ಸೇವಾ ಮನೋಭಾವದೊಂದಿಗೆ ಕಾರ್ಯ ನಿರ್ವಹಿಸುವುದು ಅಗತ್ಯವಾಗಿದೆ
ಕುಷ್ಟಗಿ: ಸಾರ್ವಜನಿಕರಿಗೆ ಸರ್ಕಾರಿ ಸೇವೆ ತ್ವರಿತ, ಪಾರದರ್ಶಕ ಹಾಗೂ ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ತಹಸೀಲ್ದಾರ ಗುರುರಾಜ ಹೇಳಿದರು.
ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಗ್ರಾಮ ಒನ್, ಕರ್ನಾಟಕ ಒನ್ ಸಿಬ್ಬಂದಿಗಳ ಹಾಗೂ ಕಂದಾಯ ನಿರೀಕ್ಷಕರು, ಗ್ರಾಮಾಡಳಿತಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಗ್ರಾಮೀಣ ಪ್ರದೇಶದ ಜನರಿಗೆ ಸುಲಭವಾಗಿ ದೊರೆಯುವಂತೆ ಮಾಡುವ ಹೊಣೆಗಾರಿಕೆ ಗ್ರಾಮ ಒನ್ ಕೇಂದ್ರಗಳ ಮೇಲಿದೆ ಎಂದರು.
ಜನರು ತಮ್ಮ ಸಮಸ್ಯೆ ಪರಿಹಾರ ಹಾಗೂ ವಿವಿಧ ಪ್ರಮಾಣಪತ್ರಗಳಿಗಾಗಿ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರ ಅವಲಂಬಿಸಿದ್ದು, ಸೇವಾ ಮನೋಭಾವದೊಂದಿಗೆ ಕಾರ್ಯ ನಿರ್ವಹಿಸುವುದು ಅಗತ್ಯವಾಗಿದೆ ಎಂದು ಹೇಳಿದರು.
ಸರ್ಕಾರದ ಯೋಜನೆಗಳ ಕುರಿತು ಜನರಿಗೆ ಸಮರ್ಪಕ ಮಾಹಿತಿ ನೀಡುವುದು, ಅರ್ಜಿ ಸಮಯಕ್ಕೆ ಸರಿಯಾಗಿ ಸ್ವೀಕರಿಸಿ ಪ್ರಕ್ರಿಯೆಗೊಳಿಸುವುದು ಹಾಗೂ ಪ್ರಮಾಣಪತ್ರ ವಿಳಂಬವಿಲ್ಲದೆ ವಿತರಿಸುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳ ಅರ್ಜಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಂತ್ರಿಕ ಸಮಸ್ಯೆ , ಇತರೆ ಕಾರಣಗಳಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ ಅವರು, ಕೇಂದ್ರಗಳಲ್ಲಿ ಕಂಪ್ಯೂಟರ್, ಇಂಟರ್‌ನೆಟ್ ಹಾಗೂ ಇತರೆ ಮೂಲಸೌಕರ್ಯ ಸಮರ್ಪಕವಾಗಿ ಬಳಸಿಕೊಂಡು ಸೇವೆಗಳನ್ನು ಸುಗಮವಾಗಿ ಒದಗಿಸಬೇಕು ಎಂದರು.
ಗ್ರಾಮೀಣ ಜನತೆಗೆ ಸರ್ಕಾರಿ ಸೇವೆಗಳು ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಆರಂಭಿಸಲಾಗಿರುವ ಗ್ರಾಮ ಒನ್ ಕೇಂದ್ರಗಳ ಯಶಸ್ಸು ಸಿಬ್ಬಂದಿಗಳ ಕಾರ್ಯಕ್ಷಮತೆಯ ಮೇಲೆ ಅವಲಂಬಿತವಾಗಿದ್ದು, ಸಾರ್ವಜನಿಕರ ವಿಶ್ವಾಸ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಗ್ರಾಮ ಒನ್ ಸಿಬ್ಬಂದಿಗಳು ತಮ್ಮ ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಸಮಸ್ಯೆ, ತಾಂತ್ರಿಕ ಅಡಚಣೆ ಹಾಗೂ ಸೇವಾ ವಿತರಣೆಯಲ್ಲಿನ ಸವಾಲುಗಳ ಕುರಿತು ಚರ್ಚಿಸಿದರು. ಈ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಹಸೀಲ್ದಾರರು ಭರವಸೆ ನೀಡಿದರು.
ಸಭೆಯಲ್ಲಿ ಗ್ರೇಡ್ 2 ತಹಸೀಲ್ದಾರ ರಜನಿಕಾಂತ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳ ಸಿಬ್ಬಂದಿ ಉಪಸ್ಥಿತರಿದ್ದರು. ಅರ್ಜಿಗಳ ವಿಲೇವಾರಿ, ದಾಖಲೆಗಳ ಪರಿಶೀಲನೆ, ಆದಾಯ, ಜಾತಿ ಹಾಗೂ ನಿವಾಸ ಪ್ರಮಾಣ ಪತ್ರಗಳ ವಿತರಣೆ ಸೇರಿದಂತೆ ವಿವಿಧ ಸೇವೆಗಳ ಕುರಿತು ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.