ಕನ್ನಡಪ್ರಭ ವಾರ್ತೆ ಮಡಿಕೇರಿ
ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ನಡುವೆಯೂ ಪರಿಸರ ಶುಚಿತ್ವಕ್ಕೆ ಒತ್ತು ನೀಡಿರುವುದು ಮೆಚ್ಚುವಂತದ್ದು, ಪೌರಕಾರ್ಮಿಕರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷ ವೆಂಕಟ್ ರಾಜಾ ಭರವಸೆ ನೀಡಿದ್ದಾರೆ.ಮಡಿಕೇರಿ ದಸರಾ ಯಶಸ್ಸಿಗೆ ಸಹಕರಿಸಿದ ಹಾಗೂ ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಿದ ಪೌರ ಕಾರ್ಮಿಕರನ್ನು ಆತ್ಮೀಯವಾಗಿ ಶುಕ್ರವಾರ ಕೃತಜ್ಞತೆ ಸಲ್ಲಿಸಲಾಯಿತು.
ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಪೌರಕಾರ್ಮಿಕರನ್ನು ಆತ್ಮೀಯವಾಗಿ ಅಭಿನಂದಿಸಿ ಜಿಲ್ಲಾಧಿಕಾರಿ ಮಾತನಾಡಿದರು.ಮಡಿಕೇರಿ ನಗರಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಈ ಹಿನ್ನೆಲೆ ಸ್ವಚ್ಚತೆಗೆ ಹೆಚ್ಚು ಒತ್ತು ನೀಡುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ಪೌರಕಾರ್ಮಿಕರು ಪರಿಸರ ಶುಚಿತ್ವಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು.
ಕೊಡಗು ಜಿಲ್ಲೆ ಸ್ವಚ್ಛತೆಯಲ್ಲಿ ಇಡೀ ವಿಶ್ವದಲ್ಲಿಯೇ ಮಾದರಿಯಾಗಬೇಕು ಎಂಬುದು ಪ್ರತಿಯೊಬ್ಬರ ಆಶಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.ಮಡಿಕೇರಿ ನಗರ ಸ್ವಚ್ಚತೆಯಲ್ಲಿ ಈಗಾಗಲೇ 10 ನೇ ಸ್ಥಾನದಲ್ಲಿದ್ದು, ಮತ್ತಷ್ಟು ಶುಚಿತ್ವಕ್ಕೆ ಒತ್ತು ನೀಡುವಂತಾಗಬೇಕು ಎಂದು ಸಲಹೆ ಮಾಡಿದರು.
ಮಡಿಕೇರಿ ನಗರ ದಸರಾ ಸಮಿತಿ ಗೌರವ ಅಧ್ಯಕ್ಷ ಜಿ.ಚಿದ್ವಿಲಾಸ್ ಮಾತನಾಡಿ, ಪೌರಕಾರ್ಮಿಕರು ಸ್ವಚ್ಛತೆ ಜೊತೆಗೆ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ಮಾಡಿದರು.ಪೌರಾಯುಕ್ತ ಎಚ್.ಆರ್.ರಮೇಶ್ ಮಾತನಾಡಿ, ಇದೇ ಮೊದಲ ಬಾರಿಗೆ ದಸರಾ ಸಮಿತಿ ವತಿಯಿಂದ ಪೌರಕಾರ್ಮಿಕರಿಗೆ ಕೃತಜ್ಞತೆ ಸಲ್ಲಿಸಿರುವುದು ವಿಶೇಷವಾಗಿದೆ ಎಂದರು.
ಮಡಿಕೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ಖಜಾಂಚಿ ಅರುಣ್ ಶೆಟ್ಟಿ, ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ., ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ್ ಕರ್ಕೆರ, ಸ್ವಾಗತ ಸಮಿತಿ ಅಧ್ಯಕ್ಷ ಕಾನೆಹಿತ್ಲು ಮೊನ್ನಪ್ಪ, ಸಾಂಸ್ಕೃತಿಕ ಸಮಿತಿ ಸದಸ್ಯರಾದ ವೀಣಾಕ್ಷಿ, ಮಿನಾಜ್ ಪ್ರವೀಣ್, ಕವನ್, ಅಭಿಯಂತರರಾದ ಸತೀಶ್, ಹೇಮಂತ್ ಕುಮಾರ್, ಸೌಮ್ಯ, ತಾಹಿರ್, ಇತರರು ಇದ್ದರು.