ಕೊಪ್ಪಳ: ಜಿಲ್ಲೆಯ ಪ್ರವಾಸಿ ಕೇಂದ್ರಗಳಲ್ಲಿನ ಹೋಂಸ್ಟೇಗಳಿಗೆ ನಿಯಮಾನುಸಾರ ಅನುಮತಿ ನೀಡುವ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಾ. ಸುರೇಶ ಬಿ. ಇಟ್ನಾಳ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಕಲ್ಯಾಣ ಕರ್ನಾಟಕ ಭಾಗದ ಡೆಸ್ಟಿನೇಶನ್ ಡೆವಲಪ್‌ಮೆಂಟ್ ಯೋಜನೆಯಡಿ ಜಿಲ್ಲೆಯ ಅಶೋಕ ಶಾಸನ, ಪಾಲ್ಕಿಗುಂಡು ಶಾಸನ ಹಾಗೂ ಕಿನ್ನಾಳ ಕಲೆಯ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಮಾತನಾಡಿ, ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ಜತೆಗೆ ಪಾರಂಪರಿಕ ಸ್ಥಳಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಸಹಾಯಕ ಆಯುಕ್ತ ಮೊಹಮ್ಮದ್ ಜೀಲಾನಿ, ಹಂಪಿ ಪಾರಂಪರಿಕ ಅಭಿವೃದ್ಧಿ ಕ್ಷೇತ್ರದ ಆಯುಕ್ತ ಬಾಲಕೃಷ್ಣ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ್, ಉಪ ಅರಣ್ಯ ಸಂರಕ್ಷಣಾಧಿಕಾರಿ (ಸಾಮಾಜಿಕ ವಲಯ) ಹುಸೇನ್, ಗಂಗಾವತಿ ತಹಸೀಲ್ದಾರ್ ವಿನಾಯಕ ಗೋಡ್ಬೋಲೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಕೆಟಿಐಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.