ಉಡುಪಿ: ಆರೋಗ್ಯ ಮತ್ತು ಶಿಕ್ಷಣ ಒಂದಕ್ಕೊಂದು ಪೂರಕ. ಉತ್ತಮ ಆರೋಗ್ಯವಂತ ವಿದ್ಯಾರ್ಥಿಗಳಿಗೆ ಪಾಠಗಳ ಬಗ್ಗೆ ಆಸಕ್ತಿ ಹೆಚ್ಚಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳಿಸಲು ಸಾಧ್ಯವಾಗುತ್ತದೆ. ಆದ್ದರಿಂದಲೇ ಸರ್ಕಾರದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಶಾಲೆಗಳಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ್ ಹುಬ್ಬಳ್ಳಿ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೇ ಜಂತು ಹುಳ ನಿವಾರಣೆಗಾಗಿ ನೀಡುವ ಅಲ್‌ಬೆಂಡಜೋಲ್ ಮಾತ್ರೆಗಳನ್ನು ಸೇವಿಸಬಹುದು, ಇದರಿಂದ ಆರೋಗ್ಯಕ್ಕೆ ಯಾವುದೇ ರೀತಿಯ ಹಾನಿಯಾಗುವುದಿಲ್ಲ. ವಿಶೇಷವಾಗಿ ಹೆಣ್ಣು ಮಕ್ಕಳು ಈ ಮಾತ್ರೆಗಳನ್ನು ಸೇವಿಸುವುದರಿಂದ ಭವಿಷ್ಯದಲ್ಲಿ ವೈವಾಹಿಕ ಬದುಕಿನಲ್ಲಿ ಎದುರಾಗಬಹುದಾದ ಅಪೌಷ್ಠಿಕತೆ ಮತ್ತು ರಕ್ತಹೀನತೆಯಂತಹ ಆರೋಗ್ಯ ಸಮಸ್ಯೆಗಳಿಂದ ಮುಕ್ತರಾಗಬಹುದು ಎಂದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಲೋಕೇಶ್ ಸಿ. ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ತಮ್ಮ ಆರೋಗ್ಯದ ಕಡೆಗೂ ಗಮನಹರಿಸಬೇಕು. ಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವುದನ್ನು ರೂಢಿಸಿಕೊಳ್ಳಬೇಕು. ಜಂತುಹುಳು ನಿವಾರಣೆಗೆ ವರ್ಷದಲ್ಲಿ ಎರಡು ಬಾರಿ ಜಂತುಹುಳು ನಿವಾರಣಾ ಮಾತ್ರೆಗಳನ್ನು ತಪ್ಪದೇ ಸೇವಿಸಬೇಕು ಎಂದರು.ಈ ಸಂದರ್ಭದಲ್ಲಿ ಜಂತು ಹುಳು ನಿವಾರಣೆ ಜಾಗೃತಿ ಕುರಿತು ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು. ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಜೋತ್ಸ್ನಾ ಬಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್, ಶಾಲಾ ಮುಖ್ಯೋಪಾಧ್ಯಾಯಿನಿ ಇಂದಿರಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಸ್ವಾಗತಿಸಿ, ಶಶಿಧರ್ ಹೆಚ್. ನಿರೂಪಿಸಿ, ಡಿಪಿಸಿ ಸುಧೀಂದ್ರ ವಂದಿಸಿದರು.