
ಮಡಿಕೇರಿ : ಜನರ ಮನೆ ಬಾಗಿಲಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವುದರ ಜೊತೆಗೆ, ಸಾರ್ವಜನಿಕರ ಕುಂದುಕೊರತೆ ಆಲಿಸಿ ಇತ್ಯರ್ಥಪಡಿಸುವಲ್ಲಿ ಸರ್ಕಾರ ಪ್ರಜಾಸೇವಾ ಅಭಿಯಾನ/ಆಂದೋಲನ ಆರಂಭಿಸಿದ್ದು, ಈ ಅವಕಾಶವನ್ನು ಸಾರ್ವಜನಿಕರು ಬಳಸಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಜಾಸೇವಾ ಇಲಾಖೆಗೆ ಶನಿವಾರ ವಿಜಯನಗರದ ಕೂಡ್ಲಗಿಯಲ್ಲಿ ಚಾಲನೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ವಿವಿಧ ಜಿಲ್ಲೆಗಳಲ್ಲಿಯೂ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ ನೀಡಲಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು. ಮೊದಲ ಮತ್ತು ಮೂರನೇ ಶನಿವಾರದಂದು, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ, ಎರಡನೇ ಮತ್ತು ನಾಲ್ಕನೇ ಶನಿವಾರದಂದು ಶಾಸಕರ ನೇತೃತ್ವದಲ್ಲಿ ಆಯಾಯ ತಾಲೂಕು ಅಥವಾ ವಿಧಾನಸಭಾ ಕ್ಷೇತ್ರವಾರು ಪ್ರಜಾಸೇವಾ ಅಭಿಯಾನ ನಡೆಯಲಿದೆ. ಸಾರ್ವಜನಿಕರಿಗೆ ಸ್ಪಂದಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಬಳಿಗೆ ಸರ್ಕಾರದ ಯೋಜನೆ, ಕಾರ್ಯಕ್ರಮಗಳು ತಲುಪಬೇಕು ಎಂಬುದು ಆಶಯವಾಗಿದೆ. ಹಾಗೆಯೇ ಸಾರ್ವಜನಿಕರ ಕುಂದುಕೊರತೆ ಸಂಬಂಧಿಸಿದಂತೆ ಸ್ಥಳೀಯ ಮಟ್ಟದಲ್ಲಿಯೇ ಪರಿಹರಿಸಬೇಕು ಎಂಬುದು ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರದ ಉದ್ದೇಶವಾಗಿದೆ ಎಂದು ಸಚಿವರು ನುಡಿದರು.
ಸರ್ಕಾರದ ಬಳಿ ಜನರು ಬರುವುದಲ್ಲ. ಜನರ ಬಳಿಗೆ ಸರ್ಕಾರ ತೆರಳುವುದು ಅತೀ ಮುಖ್ಯವಾಗಿದೆ. ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಗೆ ಸ್ಪಂದಿಸುವುದು ಅತ್ಯಗತ್ಯವಾಗಿದೆ. ಜನರ ಬಳಿಗೆ ಆಡಳಿತ ಯಂತ್ರ ಕೊಂಡೊಯ್ಯುವಲ್ಲಿ ಸರ್ಕಾರ ಶ್ರಮಿಸಲಿದೆ ಎಂದರು. ಮಹಾತ್ಮ ಗಾಂಧೀಜಿಯವರ ಕನಸು ನನಸಾಗುವಲ್ಲಿ ಹಾಗೆಯೇ ಬಸವಣ್ಣ ಅವರ ಕಾಯಕವೇ ಕೈಲಾಸ ಎಂಬ ತತ್ವದಡಿ, ಅಂಬೇಡ್ಕರ್ ಅವರ ಸಮಾನತೆ ಅವಕಾಶಗಳು. ಹೀಗೆ ಎಲ್ಲಾವನ್ನು ಮನಗಂಡು ಸರ್ಕಾರ ಜನರ ಬಳಿಗೆ ಆಡಳಿತವನ್ನು ಕೊಂಡೊಯ್ಯುದು ಸಮಸ್ಯೆಗಳನ್ನು ಇತ್ಯರ್ಥಪಡಿಸುವುದು ಆಗಿದೆ ಎಂದರು.
ಜನರಪರ ಕೆಲಸ: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಸರ್ಕಾರ ಜನರ ಪರವಾಗಿ ಕೆಲಸ ಮಾಡುತ್ತದೆ. ಆದರೆ ಶಾಸಕಾಂಗ ಜೊತೆಗೆ ಕಾರ್ಯಾಂಗವು ಸಹ ಕೈಜೋಡಿಸಿದಾಗ ಮಾತ್ರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ, ಆ ನಿಟ್ಟಿನಲ್ಲಿ ಪ್ರಜಾಪ್ರಭುತ್ವದಲ್ಲಿ ಕಾರ್ಯಾಂಗದ ಪಾತ್ರ ಮಹತ್ವದ್ದಾಗಿದೆ ಎಂದು ಒತ್ತಿ ಹೇಳಿದರು.ಹಿಂದೆಯೂ ಸಹ ಜನಸಂಪರ್ಕ, ಜನಸ್ಪಂದನ ಹೆಸರಿನಲ್ಲಿ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಸಭೆಗಳು ನಡೆಯುತ್ತಿದ್ದವು. ಆದರೆ ಕಾರ್ಯಾಂಗ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು ಎಂದರು.
ಜಿಲ್ಲೆಯ ಕೆಲವು ಹಾಡಿಗಳಿಗೆ ಇನ್ನೂ ಸಹ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ವಿದ್ಯುತ್ ಕಲ್ಪಿಸುವಂತೆ ಸೂಚಿಸಿದರೂ ಸಹ ವಿದ್ಯುತ್ ಒದಗಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಬಿಡುತ್ತಿಲ್ಲ. ಈ ರೀತಿ ಆದರೆ ಹಲವು ದಶಕಗಳಿಂದ ಕೊಡಗು ಜಿಲ್ಲೆಯಲ್ಲಿ ಬದುಕುತ್ತಿರುವವರ ಪಾಡೇನು ಎಂದರು.
ಸರ್ಕಾರ ಜನಸೇವಾ ಅಭಿಯಾನವನ್ನು ಹಮ್ಮಿಕೊಂಡಿದ್ದು, ಜನರ ಕಣ್ಣೇರು ಒರೆಸುವ ಕೆಲಸ ಮಾಡುತ್ತಿದೆ. ಆ ನಿಟ್ಟಿನಲ್ಲಿ ಕಾರ್ಯಾಂಗ ಮತ್ತು ಶಾಸಕಾಂಗದ ಜೊತೆಯಾಗಿ ಕೆಲಸ ಮಾಡಬೇಕು. ಜನಪರ ಹಾಗೂ ಬಡವರ ಪರವಾಗಿ ಕೆಲಸ ಮಾಡಬೇಕು. ಸ್ವಲ್ಪವಾದರೂ ಸ್ವಾರ್ಥ ಬಿಟ್ಟು ಸಮಾಜಮುಖಿಯಾಗಿ ಯೋಚಿಸಬೇಕು ಎಂದರು. ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಜಿಲ್ಲೆಯಲ್ಲಿ ಹಲವು ದಶಕಗಳಿಂದ ಸಮಸ್ಯೆಗಳಿದ್ದು, ಅವುಗಳನ್ನು ಪರಿಹರಿಸುವಲ್ಲಿ ಮುಂದಾಗಬೇಕಿದೆ ಎಂದರು. ಕಂದಾಯ, ಅರಣ್ಯ ಮತ್ತಿತರ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ಸಮಸ್ಯೆಗಳಿವೆ. ಅದನ್ನು ಪರಿಹರಿಸುವಂತಾಗಬೇಕು ಎಂದರು. ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ರಸ್ತೆಗಳನ್ನು ಸರಿಪಡಿಸಬೇಕಿದೆ. ರಸ್ತೆ ಗುಂಡಿ ಮುಚ್ಚುವ ಕಾರ್ಯ ತುರ್ತಾಗಿ ಆಗಬೇಕಿದೆ ಎಂದರು.
ಜಿಲ್ಲೆಯಲ್ಲಿ ವಸತಿ ಹಾಗೂ ನಿವೇಶನ ರಹಿತರಿಗೆ ನಿವೇಶನ ಹಾಗೂ ವಸತಿ ಒದಗಿಸಲು ಉಪ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 20 ರಿಂದ 30 ಸಾವಿರ ನಿವೇಶನ ಹಾಗೂ ಮನೆ ನಿರ್ಮಾಣಕ್ಕೆ ಭರವಸೆ ನೀಡಿದ್ದಾರೆ. ಅದನ್ನು ಕಾರ್ಯಗತಗೊಳಿಸಬೇಕು ಎಂದು ಇದೇ ಸಂದರ್ಭದಲ್ಲಿ ಡಾ.ಮಂತರ್ ಗೌಡ ಅವರು ಹೇಳಿದರು.
ಮಾಹಿತಿ ಮಳಿಗೆ: ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಪ್ರಜಾಸೇವಾ ಆಂದೋಲನಕ್ಕೆ ಚಾಲನೆಗೂ ಮೊದಲು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ವಿವಿಧ ಇಲಾಖೆಗಳಿಂದ ಏರ್ಪಡಿಸಲಾಗಿದ್ದ ಮಾಹಿತಿ ಮಳಿಗೆಯನ್ನು ಉದ್ಘಾಟಿಸಿದರು. ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ಇತರರು ಇದ್ದರು.