ವಿದ್ಯಾರ್ಥಿ ನಿಲಯ ಸ್ಥಿತಿಗತಿ ಸುಧಾರಣೆಗೆ ಸರ್ಕಾರ ಬದ್ಧ: ಸಚಿವ ಜಾರಕಿಹೊಳಿ

KannadaprabhaNewsNetwork |  
Published : Nov 14, 2026, 02:15 AM IST
ಕೊಪ್ಪಳ ನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ವಾಲ್ಮೀಕಿ ಸಮುದಾಯ ಭವನ ಉದ್ಘಾಟನಾ ಸಮಾರಂಭದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದರು. | Kannada Prabha

ಸಾರಾಂಶ

ಕೊಪ್ಪಳ ನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ವಾಲ್ಮೀಕಿ ಸಮುದಾಯ ಭವನ ಉದ್ಘಾಟನಾ ಸಮಾರಂಭದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭಾಗವಹಿಸಿ ಮಾತನಾಡಿದರು.

ಕೊಪ್ಪಳ: ರಾಜ್ಯದ ಎಸ್‌ಸಿ-ಎಸ್‌ಟಿ ಸೇರಿದಂತೆ ಎಲ್ಲ ವಿದ್ಯಾರ್ಥಿ ನಿಲಯಗಳ ಸ್ಥಿತಿಗತಿ ಸುಧಾರಿಸಲು ಸರ್ಕಾರ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ವಾಲ್ಮೀಕಿ ಸಮುದಾಯ ಭವನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, 100 ವಿದ್ಯಾರ್ಥಿಗಳ ಸಾಮರ್ಥ್ಯದ ಹಾಸ್ಟೆಲ್‌ಗಳಲ್ಲಿ 200ರಿಂದ 250 ವಿದ್ಯಾರ್ಥಿಗಳು ವಾಸಿಸುತ್ತಿರುವುದರಿಂದ ಮೂಲಸೌಕರ್ಯಗಳ ಕೊರತೆ ಎದುರಾಗಿದೆ. ಈ ಸಮಸ್ಯೆ ಪರಿಹಾರಕ್ಕೆ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಎಸ್‌ಸಿಪಿ-ಎಸ್‌ಟಿಪಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದರು.

ಅನುದಾನ ಉಳಿತಾಯದ ಮೂಲಕ ಹೆಚ್ಚುವರಿ ಹಾಸ್ಟೆಲ್‌ಗಳ ನಿರ್ಮಾಣ, ಪಿಯುಸಿ ಕಾಲೇಜುಗಳ ಸ್ಥಾಪನೆ, ರೈತರಿಗೆ ಬೋರ್‌ವೆಲ್ ಸೌಲಭ್ಯ ಕಲ್ಪಿಸುವ ಜತೆಗೆ ಎಸ್‌ಸಿ-ಎಸ್‌ಟಿ ಕಾಲನಿಗಳಿಗೆ ಖಾಸಗಿ ಲೇಔಟ್ ಮಾದರಿಯಲ್ಲಿ ರಸ್ತೆ, ಕುಡಿಯುವ ನೀರು ಹಾಗೂ ಬೀದಿದೀಪ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ಎಸ್‌ಸಿ-ಎಸ್‌ಟಿ ಸಮುದಾಯಗಳ ಮೀಸಲಾತಿ ಪ್ರಮಾಣ ಹೆಚ್ಚಳದ ವಿಚಾರದಲ್ಲಿ ವಕೀಲರನ್ನು ನೇಮಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ತಮಿಳುನಾಡು ಮಾದರಿಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಂವಿಧಾನದ 9ನೇ ಅನುಸೂಚಿಗೆ ಸೇರಿಸುವ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರ ಹಾಗೂ ಸಂಸತ್ತಿನ ಮಟ್ಟದಲ್ಲಿಯೂ ಪ್ರಯತ್ನ ನಡೆಯಬೇಕಿದೆ ಎಂದು ಹೇಳಿದರು.

ಸಮುದಾಯ ಭವನ ನಿರ್ಮಾಣವಾದ ಮಾತ್ರಕ್ಕೆ ಅಭಿವೃದ್ಧಿ ಸಾಧ್ಯವಿಲ್ಲ. ಭವನಕ್ಕೆ ಬೀಗ ಹಾಕಿ, ಗಣ್ಯರು ಬಂದಾಗ ಮಾತ್ರ ತೆರೆದು ತೋರಿಸುವ ಸಂಸ್ಕೃತಿ ನಿಲ್ಲಬೇಕು. ಭವನವು ನಿರಂತರ ಶೈಕ್ಷಣಿಕ, ಸಾಮಾಜಿಕ ಚಟುವಟಿಕೆ ಕೇಂದ್ರವಾಗಬೇಕು ಎಂದು ಜಾರಕಿಹೊಳಿ ಹೇಳಿದರು.

ಕೊಪ್ಪಳದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಭವನವು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರ ಪ್ರಯತ್ನದಿಂದ ಲೋಕಾರ್ಪಣೆಗೊಂಡಿರುವುದು ಸಂತಸದ ಸಂಗತಿ. ಆದರೆ, ಭವನ ನಿರ್ಮಾಣವೇ ಅಂತಿಮ ಗುರಿಯಾಗಬಾರದು. ಇಲ್ಲಿ ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ಯುವಜನರಿಗೆ ನಿರಂತರ ತರಬೇತಿ ನೀಡಬೇಕು. ಶೈಕ್ಷಣಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸಲಹೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಸರ್ವತೋಮುಖ ಪ್ರಗತಿಗೆ ಶ್ರಮಿಸಿ
ಎಸಿಯಾಗಿ ಪದೋನ್ನತಿ ಹೊಂದಿದ ತಹಸೀಲ್ದಾರ್‌ ಬೋಸಗಿ