ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ಗೌರವಧನಕ್ಕೆ ಸರ್ಕಾರ ಯೋಜನೆ: ದಿನೇಶ್‌ ಗುಂಡೂರಾವ್‌

KannadaprabhaNewsNetwork |  
Published : Jan 19, 2025, 02:17 AM IST
ಶಿಲಾನ್ಯಾಸ | Kannada Prabha

ಸಾರಾಂಶ

ಮನೆ ಮನೆಗೆ ತೆರಳಿ ತಪಾಸಣೆ ನಡೆಸಿ, ಔಷಧ ನೀಡುವ ಗೃಹ ಆರೋಗ್ಯ ಯೋಜನೆ ಕೋಲಾರದಲ್ಲಿ ಜಾರಿಯಾಗಿದ್ದು, ಮಾರ್ಚ್ ವೇಳೆಗೆ ಇದನ್ನು ರಾಜ್ಯಕ್ಕೆ ವಿಸ್ತರಿಸಲಾಗುವುದು. ಇದರಿಂದ ಜನರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. 11 ಕೋಟಿ ರು. ಅನುದಾನದಲ್ಲಿ ದ.ಕ. ಜಿಲ್ಲೆಯಲ್ಲಿ17 ಆರೋಗ್ಯ ಕ್ಷೇಮ ಕೇಂದ್ರಗಳು ನಿರ್ಮಾಣವಾಗಲಿವೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಬೆನ್ನೆಲುಬಾಗಿದ್ದು ಇವರಿಗೆ ಮಾಸಿಕ ಕನಿಷ್ಠ 10 ಸಾವಿರ ರು. ಗೌರವಧನವನ್ನು ಏಪ್ರಿಲ್‌ನಿಂದ ನೀಡುವ ಕುರಿತು ರಾಜ್ಯ ಸರಕಾರ ಯೋಜನೆ ರೂಪಿಸಿದೆ. ಕೇಂದ್ರ ಸರಕಾರವು ಆಶಾ ಕಾರ್ಯಕರ್ತೆಯರಿಗೆ ನೀಡುವ ಗೌರವಧನದ ಪಾಲನ್ನು ಹೆಚ್ಚಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಅವರು ಶನಿವಾರ ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 4 ಕೋಟಿ ರು. ಅನುದಾನದಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟಡ ಮತ್ತು ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಆರೋಗ್ಯ ಮತ್ತು ಶಿಕ್ಷಣ ಸಮಾಜ ನಿರ್ಮಾಣಕ್ಕೆ ಅತಿ ಮುಖ್ಯ. ಗ್ರಾಮೀಣ ಭಾಗಕ್ಕೆ ಹೆಚ್ಚಿನ ಸಹಕಾರ ನೀಡುವ ನಿಟ್ಟಿನಲ್ಲಿ ಸರಕಾರ ಕೆಲಸ ಮಾಡುತ್ತಿದೆ. ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆ ಮಾದರಿಯಾಗಿ ರೂಪಿಸಲು ಸರಕಾರ ಚಿಂತನೆ ನಡೆಸಿದೆ, ತಾಲೂಕು ಆಸ್ಪತ್ರೆಗಳು 24 ಗಂಟೆ ಕಾರ್ಯನಿರ್ವಹಿಸುವಂತೆ ರೂಪಿಸಲಾಗುವುದು. ಇಲಾಖೆಯಲ್ಲಿ ಸಿಬ್ಬಂದಿಯನ್ನು ಭರ್ತಿ ಮಾಡಲಾಗುತ್ತಿದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಹರೀಶ್ ಪೂಂಜ ಮಾತನಾಡಿ ಕೊರೋನಾ ಅವಧಿಯಲ್ಲಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉನ್ನತ ಮಟ್ಟದ ಸೇವೆ ನೀಡಲಾಗಿದೆ. ಆಯುಷ್ಮಾನ್ ಭಾರತ ಯೋಜನೆಗೆ ರಾಜ್ಯ ಸರಕಾರ ಹೆಚ್ಚಿನ ಒತ್ತು ನೀಡಬೇಕು. ಆಶಾ ಕಾರ್ಯಕರ್ತೆಯರಿಗೆ ಗೌರವ ಧನದ ಬದಲು ವೇತನ ನೀಡಬೇಕು. ತಾಲೂಕು ಆಸ್ಪತ್ರೆಯಲ್ಲೂ ಕಳೆದ ಅವಧಿಯಲ್ಲಿ ಹೆಚ್ಚಿನ ಕೆಲಸಗಳನ್ನು ನಿರ್ವಹಿಸಲಾಗಿದೆ ಎಂದು ಹೇಳಿದರು. ಮಾಜಿ ಎಂಎಲ್ ಸಿ ಕೆ. ಹರೀಶ್ ಕುಮಾರ್, ಮಚ್ಚಿನ ಗ್ರಾಪಂ ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷೆ ಸೋಮಾವತಿ, ಪುತ್ತೂರು ಎಸಿ ಜುಬಿನ್ ಮೊಹಪಾತ್ರ, ತಾಪಂ ಇಒ ಭವಾನಿ ಶಂಕರ್, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಶೇಖರ್ ಕುಕ್ಕೇಡಿ, ತಾಲೂಕು ಅಧ್ಯಕ್ಷ ಪದ್ಮನಾಭ ಸಾಲಿಯನ್, ಪೆರಾಡಿ ಪ್ಯಾಕ್ಸ್ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ, ಟಿಎಚ್ಒ ಡಾ. ಸಂಜಾತ್ ಮತ್ತಿತರರು ಉಪಸ್ಥಿತರಿದ್ದರು.

ಗ್ರಾಪಂ ಸದಸ್ಯ ಪ್ರಮೋದ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಿಎಚ್ಒ ಡಾ. ತಿಮ್ಮಯ್ಯ ಎಚ್.ಆರ್. ಸ್ವಾಗತಿಸಿದರು. ಪ್ರಾಥಮಿಕ ಸುರಕ್ಷತಾ ಅಧಿಕಾರಿ ಲೋಲಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಗೃಹ ಆರೋಗ್ಯ ಯೋಜನೆ ರಾಜ್ಯಕ್ಕೆ ವಿಸ್ತರಣೆ

ಮನೆ ಮನೆಗೆ ತೆರಳಿ ತಪಾಸಣೆ ನಡೆಸಿ, ಔಷಧ ನೀಡುವ ಗೃಹ ಆರೋಗ್ಯ ಯೋಜನೆ ಕೋಲಾರದಲ್ಲಿ ಜಾರಿಯಾಗಿದ್ದು, ಮಾರ್ಚ್ ವೇಳೆಗೆ ಇದನ್ನು ರಾಜ್ಯಕ್ಕೆ ವಿಸ್ತರಿಸಲಾಗುವುದು. ಇದರಿಂದ ಜನರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. 11 ಕೋಟಿ ರು. ಅನುದಾನದಲ್ಲಿ ದ.ಕ. ಜಿಲ್ಲೆಯಲ್ಲಿ17 ಆರೋಗ್ಯ ಕ್ಷೇಮ ಕೇಂದ್ರಗಳು ನಿರ್ಮಾಣವಾಗಲಿವೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

PREV

Recommended Stories

3ನೇ ಮಹಡಿಯಿಂದ ಆಯತಪ್ಪಿಬಿದ್ದು ಪಿಯು ವಿದ್ಯಾರ್ಥಿನಿ ಸಾವು
ಜೈಲೊಳಗೆ ಡ್ರಗ್ಸ್ ಸಾಗಿಸಲುಯತ್ನ: ವಾರ್ಡನ್ ಬಂಧನ