ಅರೆಭಾಷೆ- ಸಂಸ್ಕೃತಿ ಉತ್ತೇಜನಕ್ಕೆ ಸರ್ಕಾರ ಬದ್ಧ: ಗುಂಡೂರಾವ್‌

KannadaprabhaNewsNetwork |  
Published : Mar 17, 2026, 03:00 AM IST
ಮೂವರು ಸಾಧಕರಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. | Kannada Prabha

ಸಾರಾಂಶ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಚಟುವಟಿಕೆಗಳನ್ನು ಬೆಂಬಲಿಸಲು, ಅರೆಭಾಷೆ ಮತ್ತು ಅದರ ಶ್ರೀಮಂತ ಸಾಂಸ್ಕೃತಿಕ ಸಂಪ್ರದಾಯಗಳನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಮಂಗಳೂರು: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಚಟುವಟಿಕೆಗಳನ್ನು ಬೆಂಬಲಿಸಲು, ಅರೆಭಾಷೆ ಮತ್ತು ಅದರ ಶ್ರೀಮಂತ ಸಾಂಸ್ಕೃತಿಕ ಸಂಪ್ರದಾಯಗಳನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ನಗರದ ಅಂಬೇಡ್ಕರ್‌ ಭವನದಲ್ಲಿ ಶನಿವಾರ ಅರೆಭಾಷೆ ಅಕಾಡೆಮಿ ವತಿಯಿಂದ ಮೂವರು ಸಾಧಕರಿಗೆ ಗೌರವ ಪ್ರಶಸ್ತಿ ಪ್ರದಾನ ನೆರವೇರಿಸಿ ಅವರು ಮಾತನಾಡಿದರು.

ಅರೆಭಾಷೆ ಕೆಲವು ಪ್ರದೇಶಗಳಿಗೆ ಸೀಮಿತವಾಗಿದ್ದರೂ, ಯಾವುದೇ ನಿರ್ದಿಷ್ಟ ಜಾತಿ ಅಥವಾ ಸಮುದಾಯಕ್ಕೆ ಸೀಮಿತವಾಗಿಲ್ಲ. ಅರೆಭಾಷೆ ಸಾಹಿತ್ಯ, ಸಂಸ್ಕೃತಿಯನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರ ಅಕಾಡೆಮಿ ಸ್ಥಾಪಿಸಿದೆ. ಭಾಷಾ ಪರಂಪರೆ ರಕ್ಷಿಸುವಲ್ಲಿ ಮತ್ತು ಅದನ್ನು ಭವಿಷ್ಯದ ಪೀಳಿಗೆಗೆ ರವಾನಿಸುವ ನಿಟ್ಟಿನಲ್ಲಿ ಇಂತಹ ಸಂಸ್ಥೆಗಳು ನಿರ್ಣಾಯಕ ಪಾತ್ರ ವಹಿಸಲಿವೆ. ಈ ಹಿನ್ನೆಲೆಯಲ್ಲಿ ಅಕಾಡೆಮಿಯ ಕಾರ್ಯ ಚಟುವಟಿಕೆಗಳಿಗೆ ಸರ್ಕಾರ ಸದಾ ಪ್ರೋತ್ಸಾಹ ನೀಡಲಿದೆ ಎಂದು ಹೇಳಿದರು.

ಭಾಷೆ ಅಥವಾ ಜಾತಿಯ ಆಧಾರದ ಮೇಲೆ ಸಮಾಜವನ್ನು ವಿಭಜಿಸಲು ಯಾರೂ ಪ್ರಯತ್ನಿಸಬಾರದು. ನಮ್ಮ ಸಂವಿಧಾನವನ್ನು ಪ್ರತಿಯೊಬ್ಬ ಭಾರತೀಯನನ್ನು ಗಮನದಲ್ಲಿಟ್ಟುಕೊಂಡು ರಚಿಸಲಾಗಿದೆ. ಎಲ್ಲ ಭಾಷೆಗಳನ್ನು ನಾವು ಪ್ರೀತಿಸಬೇಕು ಮತ್ತು ಉತ್ತೇಜಿಸಬೇಕು ಎಂದರು.ವಿಧಾನಸಭೆ ಸ್ಪೀಕರ್‌ ಯು.ಟಿ. ಖಾದರ್‌ ಮಾತನಾಡಿ, ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯ ಕ್ಷೇತ್ರಗಳನ್ನು ಜೋಡಿಸಿಕೊಂಡು ಭಾಷೆಗಳ ರಕ್ಷಣೆಗೆ ಯುವ ಸಮೂಹ ಕಟಿಬದ್ಧರಾಗಬೇಕು ಎಂದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್‌, ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್‌ ಪಿಂಟೊ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ, ಅಕಾಡೆಮಿಯ ಮಾಜಿ ಸದಸ್ಯ ಲೋಕಯ್ಯ ಗೌಡ ಕೆ., ಮಂಗಳೂರು ತಾಲೂಕು ಒಕ್ಕಲಿಗ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷೆ ಸೌಮ್ಯ ಸುಕುಮಾರ್, ಮಂಗಳೂರು ಯುವ ಘಟಕದ ಅಧ್ಯಕ್ಷ ಕಿರಣ್‌ ಬುಡ್ಲೆಗುತ್ತು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕ ರಾಜೇಶ್ ಜಿ., ಅಕಾಡೆಮಿಯ ರಿಜಿಸ್ಟ್ರಾರ್ ಚಿನ್ನಸ್ವಾಮಿ ಇದ್ದರು.ಸುಳ್ಯ ಲಯನ್ಸ್ ಮಾಜಿ ರಾಜ್ಯಪಾಲ ಎಂ.ಬಿ. ಸದಾಶಿವ ಅಭಿನಂದನಾ ಭಾಷಣ ಮಾಡಿದರು. ಚಂದ್ರಶೇಖರ್ ಪೇರಾಲು ಸ್ವಾಗತಿಸಿದರು. ಅಕಾಡೆಮಿ ವತಿಯಿಂದ ಒಟ್ಟು 11 ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.

ಪ್ರಶಸ್ತಿ ಪುರಸ್ಕೃತ ಸಾಧಕರು: ಸಂಶೋಧನೆ ಮತ್ತು ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಅನಂತರಾಜ ಗೌಡ, ಅರೆಭಾಷಿಕರ ಸಂಘಟನೆ ಮತ್ತು ಸಾಮಾಜ ಸೇವೆಗಾಗಿ ಲೋಕೇಶ್ವರಿ ವಿನಯಚಂದ್ರ, ಅರೆಭಾಷೆ ಸಾಹಿತ್ಯಕ್ಕೆ ನೀಡಿದ ಕೊಡುಗೆಗಾಗಿ ಕಟ್ರತನ ಲಲಿತಾ ಅಯ್ಯಣ್ಣ ಅವರಿಗೆ ಅಕಾಡೆಮಿಯ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರತಿ ಪ್ರಶಸ್ತಿಯು 50 ಸಾವಿರ ರು. ನಗದು ಬಹುಮಾನ ಮತ್ತು ಪ್ರಶಂಸಾ ಪತ್ರವನ್ನು ಒಳಗೊಂಡಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪರ್ಸಿಯನ್‌ ಹೇರಿ ಕನ್ನಡ ಕೊಲೆ ಮಾಡಿದ ಟಿಪ್ಪು: ಸಿ.ಟಿ. ರವಿ
ಲೇಡಿಗೋಶನ್‌ : ಗುತ್ತಿಗೆದಾರರ ಬಾಕಿ ಮೊತ್ತ ಲೋಕ ಅದಾಲತ್‌ನಲ್ಲಿ ಇತ್ಯರ್ಥ