ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಕೊಪ್ಪದಲ್ಲಿ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನದಲ್ಲಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿ ಮಾತನಾಡಿ, ಪ್ರಜಾಸೇವಾ ಆಂದೋಲನದ ಉದ್ದೇಶ ಕೇವಲ ಅರ್ಜಿಗಳನ್ನು ಸ್ವೀಕರಿಸುವುದಲ್ಲ. ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಮೂಲಕ ಪರಿಹಾರಕ್ಕೆ ಕ್ರಮಕೈಗೊಳ್ಳುವುದಾಗಿದೆ ಎಂದರು.
ಆಡಳಿತ ಎಂದರೆ ಕೇವಲ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಕಡತ ವಿಲೇವಾರಿ ಮಾಡುವುದಲ್ಲ. ಸಮಾಜದ ಕಟ್ಟಕಡೆಯ ವ್ಯಕ್ತಿ ಸಮಸ್ಯೆ ಆಲಿಸಿ ಕಾಲಮಿತಿಯಲ್ಲಿ ಪರಿಹಾರ ಕಲ್ಪಿಸುವುದೇ ನಿಜವಾದ ಜನಪರ ಆಡಳಿತ ಎಂದು ಮುಖ್ಯಮಂತ್ರಿಗಳ ಅವರ ಆಶಯದಂತೆ ಪ್ರತಿ ಶನಿವಾರ ಪ್ರಜಾಸೇವಾ ಆಂದೋಲನ ನಡೆಯುತ್ತಿದೆ ಎಂದರು.ಪ್ರಜಾಪ್ರಭುತ್ವದ ಆಶಯಗಳನ್ನು ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಿಸುವ ಈ ಪ್ರಯತ್ನ ಆಡಳಿತ ಮತ್ತು ಜನರ ನಡುವಿನ ಅಂತರವನ್ನು ಕಡಿಮೆ ಮಾಡುವ ಮಹತ್ವದ ಹೆಜ್ಜೆಯಾಗಿದೆ. ಅಧಿಕಾರಿಗಳು, ಸರ್ಕಾರಿ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.
ಕೊಪ್ಪದಲ್ಲಿ ಅ.3ರ ಶನಿವಾರದಂದು 124 ಅರ್ಜಿ ಸ್ವೀಕರಿಸಲಾಗಿದೆ. ವಾರದೊಳಗೆ ಅರ್ಜಿಗಳನ್ನು ಇತ್ಯರ್ಥ ಮಾಡುವ ಮೂಲಕ ಜನರ ಸಮಸ್ಯೆ ತ್ವರಿತವಾಗಿ ಪರಿಹರಿಸಬೇಕು ಎಂದು ಸೂಚಿಸಿದ ಅವರು, 3 ವರ್ಷದಲ್ಲಿ ಜಿಲ್ಲಾ, ತಾಲೂಕು ಹಾಗೂ ಉಪವಿಭಾಗಾಧಿಕಾರಿಗಳ ಕಂದಾಯ ನ್ಯಾಯಾಲಯಗಳಲ್ಲಿ 24,974 ಪ್ರಕರಣಗಳ ವಿಲೇವಾರಿ ಮಾಡಲಾಗಿದೆ ಎಂದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಶಿವಕುಮಾರ್ ಬಿರಾದರ, ತಾಪಂ ಇಒ ರಾಮಲಿಂಗಯ್ಯ, ಬಿಇಒ ಧನಂಜಯ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.