ಸಂಡೂರು: ತಾಲೂಕು ಆಡಳಿತ, ತಾಲೂಕು ಪಂಚಾಯ್ತಿ, ಶಿಕ್ಷಣ ಇಲಾಖೆ, ಪುರಸಭೆ, ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಪಟ್ಟಣದಲ್ಲಿ ಬುಧವಾರ ಸಂವಿಧಾನ ದಿನವನ್ನು ಸಂಭ್ರಮದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.300 ಮೀ. ಉದ್ದದ ತ್ರಿವರ್ಣ ಧ್ವಜವನ್ನು ಹಿಡಿದು ಸಾಗಿದ ವಿದ್ಯಾರ್ಥಿಗಳು:
ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಶಾಸಕಿ ಅನ್ನಪೂರ್ಣ ಈ.ತುಕಾರಾಂ ಉದ್ಘಾಟಿಸಿ, ಸಂವಿಧಾನದ ಪೀಠಿಕೆಯನ್ನು ವಾಚಿಸಿ, ಸಂವಿಧಾನ ನಮ್ಮ ದೇಶದ ಆತ್ಮ. ಉತ್ಕೃಷ್ಟ ಸಂವಿಧಾನವನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರಚಿಸಿಕೊಟ್ಟರು. ಸಂವಿಧಾನವು ನಮಗೆ ಹಲವು ಹಕ್ಕುಗಳು ಹಾಗೂ ಕರ್ತವ್ಯಗಳನ್ನು ನೀಡಿದೆ. ಸಂವಿಧಾನದ ಆಶಯಗಳನ್ನು ಕಾರ್ಯರೂಪಕ್ಕೆ ತರಲು ಎಲ್ಲರೂ ಶ್ರಮಿಸಬೇಕು. ಸಂವಿಧಾನದ ಸಮಾಜದಲ್ಲಿ ಸಮಾನತೆಯನ್ನು ಕಲ್ಪಿಸಿದೆ. ಡಾ.ಬಿ.ಆರ್. ಅಂಬೇಡ್ಕರ್ ಶ್ರಮದ ಫಲವಾಗಿ ಇಂದು ಮಹಿಳೆಯರಿಗೂ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಪಾಲು ದೊರೆಯುವಂತಾಗಿದೆ ಎಂದರು.
ಸಂವಿಧಾನ ಕಲ್ಪಿಸಿದ ಮೀಸಲಾತಿ ವ್ಯವಸ್ಥೆಯಿಂದ ಹಿಂದೆ ಸಮಾಜದಲ್ಲಿ ನಿರ್ಲಕ್ಷಕ್ಕೆ, ತುಳಿತಕ್ಕೆ ಒಳಗಾಗಿದ್ದವರು ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗಿದೆ. ಸಂವಿಧಾನದ ದಿನ ಸಂವಿಧಾನವನ್ನು ಸ್ಮರಿಸುವ ಮತ್ತು ಗೌರವಿಸುವ ದಿನವಾಗಿದೆ ಎಂದರು.ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ತಳವಾರ ನರಸಿಂಹ ತಮ್ಮ ಉಪನ್ಯಾಸದಲ್ಲಿ, ಅಂಬೇಡ್ಕರ್ ಅವರ ಜೀವನ ಸಾಧನೆ, ಸಂವಿಧಾನದ ರಚನೆ, ಅದರಲ್ಲಿನ ಪ್ರಮುಖ ಅಂಶಗಳ ಕುರಿತು ತಿಳಿಸಿದರಲ್ಲದೆ, ಅಂಬೇಡ್ಕರ್ ಹಾಗೂ ಸಂವಿಧಾನದ ಅಂಶಗಳನ್ನು ಮನೆಮನೆಗೆ ತಲುಪಿಸುವ ಕಾರ್ಯವಾಗಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಐ.ಆರ್. ಅಕ್ಕಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂವಿಧಾನ ದಿನಾಚರಣೆ ಪ್ರಯುಕ್ತ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯ್ತಿ ಇಒ ಮಡಗಿನ ಬಸಪ್ಪ, ಶಿರಸ್ತೆದಾರ್ ಕೆ.ಎಂ. ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎನ್.ಕೆ. ವೆಂಕಟೇಶ್, ಪುರಸಭೆ ಮುಖ್ಯಾಧಿಕಾಡಿ ವಿನಯಕುಮಾರ್ ಗೌಡ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ದಣ್ಣ ಯಳವಾರ, ನಿವೃತ್ತ ಉಪನ್ಯಾಸಕ ಬಸವರಾಜ ಮಸೂತಿ, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ವಿವಿಧ ಶಾಲಾ ಕಾಲೇಜುಗಳ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.