ಬರ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ

KannadaprabhaNewsNetwork | Published : Mar 13, 2024 2:00 AM

ಸಾರಾಂಶ

ಚಿಕ್ಕೋಡಿ: ಕಾಂಗ್ರೆಸ್ ಸರ್ಕಾರ ಭೀಕರ ಬರಗಾಲ ನಿಯಂತ್ರಣ ಮಾಡಲು ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ. ಸಂಕನೂರ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಚಿಕ್ಕೋಡಿ

ಕಾಂಗ್ರೆಸ್ ಸರ್ಕಾರ ಭೀಕರ ಬರಗಾಲ ನಿಯಂತ್ರಣ ಮಾಡಲು ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ. ಸಂಕನೂರ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದ್ದು, 8 ತಿಂಗಳಿನಿಂದ ದೇಶದ್ರೋಹಿ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದೆ. ರಾಜ್ಯದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಆಯ್ಕೆಯಾಗಿರುವ ಕಾಂಗ್ರೆಸ್ ಜನರ ಅಶೋತ್ತರಗಳಿಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ. ಇದೀಗ ಜನರೇ ನಾವು ಯಾಕಾದರೂ ಈ ಸರ್ಕಾರ ಆಯ್ಕೆ ಮಾಡಿದೆವು ಎಂದು ಪರಿತಪಿಸುತ್ತಿದ್ದಾರೆ. ರೈತರು, ಯುವಕರು ಹಾಗೂ ಮಹಿಳೆಯರಿಗಾಗಿ ಯಾವುದೇ ರೀತಿಯ ಕೆಲಸ ಮಾಡುತ್ತಿಲ್ಲ. ಹೀಗಾಗಿ ಜನ ಪಶ್ಚಾತಾಪ ಪಡುತ್ತಿದ್ದಾರೆ ಎಂದು ಟೀಕಿಸಿದರು.

ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಆಧಾರರಹಿತವಾಗಿ ಕೇಂದ್ರದ ಮೇಲೆ ಅಪಾದನೆ ಮಾಡುತ್ತಿರುವುದು ಹಾಸ್ಯಸ್ಪದ. ಕೇಂದ್ರದಿಂದ ರಾಜ್ಯಕ್ಕೆ ಬರುವ ತೆರಿಗೆ ಸಂಗ್ರಹ ರಾಜ್ಯಕ್ಕೆ ನೀಡುತ್ತಿಲ್ಲ ಎಂದು ವಿನಾಕಾರಣ ಟೀಕೆ ಮಾಡುತ್ತಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರ 13 ಕೋಟಿ ಕುಟುಂಬಗಳಿಗೆ ಪ್ರಧಾನಮಂತ್ರಿ ಆವಾಸ ಯೋಜನೆಯಡಿ ಮನೆಗಳ ಮಂಜೂರಾತಿ, ಕುಡಿಯುವ ನೀರಿನ ಯೋಜನೆಯಡಿ ಪ್ರತಿ ಮನೆಗೆ ಶುದ್ಧ ಕುಡಿವ ನೀರು ಒದಗಿಸುವ ಜಲಜೀವನ್‌ ಯೋಜನೆ, ಪ್ರತಿ ಮನೆಗೆ ಶೌಚಾಲಯ, ಮಹಿಳೆಯರಿಗೆ ಉಚಿತ ಅಡುಗೆ ಅನಿಲ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಸಮರ್ಥಿಸಿಕೊಂಡರು.

ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಮಾತನಾಡಿ, ರಾಜ್ಯದಲ್ಲಿ ವಿಧಾನ ಪರಿಷತ್ ಸದಸ್ಯರನ್ನೊಳಗೊಂಡ 10 ತಂಡಗಳಲ್ಲಿ ಪ್ರವಾಸ ಕೈಗೊಂಡು ಕೇಂದ್ರ ಸರ್ಕಾರದ ಸಾಧನೆ ಮತ್ತು ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಶಾಸಕ ಡಿ.ಎಂ.ಐಹೊಳೆ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಅಪ್ಪಾಜಿಗೋಳ, ಮಹಿಳಾ ಮೋರ್ಚಾ ಅಧ್ಯಕ್ಷ ಶಾಂಭವಿ ಅಶ್ವತ್ಥಪೂರ, ದುಂಡಪ್ಪ ಬೆಂಡವಾಡೆ, ಅಪ್ಪಾಸಾಹೇಬ ಚೌಗಲಾ, ಸಂಜಯ ಪಾಟೀಲ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ರಮೇಶ ಕಾಳನ್ನವರ ಸೇರಿದಂತೆ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Share this article