ಗದಗ: ಪ್ರಸ್ತುತ ಬೇಸಿಗೆ ದಿನಗಳಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಪ್ರಥಮಾದ್ಯತೆ ಮೇರೆಗೆ ಇಲಾಖಾಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಯುದ್ಧೋಪಾದಿಯಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು.
ಬೇಸಿಗೆ ದಿನಗಳಲ್ಲಿ ಬಿಸಿಲಿನ ತಾಪದಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಹಿರಿಯ ನಾಗರಿಕರು, ಗರ್ಭಿಣಿಯರು ಚಿಕ್ಕಮಕ್ಕಳಿಗೆ ಬಿಸಿಲಿನ ತಾಪಮಾನದಿಂದ ಆರೋಗ್ಯ ಸಮಸ್ಯೆ ಉಂಟಾಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ ಮಾತನಾಡಿ, ಬೇಸಿಗೆ ದಿನಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗುವ ಸಂಭವವಿರುವುದರಿಂದ ಹೀಟ್‌ವೇವ್‌ನಿಂದ ಆರೋಗ್ಯ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದರು.ಜಿಲ್ಲೆಯ ಜಿಗಳೂರು ಗ್ರಾಮದ ಹತ್ತಿರ ನಿರ್ಮಿಸಿರುವ ಜಲ ಸಂಗ್ರಹಗಾರ ಕೆರೆಯ ಸದ್ಯ ನೀರಿನ ಸಂಗ್ರಹಣಾ ಸಾಮರ್ಥ್ಯ 2510 ಎಂಎಲ್ಡಿ (0.08 ಟಿಎಂಸಿ) ಇದೆ. ಆ ನೀರು ರೋಣ, ಗಜೇಂದ್ರಗಡ ಮತ್ತು ನರೇಗಲ್ ಪಟ್ಟಣಗಳಿಗೆ 7 ತಿಂಗಳಿಗೆ ಸಾಕಾಗುತ್ತದೆ. ನವಿಲುತೀರ್ಥ ಡ್ಯಾಂದಲ್ಲಿ(ಲೈವ್ ಸ್ಟೋರೇಜ್) 8.259 ಟಿಎಂಸಿ ನೀರು, ಭದ್ರಾ ಡ್ಯಾಂ ದಲ್ಲಿ(ಲೈವ್ ಸ್ಟೋರೇಜ್ ) 25.548 ಟಿಎಂಸಿ ನೀರು, ಸಿಂಗಟಾಲೂರು ಬ್ಯಾರೇಜಿನಲ್ಲಿ(ಲೈವ್ ಸ್ಟೋರೇಜ್) 1.828 ಟಿಎಂಸಿ ನೀರು ಸಂಗ್ರಹವಿರುತ್ತದೆ. ಪ್ರಸ್ತುತ ಲಭ್ಯವಿರುವ ನೀರು ಮುಂದಿನ 72 ದಿನಗಳಿಗೆ ಸಾಕಾಗಲಿದೆ ಎಂದು ಸಂಬಂಧಿತ ಅಧಿಕಾರಿಗಳು ತಿಳಿಸಿದರು.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ ಮಾತನಾಡಿ, ನೀರಿನ ಸಮಸ್ಯೆ ಉದ್ಭವಿಸಬಹುದಾದ 9 ನಗರ ಸ್ಥಳೀಯ ಸಂಸ್ಥೆಗಳಲ್ಲಿನ 60 ವಾರ್ಡುಗಳನ್ನು ಮುಂಜಾಗ್ರತೆಗಾಗಿ ಗುರುತಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಕುಡಿಯುವ ನೀರು ಕೊರತೆ ಆಗಬಹುದಾದ ವಾರ್ಡುಗಳಲ್ಲಿ ಒಪ್ಪಂದಕ್ಕಾಗಿ ಗುರುತಿಸಲಾದ ಹೆಚ್ಚಿನ ಇಳುವರಿ ನೀಡುವ 29 ಬೋರ್‌ವೆಲ್‌ಗಳನ್ನು ಗುರುತಿಸಲಾಗಿದೆ ಎಂದರು.ಈ ವೇಳೆ ಡಿವೈಎಸ್‌ಪಿ ಮಹಾಂತೇಶ ಸಜ್ಜನರ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕೆ., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್. ಬುರುಡಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.