ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ವರದಕ್ಷಿಣೆ ನೀಡುವುದು ಮತ್ತು ಪಡೆಯುವುದು ಎರಡೂ ಕಾನೂನುಬಾಹಿರ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಚಿನ್ ಕೌಶಿಕ್ ಹೇಳಿದರು.
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ವರದಕ್ಷಿಣೆ ನೀಡುವುದು ಮತ್ತು ಪಡೆಯುವುದು ಎರಡೂ ಕಾನೂನುಬಾಹಿರ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಚಿನ್ ಕೌಶಿಕ್ ಹೇಳಿದರು.
ಪಟ್ಟಣದ ನ್ಯಾಯಾಲಯಗಳ ಸಂಕೀರ್ಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಶಿಶು ಅಭಿವೃದ್ಧಿ ಇಲಾಖೆ ಹಾಗೂ ಇತರ ಎಲ್ಲ ಸರ್ಕಾರಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವರದಕ್ಷಿಣೆ ಎಂಬುವುದು ಒಂದು ಸಾಮಾಜಿಕ ಪಿಡುಗು. ಇದು ಸಮಾಜವನ್ನು ಹಾಳು ಮಾಡುತ್ತಿದೆ. ಈ ಪಿಡುಗನ್ನು ಬುಡಸಮೇತ ನಿರ್ಮೂಲನೆ ಮಾಡಲು ವರದಕ್ಷಿಣೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಕಾಯ್ದೆ ಜಾರಿಯಾಗಿ ಸಾಕಷ್ಟು ವರ್ಗಳಾದರೂ ಸಹ ವರದಕ್ಷಿಣೆ ಪ್ರಕರಣಗಳು ಇನ್ನೂ ಬೆಳಕಿಗೆ ಬರುತ್ತಿರುವುದು ವಿಷಾದನೀಯ. ಇಂತಹ ಪರಿಸ್ಥಿತಿಯಲ್ಲಿ ಅಧಿಕಾರಿಗಳು ಕಾನೂನುಬಾಹಿರ ಚಟುವಟಿಕೆ ನಡೆಸುವವರ ವಿರುದ್ಧ ತಕ್ಷಣ ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ಮೂಲಕ ಕಾನೂನಿನ ಬಲವನ್ನು ಹೆಚ್ಚಿಸಿದಲ್ಲಿ ಮಾತ್ರ ವರದಕ್ಷಿಣೆ ಪ್ರಕರಣಗಳನ್ನ ತಡೆಗಟ್ಟಬಹುದು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಸಂಯೋಜಕಿ ಭಾರತಿ ಪಾಟೀಲ ಮಾತನಾಡಿ, ವರದಕ್ಷಿಣೆಗಾಗಿ ಹೆಣ್ಣಿನ ಮೇಲೆ ನಿರಂತರ ಶೋಷಣೆ ನಡೆಯುತ್ತಲಿದೆ. ಎಷ್ಟೋ ಹೆಣ್ಣುಮಕ್ಕಳನ್ನು ಸುಟ್ಟ ಉದಾಹರಣೆಗಳು ಇವೆ. ಇಷ್ಟಾದರೂ ಸಮಾಜ ಎಚ್ಚೆತ್ತುಕೊಳ್ಳದಿರುವುದು ಬೇಸರದ ಸಂಗತಿ. ಯುವ ಪೀಳಿಗೆ ವರದಕ್ಷಿಣೆ ನಿಷೇಧ ಕಾಯ್ದೆಯನ್ನ ಬೆಂಬಲಿಸಬೇಕು. ತಮ್ಮ ಮದುವೆಯಲ್ಲಿ ವರದಕ್ಷಿಣೆ ಪಡೆಯುವುದಿಲ್ಲ ಅಂತಾ ಶಪಥ ಮಾಡಬೇಕು. ಹೆಣ್ಣು ಮಕ್ಕಳಿಗೆ ವರದಕ್ಷಿಣೆ ಕೇಳಿದಾಗ ಸಂಬಂಧಿಸಿದ ಅಧಿಕಾರಿಗಳಿಗೆ, ಪೊಲೀಸರಿಗೆ ದೂರಲು ಮುಂದಾಗಬೇಕು ಅಂದಾಗ ಮಾತ್ರ ಈ ಪಿಡುಗನ್ನು ಹೋಗಲಾಡಿಸಲು ಸಾಧ್ಯ ಎಂದರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಮಾತನಾಡಿದರು. ವಕೀಲೆ ಹಸೀನಾ ಅನಂತಪೂರ ವಿಶೇಶ ಉಪನ್ಯಾಸ ನೀಡಿದರು. ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯಗಳು ಹಾಗೂ ಸಿವಿಲ್ ನ್ಯಾಯಾಧೀಶರಾದ ರಾಮಮೂರ್ತಿ ಎನ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ, ನ್ಯಾಯವಾದಿಗಳ ಸಂಘದ ಪ್ರ.ಕಾರ್ಯದರ್ಶಿ ಪಿ.ಬಿ.ಗೌಡರ, ಕ್ಷೇತ್ರ ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಜೆ.ದಖನಿ ವೇದಿಕೆ ಮೇಲಿದ್ದರು. ನ್ಯಾಯವಾದಿ ಚೇತನ ಶಿವಶಿಂಪಿ, ತಾಲೂಕು ಕಾನೂನು ಸೇವಾ ಸಮಿತಿಯ ಆಡಳಿತ ಸಹಾಯಕ ಅರವಿಂದ ಕುಂಬಾರ, ದಲಾಯತ್ ಮಹಾಂತೇಶ ಹಚರೆಡ್ಡಿ ಸೇರಿದಂತೆ, ನ್ಯಾಯವಾದಿಗಳು, ನ್ಯಾಯಾಲಯದ ಸಿಬ್ಬಂದಿ ಮತ್ತು ಸಿಡಿಪಿಒ ಕಚೇರಿಯ ಸಿಬ್ಬಂದಿ ಇದ್ದರು. ನ್ಯಾಯವಾದಿ ಎಂ.ಎ.ಲಿಂಗಸೂರ ಕಾರ್ಯಕ್ರಮ ನಿರ್ವಹಿಸಿದರು. ವರದಕ್ಷಿಣೆ ನೀಡುವುದು ಮತ್ತು ಸ್ವೀಕರಿಸುವುದು ಕಾನೂನುಬಾಹಿರ. ಈ ಅಪರಾಧದಲ್ಲಿ ತೊಡಗಿದವರಿಗೆ ಕಾಯ್ದೆಯ ಪ್ರಕಾರ ಕನಿಷ್ಠ 5 ವರ್ಷಗಳ ಶಿಕ್ಷೆ ಹಾಗೂ ₹ 15 ಸಾವಿರ ದಂಡ ವಿಧಿಸಲಾಗುತ್ತದೆ. ಅಲ್ಲದೆ, ವರದಕ್ಷಿಣೆ ಕೇಳಿದರೆ 6 ತಿಂಗಳಿಂದ 2 ವರ್ಷಗಳ ವರೆಗೆ ಶಿಕ್ಷೆ ವಿಧಿಸುವ ವ್ಯವಸ್ಥೆ ಇದೆ. ಯಾರೂ ಈ ರೀತಿಯ ತಪ್ಪು ಮಾಡಬಾರದು.
- ಸಚಿನ್ ಕೌಶಿಕ್, ಅಧ್ಯಕ್ಷರು, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.