ಕೊಪ್ಪಳ: ಕನ್ನಡ ಭಾಷೆ, ನೆಲ, ಜಲ ಹಾಗೂ ಸಂಸ್ಕೃತಿಯ ಸಂರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಆಡಳಿತದ ಎಲ್ಲ ಹಂತಗಳಲ್ಲೂ ಕನ್ನಡಕ್ಕೆ ಆದ್ಯತೆ ನೀಡುವ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ. ಕನ್ನಡಿಗರು ಮಾತೃಭಾಷೆಯನ್ನು ದೈನಂದಿನ ಬದುಕಿನಲ್ಲಿ ಹೆಚ್ಚು ಹೆಚ್ಚು ಬಳಸುವ ಮೂಲಕ ಭಾಷೆಯ ಬೆಳವಣಿಗೆಗೆ ಕೈಜೋಡಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಹೇಳಿದರು.
ಕರ್ನಾಟಕಕ್ಕೆ ಭವ್ಯ ಇತಿಹಾಸವಿದ್ದು, ಮೌರ್ಯರು, ಕದಂಬರು, ಚಾಲುಕ್ಯರು, ರಾಷ್ಟ್ರಕೂಟರು, ಹೊಯ್ಸಳರು, ವಿಜಯನಗರದ ಅರಸರು ಹಾಗೂ ಮೈಸೂರಿನ ಒಡೆಯರು ನಾಡಿನ ಸಂಸ್ಕೃತಿ, ಸಾಹಿತ್ಯ ಮತ್ತು ಪರಂಪರೆಗೆ ಅಪಾರ ಕೊಡುಗೆ ನೀಡಿದ್ದಾರೆ. ಕನಕದಾಸರು, ಪುರಂದರದಾಸರು, ಸರ್ವಜ್ಞ, ಶಿಶುನಾಳ ಷರೀಫರು ಹಾಗೂ ಬಸವಣ್ಣನವರಂತಹ ಮಹನೀಯರು ಬಾಳಿ ಬದುಕಿದ ಪುಣ್ಯಭೂಮಿ ನಮ್ಮದು. 1956ರಲ್ಲಿ ಭಾಷಾವಾರು ಪ್ರಾಂತ್ಯಗಳ ರಚನೆಯಾಗಿ ಮೈಸೂರು ರಾಜ್ಯ ಉದಯಿಸಿತು. 1973ರ ನವೆಂಬರ್ 1ರಂದು ಕರ್ನಾಟಕ ಎಂದು ಮರುನಾಮಕರಣಗೊಂಡಿತು. ಈ ಏಕೀಕರಣ ಚಳವಳಿಯಲ್ಲಿ ಕೊಪ್ಪಳ ಜಿಲ್ಲೆಯ ಅಳವಂಡಿ ಶಿವಮೂರ್ತಿಸ್ವಾಮಿ ಸೇರಿದಂತೆ ಅನೇಕ ಹೋರಾಟಗಾರರ ಕೊಡುಗೆ ಸ್ಮರಣೀಯವಾಗಿದೆ ಎಂದರು.
ಕನ್ನಡ ಭಾಷೆಯ ತಂತ್ರಜ್ಞಾನ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಕನ್ನಡ ಮಾತನಾಡುವ ಜತೆಗೆ ಕನ್ನಡ ಲಿಪಿಯನ್ನು ಮುಂದಿನ ಪೀಳಿಗೆಗೆ ಕಲಿಸುವ ಮೂಲಕ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಹೇಳಿದರು. 2026ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕೊಪ್ಪಳದ ದಾವಲಸಾಬ ಅತ್ತಾರ ಹಾಗೂ ಶಿವಲಿಂಗಪ್ಪ ರಾಮಣ್ಣ ಅವರಿಗೆ ಅಭಿನಂದನೆ ಸಲ್ಲಿಸಿದರು.ಗ್ಯಾರಂಟಿ ಯೋಜನೆಗಳಿಂದ ಜನರಿಗೆ ನೆರವು: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನರ ಬದುಕಿಗೆ ಆಸರೆಯಾಗಿವೆ. ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 3.12 ಲಕ್ಷಕ್ಕೂ ಅಧಿಕ ಮಹಿಳೆಯರು, ಯುವನಿಧಿ ಯೋಜನೆಯಡಿ 16,856 ಯುವಕರು ಸೌಲಭ್ಯ ಪಡೆದಿದ್ದಾರೆ. ಅನ್ನಭಾಗ್ಯ ಯೋಜನೆಯಡಿ 10.83 ಲಕ್ಷ ಫಲಾನುಭವಿಗಳಿಗೆ ಪ್ರತಿ ತಿಂಗಳು ಪಡಿತರ ವಿತರಿಸಲಾಗುತ್ತಿದೆ. ಗೃಹಜ್ಯೋತಿ ಯೋಜನೆಯಡಿ 2.83 ಲಕ್ಷಕ್ಕೂ ಅಧಿಕ ಗ್ರಾಹಕರು ಪ್ರಯೋಜನ ಪಡೆಯುತ್ತಿದ್ದಾರೆ ಎಂದು ವಿವರಿಸಿದರು.
ಮಳೆ ಕೊರತೆ-ರೈತರಿಗೆ ವಿಮೆ ನಿರೀಕ್ಷೆ: ಜಿಲ್ಲೆಯಲ್ಲಿ ವಾಡಿಕೆ 570 ಮಿಮೀ ಮಳೆಯ ಬದಲಾಗಿ 331 ಮಿಮೀ ಮಳೆಯಾಗಿದ್ದು, ಶೇ. 42ರಷ್ಟು ಕೊರತೆಯಾಗಿದೆ. 1.70 ಲಕ್ಷ ಹೆಕ್ಟೇರ್ ಬಿತ್ತನೆ ಗುರಿಯ ಎದುರು 45,635 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಬೆಳೆ ವಿಮೆ ಯೋಜನೆಯಡಿ ಸುಮಾರು 1.53 ಲಕ್ಷ ರೈತರಿಗೆ ₹160 ಕೋಟಿ ಮಧ್ಯಂತರ ಪರಿಹಾರ ದೊರೆಯುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಪಥಸಂಚಲನ, ಸಾಂಸ್ಕೃತಿಕ ವೈಭವ: ರಾಜ್ಯೋತ್ಸವದ ಅಂಗವಾಗಿ ಪೊಲೀಸ್ ಇಲಾಖೆ, ಗೃಹರಕ್ಷಕದಳ, ಎನ್‌ಸಿಸಿ, ಭಾರತ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ 16 ತಂಡಗಳು ಆಕರ್ಷಕ ಪಥಸಂಚಲನ ನಡೆಸಿ ಗೌರವ ವಂದನೆ ಸಲ್ಲಿಸಿದವು. ಎಸ್‌ಎಫ್‌ಎಸ್ ಹಾಗೂ ಕಾಳಿದಾಸ ಪ್ರೌಢಶಾಲೆಯ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು. ವಿಜೇತ ತಂಡಗಳು ಮತ್ತು ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ವಿತರಿಸಲಾಯಿತು. ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಗ್ರಾಮೀಣ ಬದುಕಿನ ಪರಿಚಯ ಮಾಡಿಕೊಡುವ ಗ್ರಾಮಾನುಭವ ಕಾರ್ಯಕ್ರಮಕ್ಕೂ ಸಚಿವರು ಚಾಲನೆ ನೀಡಿದರು.
ಇದಕ್ಕೂ ಮುನ್ನ ತಹಸೀಲ್ದಾರ್ ಕಚೇರಿಯಿಂದ ಜಿಲ್ಲಾ ಕ್ರೀಡಾಂಗಣದ ವರೆಗೆ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಿತು. ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.