ಸರ್ಕಾರಿ ಶಾಲೆ: ದಾಖಲಾತಿ ಹೆಚ್ಚಳಕ್ಕೆ ಇಂಗ್ಲಿಷ್ ತಂತ್ರ

KannadaprabhaNewsNetwork |  
Published : May 05, 2025, 12:45 AM IST
ಎಸ್ಎಂಜಿ-1- ಫೋಟೋ- ಸಾಂದರ್ಭಿಕ ಚಿತ್ರ | Kannada Prabha

ಸಾರಾಂಶ

ಸರ್ಕಾರ ಏನೇ ಸೌಲಭ್ಯ ನೀಡಿದರೂ ಪೋಷಕರು ಮಾತ್ರ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಹಿಂದೇಟು ಹಾಕುತ್ತಲೇ ಇದ್ದಾರೆ. ಹೀಗಾಗಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಲೇ ಇದೆ. ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಸಂಖ್ಯೆಯನ್ನು ಹೆಚ್ಚಿಸಲು ನಾನಾ ಪ್ರಯತ್ನ ಮಾಡುತ್ತಿರುವ ಶಾಲಾ ಮತ್ತು ಸಾಕ್ಷರತಾ ಇಲಾಖೆ ಈಗ ಇಂಗ್ಲಿಷ್‌ ಮಂತ್ರ ಜಪಿಸುತ್ತಿದೆ.

ಗಣೇಶ್‌ ತಮ್ಮಡಿಹಳ್ಳಿ

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಸರ್ಕಾರ ಏನೇ ಸೌಲಭ್ಯ ನೀಡಿದರೂ ಪೋಷಕರು ಮಾತ್ರ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಹಿಂದೇಟು ಹಾಕುತ್ತಲೇ ಇದ್ದಾರೆ. ಹೀಗಾಗಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಲೇ ಇದೆ. ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಸಂಖ್ಯೆಯನ್ನು ಹೆಚ್ಚಿಸಲು ನಾನಾ ಪ್ರಯತ್ನ ಮಾಡುತ್ತಿರುವ ಶಾಲಾ ಮತ್ತು ಸಾಕ್ಷರತಾ ಇಲಾಖೆ ಈಗ ಇಂಗ್ಲಿಷ್‌ ಮಂತ್ರ ಜಪಿಸುತ್ತಿದೆ.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಳಕ್ಕೆ ನಾನಾ ಪ್ರಯತ್ನ ಮಾಡುತ್ತಿರುವ ಶಾಲಾ ಮತ್ತು ಸಾಕ್ಷರತಾ ಇಲಾಖೆ ಈಗ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಮಕ್ಕಳು ಬರಬೇಕು ಎಂದರೆ ಇಂಗ್ಲಿಷ್ ಮಾಧ್ಯಮದ ಮೊರೆ ಹೋಗಬೇಕು ಎನ್ನುವುದನ್ನು ಕಂಡುಕೊಂಡಿದೆ.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಉಚಿತವಾಗಿ ಸರ್ಕಾರವೇ ನಾನಾ ಸೌಲಭ್ಯ ನೀಡುತ್ತಿದೆ. ಸಮವಸ್ತ್ರ, ಬಿಸಿಯೂಟ ಸೇರಿದಂತೆ ಇನ್ನೂ ಅನೇಕ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಆದರೆ, ಇಂಗ್ಲಿಷ್ ವ್ಯಾಮೋಹದಿಂದಾಗಿ ಬಹುತೇಕ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಹೀಗಾಗಿ ಇನ್ನು ಸರ್ಕಾರಿ ಶಾಲೆಯಲ್ಲೂ ಆಂಗ್ಲ ಮಾಧ್ಯಮ ಆರಂಭಿಸಿದರೆ ಮಕ್ಕಳ ಸಂಖ್ಯೆ ಹೆಚ್ಚಿಸಬಹುದು ಎಂಬುದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಲೆಕ್ಕಚಾರ.

ಹೀಗಾಗಿ ಕಳೆದ ವರ್ಷ ಜಿಲ್ಲೆಯಲ್ಲಿ 49 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಆರಂಭಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಈ ಬಾರಿ ಮತ್ತೆ 32 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಕ್ಕೆ ಅನುಮತಿ ಕೋರಿ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ.ಸರ್ಕಾರಿ ಶಾಲೆಗಳ ಬಗ್ಗೆ ತಾತ್ಸಾರದಿಂದಲೋ ಇಲ್ಲ ಇಂಗ್ಲಿಷ್‌ ಮೇಲಿನ ವ್ಯಾಮೋಹದಿಂದಲೋ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಒಲ್ಲೆ ಎನ್ನುತ್ತಿದ್ದಾರೆ. ಪರಿಣಾಮ ಜಿಲ್ಲೆಯಲ್ಲಿ ಬಹಳಷ್ಟು ಶಾಲೆಗಳಲ್ಲಿ ದಾಖಲಾಗಿರುವ ಮಕ್ಕಳ ಸಂಖ್ಯೆ ಬೆರಳೆಣಿಕೆಯಷ್ಟಿದೆ. ಇದು ಭವಿಷ್ಯದಲ್ಲಿ ಸರ್ಕಾರಿ ಶಾಲೆಗಳ ಬಾಗಿಲು ಮುಚ್ಚುವ ಆಂತಕ ಹೆಚ್ಚಿಸಿದೆ.

ಕ್ಷೀಣಿಸುತ್ತಿರುವ ದಾಖಲಾತಿ:

ಜಿಲ್ಲೆಯಲ್ಲಿ 2000ಕ್ಕೂ ಹೆಚ್ಚು ಪ್ರಾಥಮಿಕ ಶಾಲೆಗಳಿವೆ. ಈ ಪೈಕಿ 1ರಿಂದ 7ನೇ ತರಗತಿವರೆಗೆ ಒಟ್ಟು 212 ಸರ್ಕಾರಿ ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ಮಕ್ಕಳಿದ್ದಾರೆ. ಅದರಲ್ಲೂ 52 ಸರ್ಕಾರಿ ಶಾಲೆಗಳಲ್ಲಿ 5ಕ್ಕಿಂತ ಕಡಿಮೆ ಮಕ್ಕಳು ದಾಖಲಾಗಿದ್ದಾರೆ. ಈ ಪೈಕಿ ಭದ್ರಾವತಿ ತಾಲೂಕಿನ ಬಾರಂದೂರಿನ ಸರ್ಕಾರಿ ಪ್ರಾಮಿಕ ಶಾಲೆ, ಸೊರಬ ತಾಲೂಕಿನ ಗುಡವಿ ಸರ್ಕಾರಿ ಪ್ರಾಥಮಿಕ ಶಾಲೆ, ತೀರ್ಥಹಳ್ಳಿ ತಾಲೂಕಿನ ದೇವಂಗಿಯ ಸರ್ಕಾರಿ ಪ್ರಾಥಮಿಕ ಶಾಲೆ, ಮೇಗರವಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ, ನಲ್ಲೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೇವಲ ಒಬ್ಬ ವಿದ್ಯಾರ್ಥಿ ಇದ್ದಾರೆ. ಹೀಗೆ ಸಾಕಷ್ಟು ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಬೆರಳಿಕೆಯಷ್ಟಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಜಿಲ್ಲೆಯಲ್ಲಿ ಸಾಕಷ್ಟು ಸರ್ಕಾರಿ ಶಾಲೆಗಳಿಗೆ ಬೀಗ ಬೀಳುವ ಸಾಧ್ಯತೆ ಹೆಚ್ಚಿದೆ.

ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳಕ್ಕೆ ಇಲಾಖೆಯಿಂದ ನಾನಾ ಪ್ರಯತ್ನ ಮಾಡಲಾಗುತ್ತಿದೆ. ಶಿಕ್ಷಕರೇ ಮನೆ ಮನೆಗೆ ತೆರಳಿ ದಾಖಲಾತಿ ಅಭಿಯಾನ ನಡೆಸುತ್ತಿದ್ದಾರೆ. ಮಕ್ಕಳನ್ನು ಸರ್ಕಾರಿ ಶಾಲೆಗೆ ಕರೆತರುವ ಪ್ರಯತ್ನ ಇಲಾಖೆಯಿಂದ ನಿರಂತರವಾಗಿ ನಡೆಯುತ್ತಲೇ ಇದೆ.

- ಮಂಜುನಾಥ್‌, ಡಿಡಿಪಿಐ, ಶಿವಮೊಗ್ಗ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳನ್ನು ಅಧ್ಯಯನ ಪ್ರವಾಸಕ್ಕೆ ಟಿಪ್ಪರಲ್ಲಿ ಕರೆದೊಯ್ದ ಹೆಡ್‌ಮಾಸ್ಟರ್‌!
ಬೆಂಗಳೂರು ರೇಸ್‌ಕೋರ್ಸ್‌ ಕುಣಿಗಲ್‌ಗೆ ಶಿಫ್ಟ್‌ : ಸಂಪುಟ