಸೀಕೆರೆ ಕ್ಷೇತ್ರದ ಶಾಸಕ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಂ. ಶಿವಲಿಂಗೇಗೌಡ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಿ ಹಾಸನ ಜಿಲ್ಲೆಯ ಅಭಿವೃದ್ಧಿಗೆ ವೇಗ ನೀಡಬೇಕು ಎಂದು ಹಾಸನ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಎಂ.ಕೆ. ದೇವಪ್ಪ ಮಲ್ಲಿಗೆವಾಳು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ರಾಜ್ಯ ರಾಜಕಾರಣದಲ್ಲಿ ಅಪಾರ ಅನುಭವ ಹೊಂದಿರುವ ಕೆ.ಎಂ. ಶಿವಲಿಂಗೇಗೌಡ ಅವರು ಹಲವು ದಶಕಗಳಿಂದ ಜನಪರ ರಾಜಕಾರಣಕ್ಕೆ ಬದ್ಧರಾಗಿ ಕಾರ್ಯನಿರ್ವಹಿಸುತ್ತಿದ್ದು, ಬಡವರು, ರೈತರು, ದಲಿತರು ಹಾಗೂ ಅಲ್ಪಸಂಖ್ಯಾತರ ಪರ ಸದನದ ಒಳಗೂ ಹೊರಗೂ ನಿರಂತರವಾಗಿ ಧ್ವನಿ ಎತ್ತಿದ್ದಾರೆ ಎಂದರು. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಿವಲಿಂಗೇಗೌಡ ಅವರು ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಕ್ಷೇತ್ರದ ಜನರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಿದ್ದಾರೆ. ಪ್ರಸ್ತುತ ಹಾಸನ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕರಾಗಿರುವ ಅವರು ಪಕ್ಷದ ಸಂಘಟನೆ ಬಲಪಡಿಸುವಲ್ಲಿಯೂ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಘಟಕ ಮೆಚ್ಚುಗೆ ವ್ಯಕ್ತಪಡಿಸಿದೆ. ಅರಸೀಕೆರೆ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಕುಡಿಯುವ ನೀರಿನ ಯೋಜನೆಗಳು, ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗಳು ಸೇರಿ ಹಲವು ಅಭಿವೃದ್ಧಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವುದು ಅವರ ಆಡಳಿತ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಸಾರ್ವಜನಿಕರೊಂದಿಗೆ ನಿರಂತರ ಸಂಪರ್ಕ ಹೊಂದಿರುವ ಅವರು ಎಲ್ಲ ಸಮುದಾಯಗಳ ವಿಶ್ವಾಸ ಗಳಿಸಿರುವ ನಾಯಕರಾಗಿದ್ದಾರೆ ಎಂದು ಹೇಳಿದರು.

ರಾಜ್ಯದ ವಿಧಾನಸಭೆಯಲ್ಲಿ ಜಿಲ್ಲೆಯ ಸಮಸ್ಯೆಗಳು, ರೈತರ ಸಂಕಷ್ಟ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜನಜೀವನಕ್ಕೆ ಸಂಬಂಧಿಸಿದ ವಿವಿಧ ವಿಷಯಗಳನ್ನು ನಿರಂತರವಾಗಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯುವ ಕೆಲಸವನ್ನು ಶಿವಲಿಂಗೇಗೌಡ ಮಾಡಿದ್ದಾರೆ. ಅವರ ಅನುಭವ ಮತ್ತು ಆಡಳಿತಾತ್ಮಕ ದೃಷ್ಟಿಕೋನ ಸಚಿವ ಸಂಪುಟದಲ್ಲಿ ರಾಜ್ಯದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ದಿವಂಗತ ಎಚ್.ಸಿ. ಶ್ರೀಕಂಠಯ್ಯ ಅವರ ಬಳಿಕ ಹಾಸನ ಜಿಲ್ಲೆಗೆ ಸಚಿವ ಸ್ಥಾನ ದೊರೆಯದಿರುವ ಹಿನ್ನೆಲೆ ಈ ಬಾರಿ ಜಿಲ್ಲೆಯ ಪ್ರತಿನಿಧಿಯಾಗಿ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಅವಕಾಶ ನೀಡುವುದು ಸೂಕ್ತವಾಗಿದೆ. ಇದರಿಂದ ಜಿಲ್ಲೆಗೆ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ತರುವ ಜೊತೆಗೆ ಕಾಂಗ್ರೆಸ್ ಪಕ್ಷದ ಸಂಘಟನೆಗೂ ಹೊಸ ಚೈತನ್ಯ ಸಿಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕ ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ವರಿಷ್ಠರು ತಮ್ಮ ಸಚಿವ ಸಂಪುಟದಲ್ಲಿ ಕೆ.ಎಂ. ಶಿವಲಿಂಗೇಗೌಡ ಅವರನ್ನು ಸೇರ್ಪಡೆಗೊಳಿಸಿ ಹಾಸನ ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಸದಾಶಿವ, ಅಶೋಕ್ ನಾಯಕರಹಳ್ಳಿ, ವೆಂಕಟೇಶ್, ಮಣಿಕಂಠ, ಕರುಣಾಕರ್ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೃಷಿ ಇಲಾಖೆಯಿಂದ ರೈತರಿಗೆ ಉತ್ತಮ ಬಿತ್ತನೆ ಬೀಜ, ರಸಗೊಬ್ಬರ ನೀಡಿ
1ಕ್ಕೆ ಹರಿ ಪದಗ್ರಹಣ: ಕಾರ್ಯಕರ್ತರ ಭಾಗಿಗೆ ಕರೆ