ಕಾಲಕಾಲಕ್ಕೆ ಚುನಾವಣೆ ನಡೆದರೆ ಅನುದಾನ ಬಿಡುಗಡೆ

KannadaprabhaNewsNetwork |  
Published : Jan 30, 2025, 12:33 AM IST
5ನೇ ರಾಜ್ಯ ಹಣಕಾಸು ಆಯೋಗದ ವಿಷಯಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿ. ನಾರಾಯಣಸ್ವಾಮಿ | Kannada Prabha

ಸಾರಾಂಶ

ಸ್ಥಳೀಯ ಸಂಸ್ಥೆಗಳಿಗೆ ಕಾಲ ಕಾಲಕ್ಕೆ ಚುನಾವಣೆಗಳು ನಡೆದಾಗ ಮಾತ್ರ, ಹಣಕಾಸು ಆಯೋಗವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆ ಮಾಡಲಿದೆ ಎಂದು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ: ಸಿ. ನಾರಾಯಣಸ್ವಾಮಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರು

ಸ್ಥಳೀಯ ಸಂಸ್ಥೆಗಳಿಗೆ ಕಾಲ ಕಾಲಕ್ಕೆ ಚುನಾವಣೆಗಳು ನಡೆದಾಗ ಮಾತ್ರ, ಹಣಕಾಸು ಆಯೋಗವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆ ಮಾಡಲಿದೆ ಎಂದು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ: ಸಿ. ನಾರಾಯಣಸ್ವಾಮಿ ತಿಳಿಸಿದರು.

ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ 5ನೇ ರಾಜ್ಯ ಹಣಕಾಸು ಆಯೋಗದ ವಿಷಯಗಳ ಕುರಿತು ಜಿಲ್ಲಾ ಪಂಚಾಯತಿಯಲ್ಲಿ ಬುಧವಾರ ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೇಂದ್ರ ಹಣಕಾಸು ಆಯೋಗವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಹಂಚಿಕೆ ಮಾಡುವ ಸಂದರ್ಭದಲ್ಲಿ ರಾಜ್ಯ ಹಣಕಾಸು ಆಯೋಗದ ಶಿಫಾರಸ್ಸುಗಳನ್ನು ಗಮನದಲ್ಲಿಟ್ಟುಕೊಂಡು ಹಂಚಿಕೆ ಮಾಡಲಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ ನಿರ್ಮಾಣ, ವಿದ್ಯುತ್ ಸೇರಿದಂತೆ ಜನಸಾಮಾನ್ಯರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಸ್ಥಳೀಯ ಸಂಸ್ಥೆಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ತೆರಿಗೆ ಮೊದಲು-ಸೇವೆ ನಂತರ ಎಂಬ ಧ್ಯೇಯ ವಾಕ್ಯದಡಿ, ತೆರಿಗೆಯನ್ನು ಸಂಪೂರ್ಣವಾಗಿ ಪಾವತಿಸಿ ಸರ್ಕಾರದ ಸೇವೆಗಳನ್ನು ಪಡೆಯಬೇಕೆಂಬ ಸಂದೇಶವನ್ನು ಜನರಿಗೆ ಮುಟ್ಟಿಸಬೇಕು. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತೆರಿಗೆ ವಸೂಲಾತಿ ಮಾಡುವ ಮೂಲಕ ಸ್ಥಳೀಯವಾಗಿ ಆರ್ಥಿಕ ಸಂಪನ್ಮೂಲವನ್ನು ಹೆಚ್ಚಿಸಿಕೊಳ್ಳಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಸಂಗ್ರಹವಾದ ಆರ್ಥಿಕ ಸಂಪನ್ಮೂಲವನ್ನು ಕ್ರೂಢೀಕರಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ವಿನಿಯೋಗಿಸಬೇಕು. ತೆರಿಗೆ ನಿರ್ಧರಣೆ, ವಸೂಲಾತಿ, ವಿನಾಯಿತಿ ಹಾಗೂ ತೆರಿಗೆ ನಿಯಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ತುರುವೇಕೆರೆ ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಸ್ವಪ್ನಾ ಮಾತನಾಡಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಿಬ್ಬಂದಿಗಳ ಕೊರತೆಯಿದ್ದು, ಜನಸಂಖ್ಯೆ ಅನುಗುಣವಾಗಿ ಸಿಬ್ಬಂದಿಗಳನ್ನು ನೇಮಕ ಮಾಡಲು ಕ್ರಮಕೈಗೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಬಿಡುಗಡೆ ಮಾಡುವ ಅನುದಾನ ಸಾಕಾಗುವುದಿಲ್ಲ. ಹೆಚ್ಚುವರಿ ಅನುದಾನವನ್ನು ಬಿಡುಗಡೆ ಮಾಡಬೇಕೆಂದು ಆಯೋಗಕ್ಕೆ ಮನವಿ ಮಾಡಿದರು.

ಗುಬ್ಬಿ ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಮಂಗಳಮ್ಮ ರಾಜಣ್ಣ ಮಾತನಾಡಿ, ಗುಬ್ಬಿ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೀದಿ ನಾಯಿಗಳನ್ನು ನಿಯಂತ್ರಿಸಲು ಸ್ಥಳೀಯ ಸಂಸ್ಥೆಗೆ ಕಷ್ಟಸಾಧ್ಯವಾಗಿದೆ. ಗುಬ್ಬಿ ಪಟ್ಟಣ ಪಂಚಾಯತಿಯಲ್ಲಿ ಪೌರ ಕಾರ್ಮಿಕರ ಸಂಖ್ಯೆಯೂ ಕಡಿಮೆಯಿದ್ದು, ಪಟ್ಟಣದ ಸ್ವಚ್ಛತೆ ಕಾಪಾಡಲು ಸಮಸ್ಯೆ ಉಂಟಾಗಿದೆ. ಎಂಜಿನಿಯರುಗಳಿಗೆ ಎರಡೆರಡು ನಗರ ಸ್ಥಳೀಯ ಸಂಸ್ಥೆಗಳ ಕರ್ತವ್ಯ ನಿಭಾಯಿಸಲು ನಿಯೋಜಿಸಿರುವುದರಿಂದ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ವಿಳಂಬವಾಗುತ್ತಿದ್ದು, ಶೀಘ್ರವೇ ಖಾಲಿ ಹುದ್ದೆಗಳ ನೇಮಕಕ್ಕೆ ಕ್ರಮಕೈಗೊಳ್ಳಬೇಕೆಂದು ಆಯೋಗಕ್ಕೆ ಮನವಿ ಮಾಡಿದರು.

ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಮಂಜೂರಾದ ಹುದ್ದೆ, ಭರ್ತಿಯಾದ ಹುದ್ದೆ, ಖಾಲಿ ಇರುವ ಹುದ್ದೆ, ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ವಿವರ, ಸಂಸ್ಥೆಗಳ ಆಯವ್ಯಯ ಹಾಗೂ ವೆಚ್ಚಗಳ ವಿವರ, ವಾಸ್ತವಿಕವಾಗಿ ಬಿಡುಗಡೆಯಾದ ಅನುದಾನ, ಕೇಂದ್ರ ಮತ್ತು ರಾಜ್ಯ ಹಣಕಾಸು ಆಯೋಗದ ಅನುದಾನ ಹಂಚಿಕೆ ಹಾಗೂ ವೆಚ್ಚ, ತೆರಿಗೆ ವಸೂಲಾತಿ, ಆದಾಯ ಹೆಚ್ಚಿಸಲು ಕೈಗೊಂಡಿರುವ ಕ್ರಮಗಳು, ಇ-ಸ್ವತ್ತು ಅನುಷ್ಟಾನದಲ್ಲಿರುವ ಸಮಸ್ಯೆ ಹಾಗೂ ಪರಿಹಾರ, ಬಾಪೂಜಿ ಸೇವಾ ಕೇಂದ್ರಗಳ ಮೂಲಕ ನೀಡುತ್ತಿರುವ ಸೇವೆಗಳ ವಿವರದ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದರು.

ನಂತರ 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ. ಸಿ. ನಾರಾಯಣಸ್ವಾಮಿ ಮಾತನಾಡಿ, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಂದ ಪಡೆದ ಸಲಹೆಗಳನ್ನು ಅಂತಿಮ ವರದಿಯಲ್ಲಿ ದಾಖಲಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಗ್ರಾಮ ಪಂಚಾಯತಿಗಳ ಆದಾಯ ಹೆಚ್ಚಿಸಲು ತೆರಿಗೆ ವಸೂಲಾತಿ ಮಾಸಾಚರಣೆ ಹಮ್ಮಿಕೊಳ್ಳಲಾಗಿದೆ. ಆನ್‌ಲೈನ್ ಸೇವೆಗಳಿಂದ ತೆರಿಗೆ ವಸೂಲಾತಿ ಪಾರದರ್ಶಕವಾಗಿ ನಡೆಯುತ್ತಿದೆ. ತೆರಿಗೆ ವಸೂಲಾತಿಯನ್ನು ಪಂಚ ತಂತ್ರ 2.0 ತಂತ್ರಾಂಶದಲ್ಲಿ ಅನುಷ್ಟಾನಗೊಳಿಸುತ್ತಿರುವುದರಿಂದ ತೆರಿಗೆ ಲೆಕ್ಕಾಚಾರ ಸರಳಗೊಂಡಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಆಯೋಗದ ಸದಸ್ಯರಾದ ಮೊಹಮದ್ ಸನಾವುಲ್ಲಾ, ಆರ್.ಎಸ್. ಪೋಂಡೆ, ಕಾರ್ಯದರ್ಶಿ ಉಜ್ವಲ್ ಕುಮಾರ್ ಘೋಷ್, ಸಮಾಲೋಚಕರಾದ ಎಂ.ಕೆ. ಕೆಂಪೇಗೌಡ ಹಾಗೂ ಜಿ. ಸುಪ್ರಸನ್ನ, ಅಧ್ಯಕ್ಷರ ಆಪ್ತಕಾರ್ಯದರ್ಶಿ ಯಾಲಕ್ಕಿಗೌಡ ಹಾಜರಿದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...