ಬಳ್ಳಾರಿ: ಜಿಲ್ಲೆಯ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಸಮರ್ಪಕ ಕ್ಲೋರಿನೇಷನ್‍ನೊಂದಿಗೆ ಶುದ್ಧೀಕರಿಸಿದ ನೀರು ಪೂರೈಕೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕಚಂದ್ರ ಎಲ್ಲ ತಾಲೂಕಿನ ತಾಪಂ ಇಒಗಳಿಗೆ ಸೂಚಿಸಿದರು.
ನೀರಿನ ಮೂಲಗಳ ಪರಿಶೀಲನೆ ನಡೆಸಿ:
ಮುಂಗಾರು ಪೂರ್ವ ಮಳೆ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಸಾರ್ವಜನಿಕರಿಗೆ ಕುಡಿಯುವ ನೀರನ್ನು ಕುದಿಸಿ ಆರಿಸಿ ಕುಡಿಯುವಂತೆ ಅರಿವು ಮೂಡಿಸಬೇಕು. ಯಾವುದೇ ಕಾರಣಕ್ಕೂ ಕಲುಷಿತ ನೀರು ಪೂರೈಕೆಯಾಗಬಾರದು. ಇದರ ಬಗ್ಗೆ ಎಚ್ಚರ ವಹಿಸಬೇಕು. ನಿರಂತರವಾಗಿ ನೀರಿನ ಮೂಲಗಳನ್ನು ಪರಿಶೀಲನೆ ನಡೆಸುತ್ತಿರಬೇಕು. ನೀರಿನ ಸಂಗ್ರಹಾಗಾರಗಳನ್ನು ಶುಚಿಗೊಳಿಸುತ್ತಿರಬೇಕು. ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ ನಂತರವೇ ಸರಬರಾಜು ಮಾಡಬೇಕು ಎಂದು ನಿರ್ದೇಶನ ನೀಡಿದರು.ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಾಗದಿರಲಿ;
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಭತ್ತ, ಜೋಳ, ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ, ತೊಗರಿ, ರಾಗಿ ಸೇರಿ ಒಟ್ಟು 16,223 ಕ್ವಿಂಟಲ್ ಬಿತ್ತನೆ ಬೀಜ ದಾಸ್ತಾನಿದೆ. ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದೆ. ವಿತರಣೆ ಕಾರ್ಯ ಪ್ರಾರಂಭವಾಗಿದ್ದು, 921 ಕ್ವಿಂಟಲ್ ಬಿತ್ತನೆ ಬೀಜ ವಿತರಣೆಯಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ಸಭೆಗೆ ತಿಳಿಸಿದರು.
ಸರ್ಕಾರಿ ಸಂಬಂಧಿತ ಕೆಲಸಗಳಿಗೆ ಸಾರ್ವಜನಿಕರನ್ನು ಅಲೆದಾಡಿಸುವಂತಿಲ್ಲ. ನಿಗದಿತ ಕಾಲಾವಧಿಯೊಳಗೆ ಕೆಲಸ ಮಾಡಿಕೊಡಬೇಕು ಎಂದು ಎಲ್ಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ ಮಾತನಾಡಿ, ವಸತಿನಿಲಯಗಳಲ್ಲಿ ಸ್ವಚ್ಛತೆ ಮತ್ತು ಊಟದ ವ್ಯವಸ್ಥೆ ಕುರಿತು ದೂರು ಕೇಳಿ ಬರುತ್ತಿದ್ದು, ಅಧಿಕಾರಿಗಳು ವಸತಿನಿಲಯಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ವಿವಿಧ ವಸತಿ ಶಾಲೆಗಳಿಗೆ ಭೇಟಿ ನೀಡಲು ವೇಳಾಪಟ್ಟಿ ಮತ್ತು ಅಲ್ಲಿನ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದ ವಿವರ ನಮೂದಿಸಲು, ರಾಜ್ಯದಲ್ಲಿಯೇ ಮೊದಲ ಬಾರಿಗೆ ವಿಶೇಷವಾಗಿ ಜಿಪಂನಿಂದ ಪ್ರಗತಿ ಆ್ಯಪ್ ರಚಿಸಿದೆ. ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ಅಧಿಕಾರಿಗಳಿಗೆ ತಮ್ಮ ಇಲಾಖೆಗಳಿಗೆ ಸಂಬಂಧಿಸಿದಂತೆ ಪರಿಣಾಮಕಾರಿಯಾಗಿ ಕೆಲಸ ಮಾಡಲು ಹಾಗೂ ವೇಳಾಪಟ್ಟಿಯಂತೆ ಕ್ಷೇತ್ರ ಭೇಟಿ, ಪರಿಶೀಲನೆ ನಡೆಸಲು ಮತ್ತು ಪರಿಶೀಲನೆ ನಡೆಸಿದ ಎಲ್ಲ ವಿವರಗಳನ್ನು ಅದರಲ್ಲಿ ನಮೂದಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಅಧಿಕಾರಿಗಳಿಗೆ ಸೂಚಿಸಿದರು.