ಕನ್ನಡಪ್ರಭ ವಾರ್ತೆ ಮಡಿಕೇರಿ
ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಯನ್ನು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗೆ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಲಜೀವನ್ ಮಿಷನ್ ಯೋಜನೆಯಡಿ ಪ್ರತೀ ಕುಟುಂಬಕ್ಕೂ ನಲ್ಲಿ ನೀರು ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಇದರ ಗಂಭೀರತೆ ಅರ್ಥ ಮಾಡಿಕೊಂಡು ಬಾಕಿ ಇರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಲೋಕಸಭಾ ಸದಸ್ಯರು ನಿರ್ದೇಶನ ನೀಡಿದರು.ಪ್ರತೀ ಕುಟುಂಬಕ್ಕೂ ಶುದ್ಧ ಕುಡಿಯುವ ನೀರು:
ಜಲಜೀವನ್ ಮಿಷನ್ ಯೋಜನೆಯು ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷೆ ಯೋಜನೆಯಾಗಿದ್ದು, ಪ್ರತೀ ಕುಟುಂಬಕ್ಕೂ ಶುದ್ಧ ಕುಡಿಯುವ ನೀರು ಒದಗಿಸುವಲ್ಲಿ ಆದ್ಯತೆ ನೀಡಬೇಕು ಎಂದು ಸೂಚಿಸಿದರು.ಜಲಜೀವನ್ ಮಿಷನ್ ಯೋಜನೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಆಗಾಗ ಭೇಟಿ ನೀಡಿ ಸ್ಥಳ ಪರಿಶೀಲಿಸುವಂತಾಗಬೇಕು ಎಂದು ಸಂಸದರು ಸಲಹೆ ಮಾಡಿದರು.
ಈ ಬಗ್ಗೆ ಗಮನಸೆಳೆದ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ ಅವರು ಚೆಂಬೆಬೆಳ್ಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಜಲಜೀವನ್ ಮಿಷನ್ ಯೋಜನೆ ಪೂರ್ಣಗೊಳಿಸಿ, ಶುದ್ಧ ಕುಡಿಯುವ ನೀರು ಒದಗಿಸುವಂತಾಗಬೇಕು.ಜೆಜೆಎಂ ಬಗ್ಗೆ ಹಲವು ಬಾರಿ ಪ್ರಸ್ತಾಪಿಸಲಾಗಿದೆ. ಆದರೂ ಸಹ ಪರಿಪೂರ್ಣವಾಗಿ ಕಾಮಗಾರಿ ಆಗದಿರುವುದು ಬೇಸರ ತರಿಸಿದೆ ಎಂದರು.
ಇದಕ್ಕೆ ಧ್ವನಿಗೂಡಿಸಿದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ನಾಗೇಶ್ ಕುಂದಲ್ಪಾಡಿ ಅವರು ಜಲಜೀವನ್ ಮಿಷನ್ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು ಎಂದು ಸಲಹೆ ಮಾಡಿದರು.ಸಮನ್ವಯತೆ ಅತೀಮುಖ್ಯ:
ಮತ್ತೊಬ್ಬ ಸದಸ್ಯರಾದ ಡಾ.ನವೀನ್ ಕುಮಾರ್ ಮಾತನಾಡಿ ಜೆಜೆಎಂ ಸೇರಿದಂತೆ ಸರ್ಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುವಲ್ಲಿ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳ ಸಮನ್ವಯತೆ ಅತೀಮುಖ್ಯ. ಆ ನಿಟ್ಟಿನಲ್ಲಿ ಜೆಜೆಎಂ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಲಹೆ ಮಾಡಿದರು.ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ಮೂರು ಹಂತದಲ್ಲಿ ಕೆಲಸ ನಡೆದಿದ್ದು, ಜೆಜೆಎಂ ಕುಡಿಯುವ ನೀರು ಪೂರೈಕೆಗೆ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಸದಸ್ಯರಾದ ಕಾಂತಿ ಸತೀಶ್, ಜಲಜೀವನ್ ಮಿಷನ್ ಯೋಜನೆಗೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತಿದ್ದು, ಪ್ರತೀ ಕುಟುಂಬಕ್ಕೂ ಕುಡಿಯುವ ನೀರು ಪೂರೈಕೆ ಆಗಬೇಕು ಎಂದರು.ಜೆಜೆಎಂ ಸಂಬಂಧಿಸಿದಂತೆ ಎಲ್ಲೆಲ್ಲಿ ಸಮಸ್ಯೆ ಇದೆ ಎಂದು ಸ್ಥಳ ಪರಿಶೀಲಿಸಿ ವರದಿ ನೀಡಲಾಗುವುದು ಎಂದು ಜಿ.ಪಂ.ಸಿಇಒ ಅವರು ಹೇಳಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಭಾಸ್ಕರ್ ಅವರು ಮಾಹಿತಿ ನೀಡಿ ಜೆಜೆಎಂ ಯೋಜನೆ ಮೂರು ಹಂತದಲ್ಲಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.185 ಕಾಮಗಾರಿಗಳು ಪೂರ್ಣ:
ಮೊದಲ ಹಂತದಲ್ಲಿ 188 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಸುಮಾರು 13,517 ಲಕ್ಷ ರು. ಅಂದಾಜು ಮೊತ್ತದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. 185 ಕಾಮಗಾರಿಗಳು ಪೂರ್ಣಗೊಂಡಿದೆ ಎಂದು ತಿಳಿಸಿದರು.ಎರಡನೇ ಹಂತದಲ್ಲಿ 129 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, 85 ಕಾಮಗಾರಿಗಳು ಪೂರ್ಣಗೊಂಡಿದೆ. ಸುಮಾರು 9092 ಲಕ್ಷ ರು.. ಅಂದಾಜು ಮಾಡಲಾಗಿದೆ ಎಂದರು.
ಮೂರನೇ ಹಂತದಲ್ಲಿ 457 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, 348 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. 107 ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ವಿವರಿಸಿದರು.ಒಟ್ಟಾರೆ ಸುಮಾರು 35,869 ಲಕ್ಷ ರು. ಅಂದಾಜಿನಲ್ಲಿ ಒಟ್ಟು 23,218 ಲಕ್ಷ ರು. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಕಾರ್ಯಪಾಲಕ ಎಂಜಿನಿಯರ್ ಅವರು ವಿವರಿಸಿದರು.
ಮಡಿಕೇರಿ ಪಾರಂಪರಿಕ ತ್ಯಾಜ್ಯ ನಿರ್ವಹಣೆ ಸಂಬಂಧಿಸಿದಂತೆ ಈಗಾಗಲೇ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಆದರೆ ಇದುವರೆಗೆ ಯಾವುದೇ ಕೆಲಸಗಳು ಆಗದಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆದಷ್ಟು ತ್ವರಿತವಾಗಿ ಕಾಮಗಾರಿ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಸದಸ್ಯರಾದ ನಾಗೇಶ್ ಕುಂದಲ್ಪಾಡಿ ಅವರು ದಿಶಾ ಸಮಿತಿ ಸಭೆಯು ನಡೆದು ಹಲವು ತಿಂಗಳಾಗಿದ್ದು, ಇದುವರೆಗೆ ಏಕೆ ಅರಣ್ಯ ಹಾಗೂ ಪರಿಸರ ಇಲಾಖೆಯಿಂದ ಅನುಮತಿ ಪಡೆಯದೆ, ಕಾಮಗಾರಿಗೆ ಚಾಲನೆ ನೀಡಿದಿರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಇದಕ್ಕೆ ಧ್ವನಿಗೂಡಿಸಿದ ಮತ್ತೊಬ್ಬ ಸದಸ್ಯರಾದ ಡಾ.ನವೀನ್ ಕುಮಾರ್ ಅವರು ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಈ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಸಲಹೆ ಮಾಡಿದರು.ಈ ಸಂದರ್ಭದಲ್ಲಿ ಅರಣ್ಯ ಹಾಗೂ ಪರಿಸರ ಇಲಾಖೆಯ ಅನುಮತಿ ಪಡೆಯುವ ಬಗ್ಗೆ ಬೆಂಗಳೂರಿನ ಪ್ರಾದೇಶಿಕ ಕಚೇರಿಯಲ್ಲಿ ಗಮನಸೆಳೆಯಲಾಗುವುದು ಎಂದು ಸಂಸದರು ತಿಳಿಸಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪಾರಂಪರಿಕ ಕಸ ಕರಗಿಸುವ ಸಂಬಂಧ 5 ಬಾರಿ ಟೆಂಡರ್ ಆಗಿದ್ದು, ಯಾರೂ ಸಹ ಮುಂದೆ ಬಂದಿರಲಿಲ್ಲ. ಆ ನಿಟ್ಟಿನಲ್ಲಿ ವಿರಾಜಪೇಟೆ ಮತ್ತು ಕುಶಾಲನಗರ ಸೇರಿಸಿಕೊಂಡು ಕಸ ವಿಲೇವಾರಿಗೆ ಪ್ರಯತ್ನಿಸಲಾಗಿದೆ ಎಂದರು.ಸಮರ್ಪಕ ರಸ್ತೆ ನಿರ್ವಹಣೆ:
ಲೋಕೋಪಯೋಗಿ ಇಲಾಖೆಯ ರಸ್ತೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದ ಸಂಸದರು ಸಮರ್ಪಕ ರಸ್ತೆ ನಿರ್ವಹಣೆ ಮಾಡಬೇಕು. ರಸ್ತೆ ಬದಿ ಕಾಡು ಕಡಿಬೇಕು ಎಂದು ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ಗೆ ಸೂಚಿಸಿದರು.ಹಾಗೆಯೇ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ರಸ್ತೆಗಳನ್ನು ಅಭಿವೃದ್ಧಿ ಪಡಿಸುವಂತಾಗಬೇಕು. ಈಗಾಗಲೇ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಂಸದರು ಸೂಚಿಸಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮಿಣ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಕಲ್ಪಿಸುವಂತಾಗಬೇಕು ಎಂದು ಸಂಸದರು ಸೂಚಿಸಿದರು.ಕಾಡಾನೆ ಹಾವಳಿ ನಿಯಂತ್ರಣ ಆಗಬೇಕು ಎಂದು ಇದೇ ಸಂದರ್ಭದಲ್ಲಿ ಕೇಳಿ ಬಂದಿತು. ಈ ಬಗ್ಗೆ ಸಂಸದರು ವನ್ಯಜೀವಿ ಹಾಗೂ ಮಾನವ ಸಂಘರ್ಷ ತಪ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವರ ಜೊತೆ ಚರ್ಚಿಸಲಾಗಿದೆ. ಕಾಡಾನೆ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ಕಂದಕಗಳ ನಿರ್ಮಾಣ, ರೈಲ್ವೆ ಬ್ಯಾರಿಕೇಡ್‌ಗಳ ಅಳವಡಿಕೆ, ಮತ್ತಿತರ ಕಾರ್ಯ ಮಾಡಲಾಗಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಾಷಾ ಅವರು ವಿವರಿಸಿದರು.
ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಹಾಗೂ ಪಕ್ಷಾತೀತವಾಗಿ ಕೆಲಸ ಮಾಡಬೇಕು. ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುವಂತಾಗಬೇಕು ಎಂದು ಸೂಚಿಸಿದರು.ಸಭೆಯ ಆರಂಭದಲ್ಲಿ ‘ಆಪರೇಷನ್ ಸಿಂಧೂರ’ ಯಶಸ್ವಿ ಹಿನ್ನೆಲೆ ಭಾರತೀಯ ಸೇನೆಗೆ ಅಭಿನಂದನೆ ಸಲ್ಲಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.