ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆಗಳು: ಸುರೇಶ ಅಂಕಲಗಿ

KannadaprabhaNewsNetwork |  
Published : Nov 29, 2026, 01:15 AM IST
ಸೈದಾಪುರ ಪಟ್ಟಣದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನದಲ್ಲಿ ತಹಸೀಲ್ದಾರ, ಕಾರ್ಯನಿರ್ವಾಹಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದರು.  | Kannada Prabha

ಸಾರಾಂಶ

ಸಾರ್ವಜನಿಕರ ಕುಂದು ಕೊರತೆಗಳನ್ನು ತ್ವರಿತವಾಗಿ ಪರಿಹರಿಸುವುದರ ಜತೆಗೆ ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದು ಯಾದಗಿರಿ ತಹಸೀಲ್ದಾರ್ ಸುರೇಶ ಅಂಕಲಗಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಸೈದಾಪುರ

ಸಾರ್ವಜನಿಕರ ಕುಂದು ಕೊರತೆಗಳನ್ನು ತ್ವರಿತವಾಗಿ ಪರಿಹರಿಸುವುದರ ಜತೆಗೆ ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದು ಯಾದಗಿರಿ ತಹಸೀಲ್ದಾರ್ ಸುರೇಶ ಅಂಕಲಗಿ ತಿಳಿಸಿದರು.

ಪಟ್ಟಣದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿದ್ದ ಸೈದಾಪುರ ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ಹಾಗೂ ಸಾರ್ವಜನಿಕರಿಗೆ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡುವುದರ ಜತೆಗೆ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಭೈ ಪ್ರಸ್ತಾವನೆಗೈದು, ಸರ್ಕಾರದ ವಿವಿಧ ಇಲಾಖೆಗಳ ತಾಲೂಕುಮಟ್ಟದ ಅಧಿಕಾರಿಗಳು ಅಭಿಯಾನದಲ್ಲಿ ಭಾಗವಹಿಸಿ ಸಾರ್ವಜನಿಕರಿಂದ ಅಹವಾಲು ಹಾಗೂ ಕುಂದುಕೊರತೆಗಳ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಸ್ಥಳದಲ್ಲಿಯೇ ಪರಿಹರಿಸಲು ಸಾಧ್ಯವಿರುವ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಲಾಗುವುದು. ಉಳಿದ ಅರ್ಜಿಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ಹೊಣೆಗಾರಿಕೆ ನಿಗದಿಪಡಿಸಿ ಏಳು ದಿನಗಳೊಳಗಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಅಭಿಯಾನದಲ್ಲಿ ವಿವಿಧ ಇಲಾಖೆಗಳ ಸೇವೆ ಮತ್ತು ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಲಾಗಿತ್ತು. ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಅಹವಾಲು ಸಲ್ಲಿಸಿದರು.

ಬಿಇಓ ವೀರಪ್ಪ ಕೊನ್ನಳ್ಳಿ, ರವಿ ಎಂ. ಗೇಡ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಅಧಿಕಾರಿಗಳೂ ಕೆಮಿಕಲ್ ಮಿಶ್ರಿತ ನೀರು ಕುಡಿಯಲಿ: ಯಾದಗಿರಿ: ಶೆಟ್ಟಿಹಳ್ಳಿ ಗ್ರಾಮಸ್ಥರು ಸೈದಾಪುರ ಸಮೀಪದ ಶೆಟ್ಟಿಹಳ್ಳಿ ಗ್ರಾಮದಲ್ಲಿ ಕಳೆದ ಆರು ತಿಂಗಳಿಂದ ರಾಸಾಯನಿಕ ಮಿಶ್ರಿತ ನೀರು ಪೂರೈಕೆಯಾಗುತ್ತಿದೆ. ಇದರಿಂದ ಗ್ರಾಮಸ್ಥರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಕುರಿತು ಪಂಚಾಯಿತಿ ಅಧಿಕಾರಿಗಳು ಸೇರಿದಂತೆ ತಾಲೂಕು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಸಮಸ್ಯೆ ಬಗೆಹರಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಪ್ರಜಾಸೇವೆ ಅಭಿಯಾನದಲ್ಲಿ ಅಧಿಕಾರಿಗಳಿಗೆ ನೀರು ಕುಡಿಯುವಂತೆ ಒತ್ತಾಯಿಸಿ ತಮ್ಮ ಅಳಲು ತೋಡಿಕೊಂಡರು. ''''''''ನಾವು ಕುಡಿಯುತ್ತಿರುವ ನೀರನ್ನು ನೀವು ಕುಡಿದು ನೋಡಿ, ಆಗ ನಮ್ಮ ನೋವು ಅರ್ಥವಾಗುತ್ತದೆ'''''''' ಎಂದು ಅಧಿಕಾರಿಗಳ ಮುಂದೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ನಂತರ ಗ್ರಾಮಸ್ಥರ ಅಹವಾಲು ಆಲಿಸಿದ ತಹಸೀಲ್ದಾರ್ ಸುರೇಶ ಅಂಕಲಗಿ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಬಸವರಾಜ ಶರಭೈ, ಸ್ಥಳದಲ್ಲಿದ್ದ ಗ್ರಾಮ ಪಂಚಾಯಿತಿ ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ತಕ್ಷಣ ಗ್ರಾಮಕ್ಕೆ ತೆರಳಿ ಪರಿಶೀಲನೆ ನಡೆಸಿ, ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಪೂರೈಸುವಂತೆ ಸೂಚಿಸಿದರು. ಎರಡು ದಿನಗಳೊಳಗಾಗಿ ಶುದ್ಧ ಕುಡಿಯುವ ನೀರು ಒದಗಿಸುವ ಭರವಸೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಮಸ್ಥರು, ನಿಗದಿತ ಅವಧಿಯಲ್ಲಿ ಶುದ್ಧ ಕುಡಿಯುವ ನೀರು ಪೂರೈಸದಿದ್ದರೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ, ಜಿಲ್ಲೆಯ ಎಲ್ಲ ಅಧಿಕಾರಿಗಳಿಗೂ ಇದೇ ನೀರನ್ನು ಕುಡಿಯುವಂತೆ ಮಾಡುವುದಾಗಿ ಎಚ್ಚರಿಕೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರತಿ ರೈತರಿಗೆ ₹ 50 ಸಾವಿರ ಪರಿಹಾರ ನೀಡಿ
ಕಣ್ಣು ಕತ್ತಲಾದರೂ ಅಕ್ಷರಗಳ ಬೆಳಕು ಆರಲಿಲ್ಲ!