ರಾಜ್ಯಪಾಲರಿಂದ ಸರ್ಕಾರ ಅಸ್ಥಿರ ಯತ್ನ ಆರೋಪ: ಕಮ್ಯೂನಿಸ್ಟ್ ಪಕ್ಷ ಪ್ರತಿಭಟನೆ

KannadaprabhaNewsNetwork |  
Published : Aug 30, 2024, 01:05 AM IST
ಚಿತ್ರ :  29ಎಂಡಿಕೆ5 :  ಭಾರತ ಕಮ್ಯೂನಿಸ್ಟ್ ಪಕ್ಷದಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.  | Kannada Prabha

ಸಾರಾಂಶ

ಜನರಿಂದ ಬಹುಮತ ಪಡೆದು ಆಯ್ಕೆಯಾದ ಚುನಾಯಿತ ಕರ್ನಾಟಕ ರಾಜ್ಯ ಸರ್ಕಾರವನ್ನು ರಾಜ್ಯಪಾಲರ ಮೂಲಕ ಅಸ್ಥಿರಗೊಳಿಸಲು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಭಾರತ ಕಮ್ಯೂನಿಸ್ಟ್ ಪಕ್ಷ ನಗರದಲ್ಲಿ ಗುರುವಾರ ಪ್ರತಿಭಟಿಸಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ರಾಜ್ಯಪಾಲರ ಹುದ್ದೆ ಭಾರತದ ಒಕ್ಕೂಟ ವ್ಯವಸ್ಥೆ ಅಸ್ಥಿರಗೊಳಿಸಲು ರಾಜಕೀಯವಾಗಿ ದುರ್ಬಳಕೆಯಾಗುತ್ತಿದೆ. ರಾಜ್ಯದ ಈ ಹಿಂದಿನ ಹಲವು ಭಷ್ಟಾಚಾರ ಪ್ರಕರಣಗಳ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿ ತನಿಖೆಗೆ ಅನುಮತಿ ನೀಡುವಂತೆ ಕೋರಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರದಲ್ಲಿ ಒಬ್ಬ ವ್ಯಕ್ತಿ ನೀಡಿದ ದೂರನ್ನಾಧರಿಸಿ ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನು ಗಮನಿಸಿದರೆ ರಾಜ್ಯಪಾಲರ ನಿರ್ಧಾರ ರಾಜಕೀಯ ಪ್ರೇರಿತವಾಗಿದೆ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಸಿಪಿಐ ಉಪ ಕಾರ್ಯದರ್ಶಿ ಎಚ್.ಎಂ.ಸೋಮಪ್ಪ ಆರೋಪಿಸಿದ್ದಾರೆ.

ಜನರಿಂದ ಬಹುಮತ ಪಡೆದು ಆಯ್ಕೆಯಾದ ಚುನಾಯಿತ ಕರ್ನಾಟಕ ರಾಜ್ಯ ಸರ್ಕಾರವನ್ನು ರಾಜ್ಯಪಾಲರ ಮೂಲಕ ಅಸ್ಥಿರಗೊಳಿಸಲು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಭಾರತ ಕಮ್ಯೂನಿಸ್ಟ್ ಪಕ್ಷ ನಗರದಲ್ಲಿ ಗುರುವಾರ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಸಿಪಿಐ ಪ್ರಮುಖರು ರಾಜ್ಯಪಾಲರ ಹುದ್ದೆ ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.

ಎಚ್‌.ಎಂ.ಸೋಮಪ್ಪ ಮಾತನಾಡಿ, ಮೂಡ ನಿವೇಶನ ಹಂಚಿಕೆ ಪ್ರಕರಣ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣಗಳ ಕುರಿತು ನ್ಯಾಯಾಂಗದ ಚೌಕಟ್ಟಿನಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ನಿವೇಶನ ನೀಡಲು ಒತ್ತಾಯ:

ಇದೇ ಸಂದರ್ಭ ಪ್ರತಿಭಟನಾಕಾರರು ಕಳೆದ ಹಲವು ವರ್ಷಗಳಿಂದ ಕಾಫಿ ತೋಟದ ಲೈನ್‌ಮನೆ ಮತ್ತು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಬಡ ಕೂಲಿ ಕಾರ್ಮಿಕರಿಗೆ ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸಿಕೊಡುವಂತೆ ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿಪತ್ರ ಸಲ್ಲಿಸಿದರು.

ಸಿಪಿಐ ಸೋಮವಾರಪೇಟೆ ತಾಲೂಕು ಕಾರ್ಯದರ್ಶಿ ಶಬಾನ, ಕಟ್ಟಡ ಕಾರ್ಮಿಕರ ಸಂಘದ ಕಾರ್ಯದರ್ಶಿ ಕೃಷ್ಣ, ಎಐಟಿಯುಸಿ ಸಂಚಾಲಕ ಶೇಷಪ್ಪ, ಸದಸ್ಯರಾದ ಪರಮೇಶ್ವರ್, ರಮೇಶ್, ಅಣ್ಣು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ