ಯಾದಗಿರಿ: ಸರ್ಕಾರಿ ಪದವಿ ಮಹಾವಿದ್ಯಾಲಯದ 2024-25ನೇ ಸಾಲಿನ ಪ್ರಥಮ ಸೆಮಿಸ್ಟರ್‌ನ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ವಿವಿಧ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಶನಿವಾರ ಬೆಳಿಗ್ಗೆ 10:30ಕ್ಕೆ ನಡೆಯಲಿದೆ ಎಂದು ಸಾಂಸ್ಕ್ರತಿಕ ಸಂಚಾಲಕ ಡಾ. ಮೋನಯ್ಯ ಕಲಾಲ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂದು ಬೆಳಿಗ್ಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭವನ್ನು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಶಹಾಪುರ ಕಾಲೇಜಿನ ಪ್ರಾಧ್ಯಾಪಕ ಸಿದ್ದಣ್ಣ ಬಿ. ದಿಗ್ಗಿ ಮತ್ತು ಯಾದಗಿರಿ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಿರ್ಮಲಾ ಶಿಣ್ಣೂರ ಹಾಗೂ ಕಾಲೇಜಿನ ಹಿರಿಯ ಪ್ರಾಧ್ಯಾಪಕ ಡಾ. ಬಿ.ಆರ್. ಕೇತನಕರ್ ಮತ್ತು ಅತಿಥಿ ಉಪನ್ಯಾಸಕರ ಪ್ರತಿನಿಧಿ ಡಾ. ರೇವ್ಯಾ ನಾಯಕ ಗೌರವ ಉಪಸ್ಥಿತರಿರಲಿದ್ದು, ಕಾಲೇಜಿನ ಪ್ರಾಂಶುಪಾಲ ಡಾ. ಸುಭಾಶ್ಚಂದ್ರ ಕೌಲಗಿ ಅಧ್ಯಕ್ಷತೆ ವಹಿಸಲಿದ್ದಾರೆಂದು ಅವರು ತಿಳಿಸಿದ್ದಾರೆ.