ಅಂಬೇಡ್ಕರ್ ಭವನದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ
ಕನ್ನಡಪ್ರಭ ವಾರ್ತೆ ಶಿರಸಿಗರ್ಭಿಣಿಯರಿಗೆ ಅಗತ್ಯವಾಗಿ ಬೇಕಾಗುವ ಪೌಷ್ಟಿಕ ಆಹಾರ, ಆರೋಗ್ಯ ತಪಾಸಣೆ ಸೇರಿದಂತೆ ಹಲವು ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದೆ. ತಾಯಿ ಆರೋಗ್ಯವಾಗಿದ್ದರೆ ಮಗುವೂ ಆರೋಗ್ಯವಾಗಿರುತ್ತದೆ. ಇದರಿಂದ ಆರೋಗ್ಯ ಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು
ಸೋಮವಾರ ನಗರದ ಅಂಬೇಡ್ಕರ್ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದಿವೆ. ಗರ್ಭಿಣಿಯರಿಗೆ ಸೀಮಂತ ಮಾಡುವ ಮೂಲಕ ಅರ್ಥಪೂರ್ಣವಾಗಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದು ಸಂತಸದ ಸಂಗತಿಯಾಗಿದೆ. ಸರ್ಕಾರ ನೀಡಿರುವ ಕಾರ್ಯಕ್ರಮಗಳನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ಇಲಾಖೆ ಮೇಲಿರುತ್ತದೆ. ತಾಯಿಯ ಮಹತ್ವ ತಿಳಿದವರಿಗೆ ಗೊತ್ತು. ತಾಯಂದಿರನ್ನು ಗೌರವಿಸುವ ಕೆಲಸ ಎಲ್ಲರಿಂದಲೂ ಆಗಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಸಂಸ್ಕಾರಗಳನ್ನು ಕೊಡುವ ಮೂಲಕ ಉತ್ತಮ ಪ್ರಜೆಯನ್ನಾಗಿ ಮಾಡುವ ಜವಾಬ್ದಾರಿ ತಾಯಂದಿರ ಮೇಲಿದೆ ಎಂದರು.
ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ ಮಾತನಾಡಿದರು.ಇದೇ ವೇಳೆ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ಸತೀಶ ನಾಯ್ಕ, ವಿರೂಪಾಕ್ಷ ಗೌಡ ಪಾಟೀಲ್, ನಗರಸಭೆ ಸದಸ್ಯರಾದ ಶಮೀಭಾನು, ರುಬೇಕಾ, ನಾಗರತ್ನ ಜೋಗಳೇಕರ್, ವನೀತಾ ಶೆಟ್ಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೇರಿದಂತೆ ಹಲವರು ಇದ್ದರು. ಉಮಾಬಾಯಿ ಹೆಗಡೆ ಸಂಗಡಿಗರು ಪ್ರಾರ್ಥಿಸಿದರು. ಸುಶೀಲಾ ಮೊಗೇರ ಸ್ವಾಗತಿಸಿದರು. ಮೇಲ್ವಿಚಾರಕಿ ವೀಣಾ ಶಿರ್ಸಿಕರ್ ನಿರೂಪಿಸಿದರು.