ಚಿತ್ರದುರ್ಗ: ಚಿತ್ರದುರ್ಗದಲ್ಲೊಂದು ಸರ್ಕಾರಿ ಮೆಡಿಕಲ್ ಕಾಲೇಜು ಬೇಕೆಂಬ ದಶಕಗಳ ಕೂಗಿಗೆ ಅಂತೂ ಮನ್ನಣೆ ದೊರೆತಿದ್ದು, 150 ವಿದ್ಯಾರ್ಥಿಗಳು ಪ್ರಥಮ ವರ್ಷದ ಮೆಡಿಕಲ್‌ಗೆ ಪ್ರವೇಶ ಪಡೆದಿದ್ದಾರೆ. ಶುಕ್ರವಾರ ನಗರದ ತರಾಸು ರಂಗಮಂದಿರದಲ್ಲಿ ವೈಟ್ ಕೋಟ್ ಧರಿಸುವುದರ ಮೂಲಕ ವಿದ್ಯಾರ್ಥಿಗಳು ಪ್ರವೇಶವನ್ನು ಸಾಕ್ಷೀಕರಿಸಿದರು.
ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಪ್ರತಿ ಸಾವಿರ ಮಂದಿಗೆ ಒಬ್ಬ ವೈದ್ಯರು ಇರಬೇಕು. ಆದರೆ ದೇಶದಲ್ಲಿ 800 ಮಂದಿಗೆ ಒಬ್ಬ ವೈದ್ಯರು ಇದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಆದ ನಂತರ 60 ಸಾವಿರ ವಿದ್ಯಾರ್ಥಿಗಳನ್ನು ವೈದ್ಯಕೀಯ ಕ್ಷೇತ್ರದ ಪ್ರವೇಶಕ್ಕೆ ಅವಕಾಶ ಕಲ್ಪಿಸಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ನಿಯಮಕ್ಕಿಂತಲೂ ನಮ್ಮ ದೇಶದಲ್ಲಿ ವೈದ್ಯರ ಸಂಖ್ಯೆ ಜಾಸ್ತಿ ಇದೆ. ದೇಶದ ಜನರಿಗೆ ವೈದ್ಯಕೀಯ ಸೇವೆಯ ವೆಚ್ಚವೂ ಜಾಸ್ತಿಯಾಗುತ್ತಿದೆ. ಇದಕ್ಕೆ ನಮಲ್ಲಿ ಮೌಲ್ಯಗಳ ಕುಸಿತ, ಸಾಮಾಜಿಕ ಕಳಕಳಿ ಇಲ್ಲದೇ ಇರುವುದೇ ಪ್ರಮುಖ ಕಾರಣವಾಗಿದೆ. ಯಾವುದೇ ವೃತ್ತಿಯಲ್ಲಿ ನೈತಿಕತೆ ಇರಬೇಕು. ನೈತಿಕತೆ ಇಲ್ಲದ ವೃತ್ತಿ ವೃತ್ತಿಯೇ ಅಲ್ಲ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ವೈದ್ಯರಲ್ಲಿ ದೇವರನ್ನು ಕಾಣುವ ಪರಂಪರೆ ಭಾರತೀಯ ಸಂಸ್ಕೃತಿಯಲ್ಲಿ ಹಿಂದಿನಿಂದಲೂ ಪಾಲಿಸಿಕೊಂಡು ಬರಲಾಗುತ್ತಿದೆ. ರೋಗಿಗಳ ಪ್ರಾಣ ಉಳಿಸುವ ನಿಟ್ಟಿನಲ್ಲಿ ಮಾನವೀಯತೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದರೆ ಹೆಸರು, ಕೀರ್ತಿ, ಹಣವೂ ಸಿಗಲಿದೆ. ಯಾರೂ ಹಣದ ಹಿಂದೆ ಹೋಗಬಾರದು ಎಂದು ಕಿವಿಮಾತು ಹೇಳಿದರು.ಜಿಲ್ಲೆಯ ಜನರು ಹಾಗೂ ಜನಪ್ರತಿನಿಧಿಗಳ ಅನೇಕ ವರ್ಷಗಳ ಹೋರಾಟದ ಫಲವಾಗಿ ಚಿತ್ರದುರ್ಗ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ ಮಂಜೂರಾಗಿದೆ. ಇಲ್ಲಿ ಪ್ರವೇಶ ಪಡೆದ ವೈದ್ಯಕೀಯ ವಿದ್ಯಾರ್ಥಿಗಳು ವಿಶ್ವದ ಎಲ್ಲ ಕಡೆಗಳಲ್ಲಿಯೂ ಚಿತ್ರದುರ್ಗ ಜಿಲ್ಲೆಗೆ ಕೀರ್ತಿ ತರಬೇಕು ಎಂದರು.
ಇದೇ ಸಂದರ್ಭದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗದನ್ವಯ ಮಹರ್ಷಿ ಚರಕ ಶಪಥವನ್ನು ಚಿತ್ರದುರ್ಗ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ವಿಶೇಷಾಧಿಕಾರಿ ಡಾ.ಬಿ.ವೈ.ಯುವರಾಜ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ಬೋಧಿಸಿದರು. ಸಮಾರಂಭದ ಅಂಗವಾಗಿ ಪ್ರತಿ ಎಂಬಿಬಿಎಸ್ ವಿದ್ಯಾರ್ಥಿ ಇದೇ ಸಂದರ್ಭದಲ್ಲಿ ಬಿಳಿ ಕೋಟ್ ಧರಿಸಿದರು.