- ಜಿಲ್ಲೆಯ ರೈತರು ತ್ವರಿತವಾಗಿ ಹೆಸರು ನೋಂದಾಯಿಸಿಕೊಳ್ಳಬೇಕು: ಡಿ.ಸಿ. ಸೂಚನೆ । ಟಾಸ್ಕ್ ಫೋರ್ಸ್ ಸಮಿತಿ ಸಭೆ - - -
ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿನ ಹಿಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ವತಿಯಿಂದ ಅಥವಾ ಮಾನ್ಯತೆ ಪಡೆದ ಉಪ ಏಜೆನ್ಸಿಗಳಿಂದ ಜಿಲ್ಲೆಯ ರೈತರ ಭತ್ತ ಖರೀದಿಸಲು ಉದ್ದೇಶಿಸಿದೆ. ಅರ್ಹ ರೈತರು ಜಗಳೂರು ಹೊರತುಪಡಿಸಿ, ಜಿಲ್ಲೆಯ ಉಳಿದ 04 ಭತ್ತ ಖರೀದಿ ಕೇಂದ್ರಗಳಲ್ಲಿ ಭತ್ತ ಖಟಾವಿನವರೆಗೂ ಕಾಯದೇ ನಿಗದಿಪಡಿಸಿದ ಕಾಲಮಿತಿಯೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದರು.
ಅವರು ಶುಕ್ರವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಹಿಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಗೆ ಸಂಬಂಧಿಸಿದಂತೆ ಏರ್ಪಡಿಸಲಾಗಿದ್ದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈ ವಿಷಯಕ್ಕೆ ಸಂಬಂಧಿಸಿದಂತೆ ಕೃಷಿ ಮತ್ತು ಆಹಾರ ಇಲಾಖೆಯ ಅಧಿಕಾರಿಗಳು ಕೂಡಲೇ ಖರೀದಿ ಕೇಂದ್ರಗಳಲ್ಲಿ ಭತ್ತ ಖರೀದಿಗೆ ಅಗತ್ಯವಾಗಿರುವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅವರು ಸಲಹೆ ನೀಡಿದರು.
ಅಧಿಕಾರಿಗಳು ಖರೀದಿಗೆ ಸಂಬಂಧಿಸಿದ ಅಗತ್ಯ ಪ್ರಕ್ರಿಯೆಗಳನ್ನು ಕೂಡಲೇ ಪ್ರಾರಂಭಿಸಬೇಕು. ಅವಶ್ಯಕವಾಗಿರುವ ತಂತ್ರಾಂಶವನ್ನು ಎನ್.ಐ.ಸಿ.ಯ ಸಹಯೋಗದೊಂದಿಗೆ ಆಹಾರ ಇಲಾಖೆ ಅಧಿಕಾರಿಗಳು ಸಿದ್ಧಪಡಿಸಿಕೊಂಡು, ಖರೀದಿಯ ಮುನ್ನ ಮತ್ತು ನಂತರದ ಎಲ್ಲ ದತ್ತಾಂಶಗಳನ್ನು ಕಾಲಕಾಲಕ್ಕೆ ದಾಖಲಿಸುವಂತೆ ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಗ್ರಾಹಕ ಬಳಕೆಯ ಅಡುಗೆ ಅನಿಲದ ಸಿಲಿಂಡರ್‌ಗಳ ಸರಬರಾಜು ಸಮರ್ಪಕವಾಗಿದೆ. ಅತ್ಯಲ್ವ ಅವಧಿಯಲ್ಲಿ ಗ್ರಾಹಕರಿಗೆ ತಲುಪಿಸಲಾಗುತ್ತಿದೆ. ಕೃತಕ ಅಭಾವ ಸೃಷ್ಠಿಸಿ, ಗ್ರಾಹಕರಿಗೆ ತಪ್ಪು ಮಾಹಿತಿ ನೀಡಿ, ಜನರನ್ನು ಗೊಂದಲಕ್ಕೀಡು ಮಾಡುವ ವ್ಯಕ್ತಿ ಅಥವಾ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಕೆ.ಪಿ. ಮಧುಸೂದನ್ , ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಜಂಟಿ ನಿರ್ದೇಶಕಿ ಎಚ್.ಸಿ.ಎಂ. ರಾಣಿ, ಕೃಷಿ ಇಲಾಖೆಯ ಉಪನಿರ್ದೇಶಕ ಜಿಯಾವುಲ್ಲಾ, ರಾಜ್ಯ ಆಹಾರ ನಿಗಮದ ಜಿಲ್ಲಾ ವ್ಯವಸ್ಥಾಪಕ ನಾಗರಾಜ್, ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಫರ್ವೇಜ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
-16ಕೆಡಿವಿಜಿ32: ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು.