ಚನ್ನಪಟ್ಟಣ: ದ್ವಿಚಕ್ರ ವಾಹನಕ್ಕೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬ್ರಿಡ್ಜ್ ಬಳಿ ಬೆಂ-ಮೈ ದಶಪಥ ರಸ್ತೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ರಾಯಸಮುದ್ರದ ಪ್ರಭಾಕರ್(25), ಮದ್ದೂರಿನ ಮೋಬಳಗೆರೆ ಬೋರೆ ಗ್ರಾಮದ ಮಹೇಶ್(38) ಮೃತರು. ಸೋಮವಾರ ರಾತ್ರಿ ಇವರು ಚನ್ನಪಟ್ಟಣದ ತಿಟ್ಟಮಾರನಹಳ್ಳಿ ಬ್ರಿಡ್ಜ್ ಬಳಿ ತಮ್ಮ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಹಿಂದಿನಿಂದ ಬಂದ ಅಶೋಕ್ ಲೇ ಲ್ಯಾಂಡ್ ಗೂಡ್ಸ್ ವಾಹನ ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಪ್ರಭಾಕರ್ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಮಹೇಶ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.