ಮುಷ್ಕರ ಹತ್ತಿಕ್ಕುವ ಪ್ರಯತ್ನ ಮಾಡುತ್ತಿರುವುದು ಖಂಡನಾರ್ಹ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳ ಸಮಸ್ಯೆಗಳನ್ನು ಆಲಿಸಿ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ ಒಟ್ಟಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಅಕ್ಟೋಬರ್ 4 - 5 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡಿ ಈಗ ಜಿಲ್ಲಾ ಹಂತ ದಲ್ಲಿ ಮುಷ್ಕರ ನಡೆಸುತ್ತಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಸೇರಿ ಮುಷ್ಕರ ನಡೆಸುತ್ತಿರುವ ಗ್ರಾಪಂ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳ ಸಮಸ್ಯೆ ಆಲಿಸಿ ಪರಿಹಾರ ಕ್ರಮ ಕೈಗೊಳ್ಳಬೇಕಾಗಿರುವ ಸರ್ಕಾರ ಆ ಕೆಲಸ ಮಾಡದೇ ಪ್ರತಿಭಟನಾ ನಿರತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವ ಬೆದರಿಕೆ ಪತ್ರವನ್ನು ಆಯುಕ್ತರ ಮೂಲಕ ಹೊರಡಿಸಿ ಮುಷ್ಕರ ಹತ್ತಿಕ್ಕುವ ಪ್ರಯತ್ನ ಮಾಡುತ್ತಿರುವುದು ಖಂಡನಾರ್ಹ ಎಂದು ಹೇಳಿದ್ದಾರೆ.