ಆಲದಮರಕ್ಕೆ ಸರ್ಕಾರಿ ಬಸ್ ಡಿಕ್ಕಿ

KannadaprabhaNewsNetwork |  
Published : Nov 15, 2025, 01:15 AM IST
ಬಸ್‌ನ ಸ್ಥಿತಿ | Kannada Prabha

ಸಾರಾಂಶ

ಅರಸೀಕೆರೆ ಬಸ್ ನಿಲ್ದಾಣದಿಂದ ಹೊರಟ ಬಸ್ ಕೇವಲ ಹತ್ತು ನಿಮಿಷಗಳ ನಂತರ ಬೋರನಕೊಪ್ಪಲು ಹತ್ತಿರ ನಿಯಂತ್ರಣ ತಪ್ಪಿ ಆಲದಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಪರಿಣಾಮ ಬಸ್‌ನ ಮುಂದಿನಭಾಗ ಸಂಪೂರ್ಣ ಜಖಂಗೊಂಡಿದ್ದು, ಪ್ರಯಾಣಿಕರಲ್ಲಿ ಕೆಲವರು ಬಸ್ ಒಳಗೇ ಸಿಲುಕಿಕೊಂಡಿದ್ದರು. ಸ್ಥಳೀಯರು ತಕ್ಷಣವೇ ರಕ್ಷಣಾಕಾರ್ಯಕ್ಕೆ ಧಾವಿಸಿ ಗಾಯಾಳುಗಳನ್ನು ಸುರಕ್ಷಿತವಾಗಿ ಹೊರತೆಗೆದರು. ಘಟನೆಯಲ್ಲಿ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಎರಡು ಕಾಲುಗಳು ಮುರಿದಿರುವ ಮಾಹಿತಿ ಲಭ್ಯವಾಗಿದೆ. ಮತ್ತೊಬ್ಬ ಪ್ರಯಾಣಿಕನಿಗೂ ತೀವ್ರ ಗಾಯವಾಗಿದ್ದು, ಅವರನ್ನು ತಕ್ಷಣವೇ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಉಳಿದ ಪ್ರಯಾಣಿಕರನ್ನು ನಗರದ ಜೆ.ಸಿ. ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ನಂತರ ಗಂಭೀರ ಸ್ಥಿತಿಯಲ್ಲಿರುವ ಕೆಲವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಕನ್ನಡಪ್ರಭ ವಾರ್ತೆ ಅರಸೀಕೆರೆ

ದಾವಣಗೆರೆಯಿಂದ ಮಡಿಕೇರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಅರಸೀಕೆರೆಯ ಹೊರವಲಯದಲ್ಲಿ ಸಂಭವಿಸಿದ ಅಪಘಾತದಲ್ಲಿ 35ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಶುಕ್ರವಾರ ಬೆಳಿಗ್ಗೆ 11:40ಕ್ಕೆ ಅರಸೀಕೆರೆ ಬಸ್ ನಿಲ್ದಾಣದಿಂದ ಹೊರಟ ಬಸ್ ಕೇವಲ ಹತ್ತು ನಿಮಿಷಗಳ ನಂತರ ಬೋರನಕೊಪ್ಪಲು ಹತ್ತಿರ ನಿಯಂತ್ರಣ ತಪ್ಪಿ ಆಲದಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಪರಿಣಾಮ ಬಸ್‌ನ ಮುಂದಿನಭಾಗ ಸಂಪೂರ್ಣ ಜಖಂಗೊಂಡಿದ್ದು, ಪ್ರಯಾಣಿಕರಲ್ಲಿ ಕೆಲವರು ಬಸ್ ಒಳಗೇ ಸಿಲುಕಿಕೊಂಡಿದ್ದರು. ಸ್ಥಳೀಯರು ತಕ್ಷಣವೇ ರಕ್ಷಣಾಕಾರ್ಯಕ್ಕೆ ಧಾವಿಸಿ ಗಾಯಾಳುಗಳನ್ನು ಸುರಕ್ಷಿತವಾಗಿ ಹೊರತೆಗೆದರು. ಘಟನೆಯಲ್ಲಿ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಎರಡು ಕಾಲುಗಳು ಮುರಿದಿರುವ ಮಾಹಿತಿ ಲಭ್ಯವಾಗಿದೆ. ಮತ್ತೊಬ್ಬ ಪ್ರಯಾಣಿಕನಿಗೂ ತೀವ್ರ ಗಾಯವಾಗಿದ್ದು, ಅವರನ್ನು ತಕ್ಷಣವೇ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಉಳಿದ ಪ್ರಯಾಣಿಕರನ್ನು ನಗರದ ಜೆ.ಸಿ. ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ನಂತರ ಗಂಭೀರ ಸ್ಥಿತಿಯಲ್ಲಿರುವ ಕೆಲವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೆ ರಸ್ತೆ ಮಧ್ಯೆ ಇದ್ದ ದೊಡ್ಡ ಗುಂಡಿಯೇ ಪ್ರಮುಖ ಕಾರಣ ಎಂದು ಪ್ರಾಥಮಿಕ ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ. ಗುಂಡಿಯನ್ನು ತಪ್ಪಿಸಲು ಚಾಲಕ ತಕ್ಷಣವೇ ಬಸ್‌ನ್ನು ಬದಿಗೆ ತಿರುಗಿಸಿದಾಗ ವಾಹನದ ಮೇಲಿನ ನಿಯಂತ್ರಣ ತಪ್ಪಿ ಬಸ್ ನೇರವಾಗಿ ಆಲದಮರಕ್ಕೆ ಡಿಕ್ಕಿ ಹೊಡೆದಿರುವ ಸಾಧ್ಯತೆ ಹೆಚ್ಚು ಎಂದು ತನಿಖಾ ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ನಂತರ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಬಸ್‌ನ ಸ್ಥಿತಿ, ಬ್ರೇಕ್‌ಗಳ ಗುರುತು, ರಸ್ತೆಯ ಪರಿಸ್ಥಿತಿ ಹಾಗೂ ಸಾಕ್ಷಿಗಳ ಹೇಳಿಕೆಗಳ ಆಧಾರದ ಮೇಲೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಮುಂದುವರಿಸಿದ್ದಾರೆ. ಸುದ್ದಿ ತಿಳಿದ ಕೂಡಲೇ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ ಸ್ಥಳಕ್ಕೇ ಧಾವಿಸಿ ರಕ್ಷಣಾ ಕಾರ್ಯಾಚರಣೆ ಮೇಲ್ವಿಚಾರಣೆ ಮಾಡಿದರು. ಗಾಯಾಳುಗಳನ್ನು ತಕ್ಷಣವೇ ಸರ್ಕಾರಿ ಜೆ.ಸಿ. ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿ, ಗಂಭೀರ ಸ್ಥಿತಿಯಲ್ಲಿದ್ದವರನ್ನು ಹಾಸನ ಹಾಗೂ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರ ಮಾಡುವ ಕಾರ್ಯವನ್ನು ಸ್ವತಃ ಹೊಂದಿಕೊಂಡರು. ಗಾಯಾಳುಗಳ ಚಿಕಿತ್ಸೆ ಕುರಿತು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.ಈ ಅಪಘಾತದ ಹಿನ್ನೆಲೆಯಲ್ಲಿ ಸ್ಥಳೀಯರು ರಸ್ತೆ ಗುಂಡಿಗಳು ಮತ್ತು ಅನುಕೂಲಕರ ನಿರ್ವಹಣೆಯ ಕೊರತೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ಬಾರಿ ದೂರು ನೀಡಿದ್ದರೂ ಸಮಸ್ಯೆ ಬಗೆಹರಿಯಲಿಲ್ಲವೆಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.

PREV

Recommended Stories

ಬಿಹಾರ ಫಲಿತಾಂಶ ಕರ್ನಾಟಕದ ಮುಂದಿನ ಚುನಾವಣೆಗೆ ದಿಕ್ಸೂಚಿ
ಮಕ್ಕಳ ಸ್ವಾವಲಂಬನೆ ಬದುಕಿಗೆ ನೆಹರು ಆದರ್ಶ