- ಸಚಿವ ಬಸವಂತಪ್ಪ ಭರವಸೆ । ನಾಣಿಕೇರಿ ವಸಂತ ವೈಭವ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ದಾವಣಗೆರೆ
ಸ್ಥಳೀಯ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ, ಬೆಳೆಸುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ನಾಣಿಕೇರಿ ಕಲೋತ್ಸವವು ಮಿನಿ ಹಂಪಿ ಉತ್ಸವದಂತೆ ವೈಭವದಿಂದ ಮೂಡಿಬಂದಿದೆ. ಮುಂದಿನ ವರ್ಷದಿಂದ ಈ ಉತ್ಸವಕ್ಕೆ ಸರ್ಕಾರದ ವತಿಯಿಂದ ಅನುದಾನ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಭರವಸೆ ನೀಡಿದರು.ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ನಾಣಿಕೇರಿ ಯುವ ಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಮೂರನೇ ವರ್ಷದ ನಾಣಿಕೇರಿ ಉತ್ಸವ ಅಂಗವಾಗಿ ನಡೆದ ನಾಣಿಕೇರಿ ವಸಂತ ವೈಭವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಲಾಶಯದಲ್ಲಿ ನೀರಿದ್ದರೂ ಈ ಭಾಗದ ಹಲವು ತಾಲೂಕುಗಳು ಬರಗಾಲ ಎದುರಿಸುತ್ತಿವೆ. ತುಂಗಭದ್ರಾ ನೀರು ತಲುಪದ ಪ್ರದೇಶಗಳಿಗೆ ಏತ ನೀರಾವರಿ ಯೋಜನೆ ಮೂಲಕ ಕೆರೆಗಳನ್ನು ತುಂಬಿಸಿ ಅಂತರ್ಜಲ ಮಟ್ಟ ಹೆಚ್ಚಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಶಾಸಕರು ಹಾಗೂ ಸಂಸದರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ನಿಯೋಗದ ಮೂಲಕ ಮನವಿ ಸಲ್ಲಿಸಿ ಯೋಜನೆ ಜಾರಿಗೆ ಪ್ರಯತ್ನಿಸಲಾಗುವುದು ಎಂದರು.
ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್, ಬಳ್ಳಾರಿ ಮತ್ತು ವಿಜಯನಗರ ಲೋಕಸಭಾ ಕ್ಷೇತ್ರದ ಸಂಸದ ಕೆ. ತುಕಾರಾಂ ಸೇರಿದಂತೆ ಹಲವು ಗಣ್ಯರು, ಸ್ಥಳೀಯ ಮುಖಂಡರು, ಉತ್ಸವ ಸಮಿತಿಯ ಪದಾಧಿಕಾರಿಗಳು, ವಿವಿಧ ಸಮುದಾಯಗಳ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
-22ಕೆಡಿವಿಜಿ31: