ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲೆಯ ಗ್ರಾಮೀಣ ಜನರ ಜೀವನ ಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಆದ್ಯತೆ ಮೇಲೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಪಂ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಜನರು ಯಾವುದೇ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಾಮಾಜಿಕ ಕಳಕಳಿಯೊಂದಿಗೆ ಜವಾಬ್ದಾರಿ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳನ್ನಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಚರಂಡಿಯ ನೀರು ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡಿ, ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮ ಕೈಗೊಳ್ಳಬೇಕು. ಅವಿಭಕ್ತ ಕುಟುಂಬಗಳಿಗೆ ಸಮುದಾಯ ಶೌಚಾಲಯ ನಿರ್ಮಿಸಿ, ಸೌಕರ್ಯಗಳನ್ನು ಒದಗಿಸುವುದನ್ನು ಸಂಬಂಧಿಸಿದ ಗ್ರಾಮ ಪಂಚಾಯತಿಗಳು ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಸೂಚಿಸಿದರು.
ರೈತರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ವಿದ್ಯುತ್ ಪರಿವರ್ತಕಗಳಿಗೆ ರೈತರು ಹೆಸ್ಕಾಂಗೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಪರಿಶೀಲನೆ ನಡೆಸಿ, ಆದ್ಯತೆ ಮೇಲೆ ರೈತರ ಬೇಡಿಕೆಗನುಗುಣವಾಗಿ ವಿದ್ಯುತ್ ಪರಿವರ್ತಕಗಳನ್ನು ಒದಗಿಸಲು ಕ್ರಮ ವಹಿಸಬೇಕು. ಬಾಕಿ ಇರುವ ಅರ್ಜಿಗಳ ತ್ವರಿತ ವಿಲೇವಾರಿಗೆ ಕ್ರಮ ವಹಿಸಬೇಕು. ಬಾಕಿ ಇರುವ ಅರ್ಜಿಗಳ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ವರದಿ ಸಲ್ಲಿಸಬೇಕು ಎಂದು ಹೆಸ್ಕಾಂ ಅಧೀಕ್ಷಕ ಅಭಿಯಂತರರಿಗೆ ಸೂಚನೆ ನೀಡಿದರು.ಜಿಲ್ಲಾಸ್ಪತ್ರೆ ಕಾರ್ಯವೈಖರಿಗೆ ಪ್ರಶಂಸೆ:
ಪ್ರಗತಿ ಪರಿಶೀಲನಾ ಸಭೆಯಲ್ಲಿ ಲೋಕಾಯುಕ್ತ ಬಿ.ಎಸ್.ಪಾಟೀಲ ಅವರು ಜಿಲ್ಲಾಸ್ಪತ್ರೆಯ ಕಾರ್ಯವೈಖರಿ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು. ಪ್ರತಿದಿನ ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಸೇರಿದಂತೆ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಗುಣಮಟ್ಟದ ಆಹಾರ ನೀಡುವ ಮೂಲಕ ಮತ್ತಷ್ಟು ಕಾರ್ಯಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಶಿವಶರಣಯ್ಯ ಮಾತನಾಡಿ, ಜಿಲ್ಲೆಯಲ್ಲಿ ಅರಣ್ಯೀಕರಣಕ್ಕೆ ಒತ್ತು ನೀಡಬೇಕು. ವರ್ಷಕ್ಕೆ ೫ ಲಕ್ಷ ಸಸಿ ನೆಡುವ ಗುರಿ ಹಾಕಿಕೊಳ್ಳುವ ಮೂಲಕ ಅರಣ್ಯೀಕರಣಕ್ಕೆ ಮುಂದಾಗಬೇಕು. ನರೇಗಾ ಯೋಜನೆಯಡಿ ಸಾಮಾಜಿಕ ಹಾಗೂ ಪ್ರಾದೇಶಿಕ ಅರಣ್ಯ ವಿಭಾಗದಲ್ಲಿ ೧.೩೦ ಲಕ್ಷ ಸಸಿಗಳನ್ನು ನೆಟ್ಟು ಬೆಳೆಸುವ ಗುರಿ ಹಾಕಿಕೊಂಡಿರುವುದಕ್ಕೆ ಲೋಕಾಯುಕ್ತರು ಶ್ಲಾಘನೆ ವ್ಯಕ್ತಪಡಿಸಿದರು.
ಮುಂದಿನ ಮಳೆಗಾಲದಲ್ಲಿ ೧.೨೫ ಲಕ್ಷ ಸಸಿಗಳನ್ನು ಪ್ರಾದೇಶಿಕ ಅರಣ್ಯ ವಿಭಾಗದಿಂದ ಗುರಿ ಹಾಕಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ಕಬ್ಬು ನುರಿಸುವ ಹಂಗಾಮಿಗೆ ಸಂಬಂಧಿಸಿದಂತೆ ಹಲವು ಬಾರಿ ಕಬ್ಬು ಬೆಳೆಗಾರರು ಹಾಗೂ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಲಾಗಿದೆ. ಕಾರ್ಖಾನೆಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಕಬ್ಬು ನುರಿಸುವ ಕಾರ್ಖಾನೆಗಳು ಎಲ್ಲ ನಿಯಮಗಳನ್ನು ಪಾಲಿಸುತ್ತಿರುವ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು ಎಂದರು.
ಈ ಸಂದರ್ಭದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಸಾರ್ವಜನಿಕರ ಕುಂದು-ಕೊರತೆ, ಅಹವಾಲುಗಳನ್ನು ಆಲಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ, ಜಿಪಂ ಸಿಇಒ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ,ಲೋಕಾಯುಕ್ತ ವಿಜಯಪುರ ಪೊಲೀಸ್ ಅಧೀಕ್ಷಕ ಟಿ.ಮಲ್ಲೇಶ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ವಿಜಯಪುರ ಎಸಿ ಗುರುನಾಥ ದಡ್ಡೆ, ಇಂಡಿ ಎಸಿ ಆಬೀದ ಗದ್ಯಾಳ, ಲೋಕಾಯುಕ್ತ ಡಿವೈಎಸ್‌ಪಿ ಸುರೇಶ ರೆಡ್ಡಿ ಸೇರಿದಂತೆ ಮುಂತಾದವರು ಇದ್ದರು.
ಕೋಟ್ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಕಡಿವಾಣಕ್ಕೆ ಅಗತ್ಯ ಕ್ರಮ ವಹಿಸಬೇಕು. ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕಾರ್ಯಕ್ರಮಗಳನ್ನು ಆಯೋಜಿಸಿ ದುಶ್ಚಟಗಳ ಕಡಿವಾಣಕ್ಕೆ ಕ್ರಮ ವಹಿಸುವಂತೆ ಸೂಚನೆ ನೀಡಿದ ಅವರು, ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ಸಾಮಾಜಿಕ ಬದ್ಧತೆಯನ್ನಾಗಿ ಪರಿಗಣಿಸಿ ಕಾರ್ಯಕ್ರಮ ರೂಪಿಸಿ ಜಾಗೃತಿ ಮೂಡಿಸಬೇಕು.
ಬಿ.ಎಸ್.ಪಾಟೀಲ, ಲೋಕಾಯುಕ್ತ ನ್ಯಾಯಮೂರ್ತಿ